Homeಕರ್ನಾಟಕಎಸ್‌ಎಸ್‌ಎಲ್‌ಸಿ ಮಕ್ಕಳ ಕಿಸೆಗೂ ಕೈ ಹಾಕಿದ ಸರ್ಕಾರ: ಎಚ್‌ ಡಿ ಕುಮಾರಸ್ವಾಮಿ ಆರೋಪ

ಎಸ್‌ಎಸ್‌ಎಲ್‌ಸಿ ಮಕ್ಕಳ ಕಿಸೆಗೂ ಕೈ ಹಾಕಿದ ಸರ್ಕಾರ: ಎಚ್‌ ಡಿ ಕುಮಾರಸ್ವಾಮಿ ಆರೋಪ

ಒಂದು ಕೈಯ್ಯಲ್ಲಿ ಕೊಟ್ಟು ಹತ್ತು ಕೈಗಳಲ್ಲಿ ರಾವಣನಂತೆ ಕಸಿದುಕೊಳ್ಳುತ್ತಿರುವ ರಾಜ್ಯ ಸರಕಾರ, ಈಗ ಎಸ್‌ಎಸ್‌ಎಲ್‌ಸಿ ಮಕ್ಕಳ ಕಿಸೆಗೂ ಕೈ ಹಾಕಿದೆ ಎಂದು ಮಾಜಿ ಸಿಎಂ ಎಚ್‌ ಡಿ ಕುಮಾರಸ್ವಾಮಿ ವಾಗ್ದಾಳಿ ನಡೆಸಿದ್ದಾರೆ.

ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್‌ ನಲ್ಲಿ ಪೋಸ್ಟ್‌ ಮಾಡಿರುವ ಅವರು, “ಜನತೆಗೆ 5 ಗ್ಯಾರಂಟಿ ಕೊಟ್ಟೆವು ಎಂದು ಬಡಾಯಿ ಕೊಚ್ಚಿಕೊಳ್ಳುತ್ತಿರುವ ರಾಜ್ಯ ಕಾಂಗ್ರೆಸ್‌ ಸರಕಾರದ ಆಡಳಿತ ಅದೆಷ್ಟು ಅಧಃಪತನಕ್ಕೆ ಹೋಗಿದೆ ಎನ್ನುವುದಕ್ಕೆ ಸಾಕ್ಷ್ಯ ಇಲ್ಲಿದೆ” ಎಂದಿದ್ದಾರೆ.

“ಅಕ್ರಮ ಸುಲಿಗೆಯಲ್ಲಿ ‘ಸಿದ್ದಹಸ್ತ’ವಾಗಿರುವ ಸರಕಾರ, ಈಗ ಕಾನೂನು ಬದ್ಧವಾಗಿಯೇ ಸುಲಿಗೆ ಮಾಡುತ್ತಿದೆ, ಅದೂ ಲಜ್ಜೆಗೆಟ್ಟು. ಇದೇ ಫೆಬ್ರವರಿ 26ರಿಂದ ಮಾರ್ಚ್ 3ರವರೆಗೂ ನಡೆಯಲಿರುವ 2023-24ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪೂರ್ವ ಸಿದ್ಧತಾ ಪರೀಕ್ಷೆಗೆ ಆಗುವ ವೆಚ್ಚವನ್ನು ನಾಚಿಕೆಗೆಟ್ಟ ಸರಕಾರ ಮಕ್ಕಳಿಂದಲೇ ವಸೂಲಿ ಮಾಡಲು ಹೊರಟಿದೆ” ಎಂದು ಕಿಡಿಕಾರಿದರು.

“ಪ್ರಶ್ನೆಪತ್ರಿಕೆ ತಯಾರಿ, ಮುದ್ರಣ, ಸಾಗಣೆ ವೆಚ್ಚವನ್ನು ವಿದ್ಯಾರ್ಥಿಗಳ ಮೇಲೆಯೇ ಹೇರಲು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಅಧ್ಯಕ್ಷರು ಆದೇಶಿಸಿದ್ದಾರೆ. ವೆಚ್ಚ ವಸೂಲಿ ಮಾಡುವಂತೆ ಎಲ್ಲಾ ಸರಕಾರಿ ಶಾಲೆಗಳ ಮುಖ್ಯ ಶಿಕ್ಷಕರಿಗೆ ಆದೇಶಿಸಿರುವುದು ಸರಕಾರ ಎಷ್ಟರ ಮಟ್ಟಿಗೆ ದಿವಾಳಿಯೆದ್ದು ಹೋಗಿದೆ ಎನ್ನುವುದಕ್ಕೆ ಉದಾಹರಣೆ” ಎಂದು ಹರಿಹಾಯ್ದಿದ್ದಾರೆ.

“ಸರಕಾರಿ ಶಾಲೆಗಳ ಮುಖ್ಯ ಶಿಕ್ಷಕರು ವೆಚ್ಚ ವಸೂಲಿ ಮಾಡಿ, ಆ ಮೊತ್ತವನ್ನು ಇಲಾಖೆ ಉಪ ನಿರ್ದೇಶಕರು (ಆಡಳಿತ), ಇವರ ಖಾತೆಗೆ ಜಮೆ ಮಾಡಬೇಕು ಎಂದು ಅವರು ಫರ್ಮಾನು ಹೊರಡಿಸಿದ್ದಾರೆ” ಎಂದಿದ್ದಾರೆ.

“ಗ್ಯಾರಂಟಿ ಕೊಟ್ಟು ಬಡವರ ಉದ್ಧಾರ ಮಾಡುತ್ತಿದ್ದೇವೆ ಎಂದು ಬೀಗುವ ಸರಕಾರಕ್ಕೆ, ಅದೇ ಬಡಮಕ್ಕಳಿಗೆ 50 ರೂ. ಖರ್ಚು ಮಾಡಲು ಗತಿ ಇಲ್ಲವೇ? ಈಗಾಗಲೇ ಬರದಿಂದ ಕಂಗೆಟ್ಟಿರುವ ರಾಜ್ಯದ ಜನರಿಗೆ ಸರಕಾರ ಬರೆಯ ಮೇಲೆ ಬರೆ ಎಳೆಯುತ್ತಿದೆ. ಕೂಡಲೇ ಈ ಆದೇಶವನ್ನು ವಾಪಸ್ ಪಡೆಯಬೇಕು, ಪರೀಕ್ಷೆ ವೆಚ್ಚವನ್ನು ಸರಕಾರವೇ ಭರಿಸಬೇಕು” ಎಂದು ಆಗ್ರಹಿಸಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments