Homeಕರ್ನಾಟಕವಿದ್ಯುತ್‌ ಕಳ್ಳತನ ಮಾಡುವಷ್ಟು ದಾರಿದ್ರ್ಯ ಕುಮಾರಸ್ವಾಮಿಗೆ ಬಂತಾ?: ಕಾಂಗ್ರೆಸ್‌ ಕಿಡಿ

ವಿದ್ಯುತ್‌ ಕಳ್ಳತನ ಮಾಡುವಷ್ಟು ದಾರಿದ್ರ್ಯ ಕುಮಾರಸ್ವಾಮಿಗೆ ಬಂತಾ?: ಕಾಂಗ್ರೆಸ್‌ ಕಿಡಿ

ರಾಜ್ಯ ಬರ ಎದುರಿಸುತ್ತಿರುವಾಗ ನಿಮ್ಮ ಮನೆ ಮಾತ್ರ ಜಗಮಗಿಸಬೇಕೆ? ರೈತರ ಪಾಲಿನ ವಿದ್ಯುತ್ ಕಳ್ಳತನ ಮಾಡಿ ಮೋಜು ಮಾಡಬೇಕೆ ಎಂದು ಮಾಜಿ ಸಿಎಂ ಎಚ್‌ ಡಿ ಕುಮಾರಸ್ವಾಮಿ ಅವರನ್ನು ಕಾಂಗ್ರೆಸ್‌ ಪ್ರಶ್ನೆ ಮಾಡಿದೆ.

ಕುಮಾರಸ್ವಾಮಿ ತಮ್ಮ ಮನೆಗೆ ವಿದ್ಯುತ್ ದೀಪಾಲಂಕಾರಕ್ಕೆ ಅನಧಿಕೃತವಾಗಿ ವಿದ್ಯುತ್​ ಸಂಪರ್ಕ ಪಡೆದ ಆರೋಪ ವಿಚಾರವಾಗಿ ಕಾಂಗ್ರೆಸ್‌ ಟ್ವೀಟ್‌ ಮಾಡಿ, “ಜಗತ್ತಿನ ಏಕೈಕ ಮಹಾಪ್ರಾಮಾಣಿಕ ಹೆಚ್.ಡಿ ಕುಮಾರಸ್ವಾಮಿಯವರ ಜೆ ಪಿ ನಗರದ ನಿವಾಸದ ದೀಪಾವಳಿಯ ದೀಪಾಲಂಕಾರಕ್ಕೆ ನೇರವಾಗಿ ವಿದ್ಯುತ್ ಕಂಬದಿಂದ ಅಕ್ರಮ ವಿದ್ಯುತ್ ಸಂಪರ್ಕ ಪಡೆದಿದ್ದಾರೆ” ಎಂದು ಟೀಕಿಸಿದೆ.

“ಒಬ್ಬ ಮಾಜಿ ಸಿಎಂ ಆಗಿ ವಿದ್ಯುತ್ ಕಳ್ಳತನ ಮಾಡುವ ದಾರಿದ್ರ್ಯ ಬಂದಿದ್ದು ದುರಂತ! ಕುಮಾರಸ್ವಾಮಿ ಅವರೇ ನಮ್ಮ ಸರ್ಕಾರ ಗೃಹಜ್ಯೋತಿಯಲ್ಲಿ 200 ಯೂನಿಟ್ ಉಚಿತ ಕೊಡುತ್ತಿದೆಯೇ ಹೊರತು 2000 ಯೂನಿಟ್ ಅಲ್ಲ! ತಮಗೆ ಅಷ್ಟೊಂದು ದಾರಿದ್ರ್ಯ ಬಂದಿದ್ದರೆ ಗೃಹಜ್ಯೋತಿ ಯೋಜನೆಗೆ ಒಂದು ಅರ್ಜಿ ಹಾಕಬಹುದಿತ್ತಲ್ಲ” ಎಂದು ಲೇವಡಿ ಮಾಡಿದೆ.

“ಒಹ್, ತಿಳಿದಿರಲಿಲ್ಲ ಗೃಹಜ್ಯೋತಿಯಲ್ಲಿ ಒಬ್ಬರಿಗೆ ಒಂದೇ ಮೀಟರ್‌ಗೆ ಅವಕಾಶವಿದೆ, ತಮ್ಮ ಹೆಸರಲ್ಲಿ ಹಲವು ಮೀಟರ್ ಗಳಿವೆಯಲ್ಲವೇ! ರಾಜ್ಯದ ವಿದ್ಯುತ್ ಕೊರತೆಯ ನಡುವೆಯೂ ರೈತರಿಗೆ 7 ಗಂಟೆ ವಿದ್ಯುತ್ ಕೊಡುವ ಕ್ರಮ ಕೈಗೊಂಡಿದ್ದರೂ ಪುಂಖಾನುಪುಂಕವಾಗಿ ಮಾತಾನಾಡುವ ತಾವು ಇಂತಹ ಚೀಪ್ ಕಳ್ಳತನಕ್ಕೆ ಇಳಿಯುವಷ್ಟು “ಬರ” ಎದುರಿಸುತ್ತಿದ್ದೀರಾ?” ಎಂದು ವ್ಯಂಗ್ಯವಾಡಿದೆ.

“ಅದೇನೋ ಪತ್ರಿಕಾಗೋಷ್ಠಿ ನಡೆಸಿ “ಕರ್ನಾಟಕ ಕತ್ತಲಲ್ಲಿದೆ“ ಎನ್ನುತ್ತಾ ಬಡಬಡಿಸಿದ್ದಿರಲ್ಲವೇ, ಈಗ ಕದ್ದ ವಿದ್ಯುತ್ತಿನಲ್ಲಿ ನಿಮ್ಮ ಮನೆಗೆ ಬೆಳಕು ಮಾಡಿಕೊಂಡಿದ್ದೀರಿ, ನಿಮ್ಮ ಮನೆ ಹೀಗೆ ಜಗಮಗ ಹೊಳೆಯುತ್ತಿರುವಾಗ ಅದ್ಯಾವ ಬಾಯಲ್ಲಿ ಕರ್ನಾಟಕ ಕತ್ತಲಲ್ಲಿದೆ ಎನ್ನುವಿರಿ ಸ್ವಾಮಿ?! ನಿಮ್ಮದೇ ಶೈಲಿಯ ಪ್ರಶ್ನೆ ಕೇಳಬೇಕೆಂದರೆ, ರಾಜ್ಯ ಬರ ಎದುರಿಸುತ್ತಿರುವಾಗ ನಿಮ್ಮ ಮನೆ ಮಾತ್ರ ಜಗಮಗಿಸಬೇಕೆ? ರೈತರ ಪಾಲಿನ ವಿದ್ಯುತ್ ಕಳ್ಳತನ ಮಾಡಿ ಮೋಜು ಮಾಡಬೇಕೆ” ಎಂದು ಪ್ರಶ್ನಿಸಿದೆ.

“ನಿಮ್ಮ ಮನೆಯ ದೀಪಾವಳಿಗೆ ರಾಜ್ಯದ ಜನರ “ದಿವಾಳಿ”ಯನ್ನು ಬಯಸುತ್ತಿದ್ದೀರಾ? ವಿದ್ಯುತ್ತನ್ನೇ ಬಿಡದೆ ಲೂಟಿ ಮಾಡುವ ತಾವು ರಾಜ್ಯವನ್ನು ಇನ್ನೆಷ್ಟು ಲೂಟಿ ಮಾಡಿರಬಹುದು?” ಎಂದು ಕುಟುಕಿದೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments