ಹೆಣ್ಣು ಭ್ರೂಣ ಹತ್ಯೆ ತಡೆಗೆ ಈಗಾಗಲೇ ಆರೋಗ್ಯ ಇಲಾಖೆ ಕಾರ್ಯಪಡೆಗಳನ್ನ ರಚಿಸಿದ್ದು, ಇನ್ನಷ್ಟು ಬಿಗಿ ಕ್ರಮಗಳನ್ನ ಕೈಗೊಳ್ಳುವುದಾಗಿ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದರು.
ಬೆಂಗಳೂರಿನ ಆರೋಗ್ಯ ಸೌಧದಲ್ಲಿ ಇಂದು ರಾಷ್ಟ್ರೀಯ ಹೆಣ್ಣು ಮಕ್ಕಳ ದಿನಾಚರಣೆಯಲ್ಲಿ ಪಾಲ್ಗೊಂಡು ಸಚಿವರು ಮಾತನಾಡಿದರು.
“ರಾಜ್ಯದಲ್ಲಿ ಭ್ರೂಣ ಹತ್ಯೆ ಈ ಪ್ರಮಾಣದಲ್ಲಿ ನಡೆಯುತ್ತಿರುವುದು ಆತಂಕಕಾರಿ ಬೆಳವಣಿಗೆ. ಇದನ್ನ ಸಹಿಸಲು ಸಾಧ್ಯವಿಲ್ಲ. ಇವತ್ತಿನ ಕಾಲಘಟ್ಟದಲ್ಲೂ ಹೆಣ್ಣು ಮಕ್ಕಳ ಸುರಕ್ಷತೆ ಬಗ್ಗೆ ನಾವು ಜಾಗೃತಿ ಮೂಡಿಸುವ ಪರಿಸ್ಥಿತಿ ಎದುರಾಗಿದೆ. ಆದರೆ ಸರ್ಕಾರ ಹೆಣ್ಣು ಮಕ್ಕಳ ಸುರಕ್ಷಿತೆಗೆ ಎಲ್ಲ ರೀತಿಯ ಬಿಗಿ ಕ್ರಮಗಳನ್ನ ತೆಗೆದುಕೊಳ್ಳುತ್ತಿದೆ” ಎಂದರು.
“ಭ್ರೂಣ ಹತ್ಯೆಗಳನ್ನ ತಡೆಯಲು ಈಗಾಗಲೇ ರಾಜ್ಯ ಸರ್ಕಾರ ಜಿಲ್ಲಾ ಹಾಗೂ ರಾಜ್ಯ ಮಟ್ಟದಲ್ಲಿ ಕಾರ್ಯಪಡೆಗಳನ್ನ ರಚಿಸಿದೆ. ಭ್ರೂಣ ಹತ್ಯೆ ನಡೆಸುವವರ ವಿರುದ್ಧ ಆರೋಗ್ಯ ಇಲಾಖೆ ನಡೆಸುತ್ತಿರುವ ಕಾರ್ಯಾಚರಣೆಗಳನ್ನ ಇನ್ನಷ್ಟು ಹೆಚ್ಚಿಸಲಾಗುವುದು. ನಕಲಿ ವೈದ್ಯರು ಹಾಗೂ ಕ್ಲಿನಿಕ್ ಗಳ ಮೇಲೆ ದಾಳಿ ನಡೆಸಲಾಗುತ್ತಿದೆ. ನಕಲಿ ವೈದ್ಯರ ವಿರುದ್ಧದ ಕಾರ್ಯಾಚರಣೆ ಮುಂದುವರಿಸುತ್ತೇವೆ” ಎಂದು ದಿನೇಶ್ ಗುಂಡೂರಾವ್ ಸ್ಪಷ್ಟಪಡಿಸಿದರು.
ರಾಷ್ಟ್ರೀಯ ಹೆಣ್ಣು ಮಕ್ಕಳ ದಿನಾಚರಣೆಯ ಅಂಗವಾಗಿ ಆರೋಗ್ಯ ಸೌಧದಲ್ಲಿ ಪಿಂಕ್ ಬಲೂನ್ ಗಳನ್ನ ತೇಲಿ ಬಿಡಲಾಯಿತು. ಕಾರ್ಯಕ್ರಮದಲ್ಲಿ ಆರೋಗ್ಯ ಇಲಾಖೆ ಪ್ರಧಾನ ಕಾರ್ಯದರ್ಶಿ ಅನೀಲ್ ಕುಮಾರ್, ಆರೋಗ್ಯ ಇಲಾಖೆ ಆಯುಕ್ತ ರಂದೀಪ್ ಸೇರಿದಂತೆ ಸಾವಿರಾರು ಮಹಿಳಾ ಸಿಬ್ಬಂದಿಗಳು ಪಾಲ್ಗೊಂಡಿದ್ದರು. ಬೃಹತ್ ಕೇಕ್ ಕಟ್ ಮಾಡುವ ಮೂಲಕ ರಾಷ್ಟ್ರೀಯ ಹೆಣ್ಣು ಮಕ್ಕಳ ದಿನಾಚಾರಣೆ ಆಚರಿಸಲಾಯಿತು.