ಬಿಜೆಪಿ ತೊರೆದಿದ್ದ ಮಾಜಿ ಸಂಸದ ಎಸ್ ಪಿ ಮುದ್ದಹನುಮೇಗೌಡ ಗುರುವಾರ ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ಅಧಿಕೃತವಾಗಿ ಕಾಂಗ್ರೆಸ್ ಸೇರ್ಪಡೆಯಾದರು.
ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್, ಮುಖ್ಯಮಂತ್ರಿ ಸಿದ್ದರಾಮಯ್ಯ ಸಮ್ಮುಖದಲ್ಲಿ ಕಾಂಗ್ರೆಸ್‌ಗೆ ಮರಳಿದ್ದಾರೆ. ಸಚಿವರಾದ ಡಾ ಜಿ ಪರಮೇಶ್ವರ, ಕೆ ಎನ್ ರಾಜಣ್ಣ, ಕೆಪಿಸಿಸಿ ಕಾರ್ಯಾಧ್ಯಕ್ಷರಾದ ಸಲೀಮ್ ಅಹ್ಮದ್, ಬಿ ಎನ್ ಚಂದ್ರಪ್ಪ, ಮಾಜಿ ಸಚಿವ ವೆಂಕಟರಮಣಪ್ಪ ಮತ್ತಿತರರು ಉಪಸ್ಥಿತರಿದ್ದರು.
ಕಳೆದ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್– ಜೆಡಿಎಸ್ ಮೈತ್ರಿಯಿಂದಾಗಿ ತುಮಕೂರು ಕ್ಷೇತ್ರವನ್ನು ಜೆಡಿಎಸ್‌ಗೆ ಬಿಟ್ಟುಕೊಡಲಾಗಿತ್ತು. ಹಾಲಿ ಸಂಸದರಾಗಿದ್ದ ಮುದ್ದಹನುಮೇಗೌಡ ಸ್ಪರ್ಧಿಸಲು ಸಾಧ್ಯವಾಗಿರಲಿಲ್ಲ. ನಂತರವೂ ಪಕ್ಷದಲ್ಲಿ ಯಾವುದೇ ಸ್ಥಾನಮಾನ ಸಿಕ್ಕಿರಲಿಲ್ಲ.
ವಿಧಾನಸಭೆ ಚುನಾವಣೆ ಸಮಯದಲ್ಲಿ ಕುಣಿಗಲ್ ಕ್ಷೇತ್ರದಿಂದ ಕಾಂಗ್ರೆಸ್ ಟಿಕೆಟ್ ಬಯಸಿದ್ದರು. ಟಿಕೆಟ್ ಸಿಗುವುದಿಲ್ಲ ಎಂಬುದು ಖಚಿತವಾಗುತ್ತಿದ್ದಂತೆ ಬಿಜೆಪಿ ಸೇರಿದ್ದರು. ಆ ಪಕ್ಷದಲ್ಲೂ ಕುಣಿಗಲ್ ಕ್ಷೇತ್ರದಿಂದ ಕಣಕ್ಕಿಳಿಯಲು ಟಿಕೆಟ್ ಸಿಗಲಿಲ್ಲ. ಲೋಕಸಭೆಗೆ ಬಿಜೆಪಿಯಿಂದ ಟಿಕೆಟ್ ಸಿಗಬಹುದು ಎಂಬ ಆಶಾಭಾವನೆಯಲ್ಲಿ ಇದ್ದರು. ಬದಲಾದ ರಾಜಕೀಯ ಲೆಕ್ಕಾಚಾರದಲ್ಲಿ ಟಿಕೆಟ್ ಸಿಗುವುದು ಖಾತರಿಯಾಗದೆ ಬಿಜೆಪಿಯಿಂದ ಅಂತರ ಕಾಯ್ದುಕೊಂಡಿದ್ದರು.
ಕಾಂಗ್ರೆಸ್‌ಗೆ ಮತ್ತೆ ಮರಳಿರುವ ಮುದ್ದುಹನುಮೇಗೌಡ ಲೋಕಸಭೆಗೆ ಸ್ಪರ್ಧಿಸಲು ಅವಕಾಶ ಸಿಗುವ ನಿರೀಕ್ಷೆಯಲ್ಲಿದ್ದಾರೆ ಎನ್ನಲಾಗಿದೆ.