ಬೆಂಗಳೂರು: ಶಾಲೆಗಳ ಬಳಿ ವಿಶೇಷ ಕಾರ್ಯಾಚರಣೆ ನಡೆಸುತ್ತಿದ್ದ ವೇಳೆ ಪುಟ್ಟ ಮಕ್ಕಳು ಹೆಲ್ಮೆಟ್ ಧರಿಸದಿರುವುದನ್ನು ಗಂಭೀರವಾಗಿ ಪರಿಗಣಿಸಿ ಆರು ವರ್ಷದ ಮೇಲ್ಪಟ್ಟ ಮಕ್ಕಳಿಗೆ ಹೆಲ್ಮೆಟ್ ಕಡ್ಡಾಯಗೊಳಿಸಿ ನಗರ ಸಂಚಾರ ಪೊಲೀಸರು ಆದೇಶ ಹೊರಡಿಸಿದ್ದಾರೆ.
ಬೆಂಗಳೂರು ನಗರದಲ್ಲಿ 6 ವರ್ಷ ಮೇಲ್ಪಟ್ಟ ಮಕ್ಕಳಿಗೆ ಹೆಲ್ಮೆಟ್ಕಡ್ಡಾಯವಾಗಿದ್ದು, ಶಾಲೆಗೆ ಬಿಡುವಾಗ ಮಕ್ಕಳಿಗೆ ಹೆಲ್ಮೆಟ್ ಕಡ್ಡಾಯವಾಗಿ ಹಾಕಬೇಕು ಎಂದು ಸಂಚಾರ ವಿಭಾಗದ ಜಂಟಿ ಪೊಲೀಸ್ ಆಯುಕ್ತ ಎಂ.ಎನ್.ಅನುಚೇತ್ ಅವರು ಸೂಚನೆ ನೀಡಿದ್ದಾರೆ.
ಪೋಷಕರು ತಮ್ಮ ಮಕ್ಕಳನ್ನು ಶಾಲೆಗೆ ಬಿಡುವಾಗ ಮಕ್ಕಳಿಗೆ ಹೆಲ್ಮೆಟ್ ಕಡ್ಡಾಯವಾಗಿ ಧರಿಸಬೇಕು. ಮೂರಕ್ಕೂ ಹೆಚ್ಚು ಮಕ್ಕಳನ್ನು ಗಾಡಿಯಲ್ಲಿ ಕರೆದುಕೊಂಡು ಹೋಗುವ ಪೋಷಕರ ವಿರುದ್ಧವೂ ಕ್ರಮ ಕೈಗೊಳ್ಳುವುದಾಗಿ ಸಂಚಾರ ಪೊಲೀಸರು ಎಚ್ಚರಿಕೆ ನೀಡಿದ್ದಾರೆ. ಶಾಲಾ ಆಟೋ, ಖಾಸಗಿ ಕಾರು,ಟಿಟಿ ವಾಹನಗಳಲ್ಲಿ ನಿಗದಿತ ಮಿತಗಿಂತ ಹೆಚ್ಚಿನ ಮಕ್ಕಳನ್ನು ಶಾಲೆಗೆ ಕರೆದೊಯ್ಯುವವರ ವಿರುದ್ಧವೂ ಕ್ರಮಕ್ಕೆ ಪೊಲೀಸರು ಮುಂದಾಗಿದ್ದಾರೆ.
ಮನೆಗೆ ಬರಲಿದ್ದಾರೆ ಖಾಕಿ
ರಸ್ತೆಯುದ್ದಕ್ಕೂ ಪೊಲೀಸರಿದ್ದರೂ ಕೆಲ ವಾಹನ ಸವಾರರು ಕೇರ್ ಮಾಡಲ್ಲ. ಸಂಚಾರ ನಿಯಮ ಉಲ್ಲಂಘನೆ ಮಾಡುವುದನ್ನು ಕಾಯಕ ಮಾಡಿಕೊಂಡಿದ್ದಾರೆ. ಪ್ರತಿದಿನ ಸಂಚಾರ ನಿಯಮ ಉಲ್ಲಂಘನೆ ಮಾಡಿ ನಮಗೂ ಅದಕ್ಕೂ ಸಂಬಂಧವೇ ಇಲ್ಲ ಎನ್ನುವ ರೀತಿ ಇದ್ದಾರೆ. ಅಂತಹ ವಾಹನ ಸವಾರರಿಗೆ ಶಾಕ್ ಕೊಡಲು ನಗರ ಸಂಚಾರ ಪೊಲೀಸರು ಮುಂದಾಗಿದ್ದಾರೆ. ಮನೆ ಮನೆಗೆ ತೆರಳಿ ದಂಡ ವಸೂಲಿ ಮಾಡುತ್ತಿದ್ದಾರೆ.