ಜೆಡಿಎಸ್ ನಾಯಕ ಹೆಚ್ ಡಿ ಕುಮಾರಸ್ವಾಮಿ ಬುಧವಾರ ರಾತ್ರಿ ದೆಹಲಿಯಲ್ಲಿ ಗೃಹ ಸಚಿವ ಅಮಿತ್ ಶಾ ಮತ್ತು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಅವರನ್ನು ಭೇಟಿ ಮಾಡಿದ್ದಾರೆ.
ಜೆಡಿಎಸ್ – ಬಿಜೆಪಿ ಮೈತ್ರಿ ಹಿನ್ನೆಲೆಯಲ್ಲಿ ಮುಂಬರುವ ಲೋಕಸಭೆ ಚುನಾವಣೆ ತಯಾರಿ, ಸೀಟು ಹಂಚಿಕೆ ಸೇರಿದಂತೆ ಇನ್ನಿತರೆ ಹಲವಾರು ಮಹತ್ವದ ವಿಷಯಗಳ ಬಗ್ಗೆ ಸುದೀರ್ಘವಾಗಿ ಸಮಾಲೋಚನೆ ನಡೆಸಿದ್ದಾರೆ.
ಈ ಬಗ್ಗೆ ಟ್ವೀಟ್ ಮಾಡಿ ಮಾಹಿತಿ ಹಂಚಿಕೊಂಡಿರುವ ಕುಮಾರಸ್ವಾಮಿ, “ಮುಖ್ಯವಾಗಿ, ಕರ್ನಾಟಕದ ರಾಜಕೀಯ ವಿದ್ಯಮಾನಗಳ ಬಗ್ಗೆ ಬಿಜೆಪಿ ವರಿಷ್ಠ ನಾಯಕರ ಜತೆ ಚರ್ಚೆ ನಡೆಸಲಾಯಿತು. ರಾಜ್ಯದ ಬರ ಪರಿಸ್ಥಿತಿಯ ಬಗ್ಗೆ ಗೃಹ ಸಚಿವರಿಗೆ ಮಾಹಿತಿ ನೀಡಲಾಯಿತು” ಎಂದಿದ್ದಾರೆ.
ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಹಾಗೂ ಮಾಜಿ ಸಂಸದ ಕುಪೇಂದ್ರ ರೆಡ್ಡಿ ಅವರು ಜತೆಯಲ್ಲಿ ಇದ್ದರು.
ಜನವರಿ 22 ರಂದು ಅಯೋಧ್ಯೆಯಲ್ಲಿ ರಾಮಮಂದಿರ ಉದ್ಘಾಟನೆ ನಂತರ ಸೀಟು ಹಂಚಿಕೆ ಚರ್ಚೆ ನಡೆಯಲಿದೆ ಎಂದು ಸಭೆಯ ನಂತರ ಕುಮಾರಸ್ವಾಮಿ ಸುದ್ದಿಗಾರರಿಗೆ ಹೇಳಿದ್ದಾರೆ.
ಆರು ಸ್ಥಾನಗಳ ಮೇಲೆ ಕಣ್ಣಿಟ್ಟಿರುವ ಜೆಡಿಎಸ್ ಬಿಜೆಪಿ ನಾಯಕರ ಜತೆಗಿನ ಚರ್ಚೆ ವೇಳೆ ಜೆಡಿಎಸ್ಗೆ ಕನಿಷ್ಠ ನಾಲ್ಕು ಸ್ಥಾನಗಳ ಖಾತರಿ ದೊರೆತಿದೆ ಎನ್ನಲಾಗಿದೆ. ಆದರೆ, ಇನ್ನೆರಡು ಸ್ಥಾನಗಳಿಗೆ ಚೌಕಾಸಿ ಮಾಡುವತ್ತ ಜೆಡಿಎಸ್ ಕಣ್ಣಿಟ್ಟಿದೆ. ಮಂಡ್ಯ, ಹಾಸನ, ತುಮಕೂರು, ಕೋಲಾರದಲ್ಲಿ ಕಣಕ್ಕಿಳಿಯಲು ಜೆಡಿಎಸ್ ಯೋಚಿಸಿದೆ. ಬೆಂಗಳೂರು ಗ್ರಾಮಾಂತರ ಮತ್ತು ಚಿಕ್ಕಬಳ್ಳಾಪುರ ಕ್ಷೇತ್ರಗಳಲ್ಲಿ ಕೂಡ ಪಕ್ಷದ ಅಭ್ಯರ್ಥಿಗಳನ್ನೇ ಕಣಕ್ಕಿಳಿಸಲು ಜೆಡಿಎಸ್ ಚಿಂತನೆ ನಡೆಸಿದೆ ಎನ್ನಲಾಗಿದೆ.