ರಾಜ್ಯದ ಬೊಕ್ಕಸ ಖಾಲಿಯಾಗಿದೆ. ಶಿಕ್ಷಕರಿಗೆ ವೇತನ ನೀಡಲಾಗುತ್ತಿಲ್ಲ. ನರೇಗಾ ಬಾಕಿ ಬೆಟ್ಟದಂತಿದೆ. ಗೃಹ ಲಕ್ಷ್ಮಿ ಫಲಾನುಭವಿಗಳಿಗೆ ಹಣ ನೀಡಿಲ್ಲ ಎಂದು ಮಾಜಿ ಸಿಎಂ ಬಿ ಎಸ್ ಯಡಿಯೂರಪ್ಪ ಆರೋಪಿಸಿದರು.
ಬೆಂಗಳೂರಿನಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಅವರು, “ದುರಾಡಳಿತ ಹಾಗೂ ದೂರದೃಷ್ಟಿ ಇಲ್ಲದ ಕಾರ್ಯಕ್ರಮಗಳಿಂದಾಗಿ ರಾಜ್ಯದ ಹಣಕಾಸು ಪರಿಸ್ಥಿತಿ ಸಂಪೂರ್ಣ ಹದಗೆಟ್ಟಿದ್ದು, ಸರ್ಕಾರಿ ನೌಕರರಿಗೆ ಸಂಬಳ ಕೊಡಲು ಸಾಧ್ಯವಿಲ್ಲದಂತಾಗಿದೆ” ಎಂದು ಆಪಾದಿಸಿದರು.
“ಗ್ಯಾರಂಟಿ ಯೋಜನೆಗಳಿಗೆ, ಬರ ಎದುರಿಸಲು ಅಷ್ಟೇ ಏಕೆ ಸರ್ಕಾರಿ ನೌಕರರಿಗೆ ಸಂಬಳ ನೀಡಲು ಈ ಸರ್ಕಾರದ ಬಳಿ ಹಣ ಇಲ್ಲ. ಸರ್ಕಾರ ದಿವಾಳಿಯಾಗಿದೆ. ಈ ಹಿಂದೆ ಬಿಜೆಪಿ ಸರ್ಕಾರವಿದ್ದಾಗ ಸರ್ಕಾರಿ ನೌಕರರ ಏಳನೇ ವೇತನ ಆಯೋಗ ರಚಿಸಿ ಮಧ್ಯಂತರ ಪರಿಹಾರವನ್ನು ನೀಡಲಾಗಿತ್ತು. ಆದರೆ, ಕಾಂಗ್ರೆಸ್ ಸರ್ಕಾರ ಕುಂಟು ನೆಪ ಹೇಳಿ ವೇತನ ಆಯೋಗದ ಅವಧಿ ವಿಸ್ತರಿಸಿದೆ” ಎಂದು ಕಿಡಿಕಾರಿದರು.
“ಬಿಜೆಪಿ ನೇತೃತ್ಬದ ಸರ್ಕಾರವಿದ್ದಾಗ ಕರ್ನಾಟಕ ದೇಶದಲ್ಲೆ ಹೆಚ್ಚು ಅಭಿವೃದ್ಧಿ ಹೊಂದಿದ ರಾಜ್ಯವಾಗಿತ್ತು. ಕಾಂಗ್ರೆಸ್ ಅಧಿಕಾರಕ್ಕೆ ಬಂದ ನಂತರ ಅಭಿವೃದ್ಧಿ ಸ್ಥಗಿತಗೊಂಡಿದೆ. ಎಲ್ಲ ರಂಗಗಳಲ್ಲೂ ಕಾಂಗ್ರೆಸ್ ವಿಫಲವಾಗಿದೆ” ಎಂದರು.
“ಕಾಂಗ್ರೆಸ್ ಸರ್ಕಾರ ಬದುಕಿದ್ದು ಸತ್ತಂತಾಗಿದೆ. ಕುಂಟು ನೆಪ ಹೇಳಿಕೊಂಡು ಕಾಂಗ್ರೆಸ್‌ನವರು ಕಾಲಹರಣ ಮಾಡುತ್ತಿದ್ದಾರೆ. ಬಹಳ ಕಾಲ ಇವರನ್ನು ಹೀಗೆ ಬಿಡಲು ಸಾಧ್ಯವಿಲ್ಲ. ನಮ್ಮ ಮುಖಂಡರ ಜತೆ ಚರ್ಚಿಸಿ ಕಾಂಗ್ರೆಸ್ ಸರ್ಕಾರದ ವಿರುದ್ಧ ಹೋರಾಟ ರೂಪುರೇಷೆಗಳನ್ನು ನಿರ್ಧರಿಸುತ್ತೇವೆ” ಎಂದು ತಿಳಿಸಿದರು.