ಸಹಕಾರ ಸಚಿವ ಕೆ ಎನ್ ರಾಜಣ್ಣ ಅವರು ತಮ್ಮ ಸಚಿವ ಸ್ಥಾನಕ್ಕೆ ಇಂದು (ಸೋಮವಾರ) ರಾಜೀನಾಮೆ ನೀಡಿದ್ದಾರೆ.
ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ಮತ ಕಳ್ಳತನ ಬಗ್ಗೆ ದಾಖಲೆ ಸಮೇತ ವಿಷಯ ಹೊರಹಾಕಿದ ಬೆನ್ನಲ್ಲೇ “ಲೋಕಸಭೆ ಚುನಾವಣೆಯಲ್ಲಿ ಮತ ಕಳವು ನಡೆದಿದೆ. ಆದರೆ ಕಾಂಗ್ರೆಸ್ ಸರ್ಕಾರ ಅಧಿಕಾರದಲ್ಲಿ ಇದ್ದಾಗಲೇ ಮತದಾರರ ಪಟ್ಟಿ ಸಿದ್ಧಪಡಿಸಲಾಗಿದೆ. ಆಗ ಎಲ್ಲರು ಕಣ್ಣುಮುಚ್ಚಿ ಕುಳಿತಿದ್ದರೇ” ಎಂದು ಕೆ.ಎನ್.ರಾಜಣ್ಣ ಪ್ರಶ್ನಿಸಿದ್ದರು.
ಕೆ ಎನ್ ರಾಜಣ್ಣ ವಿರುದ್ಧ ಕ್ರಮ ತೆಗೆದುಕೊಳ್ಳುವಂತೆ ಹೈಕಮಾಂಡ್ ಸೂಚನೆ ನೀಡಿದ ಬೆನ್ನಲ್ಲೇ ರಾಜೀನಾಮೆ ನೀಡಿದ್ದಾರೆ.
ವಿಧಾನಸಭಾ ಕಲಾಪ ಸಲಹಾ ಸಮಿತಿ (ಬಿಎಸಿ) ಸಭೆ ನಡೆಯುತ್ತಿದ್ದಾಗ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಆಪ್ತ ಕಾರ್ಯದರ್ಶಿಗೆ ರಾಜೀನಾಮೆ ಪತ್ರ ನೀಡಿದ್ದಾರೆ. ರಾಜೀನಾಮೆ ನೀಡಿದ್ದನ್ನು ರಾಜಣ್ಣ ಖಚಿತಪಡಿಸಿದ್ದಾರೆ.
ಹಾಸನ ಜಿಲ್ಲೆಗೆ ಸಹಕಾರ ಸಚಿವ ಕೆ ಎನ್ ರಾಜಣ್ಣ ಬದಲು ನೂತನ ಉಸ್ತುವಾರಿಯಾಗಿ ಕಂದಾಯ ಇಲಾಖೆ ಸಚಿವ ಕೃಷ್ಣ ಬೈರೇಗೌಡ ಅವರನ್ನು ಈಗಾಗಲೇ ಸರ್ಕಾರ ನೇಮಿಸಿ ಆದೇಶಿಸಿದೆ.
ಕೆ.ಎನ್ ರಾಜಣ್ಣ ಸಚಿವ ಸ್ಥಾನಕ್ಕೆ ನೀಡಿದ್ದ ರಾಜೀನಾಮೆಯನ್ನು ಸಿಎಂ ಸಿದ್ದರಾಮಯ್ಯನವರು ಇದೀಗ ಅಂಗೀಕರಿಸಿದ್ದಾರೆ. ಸಚಿವ ಕೆ.ಎನ್. ರಾಜಣ್ಣ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡುತ್ತಿದ್ದಂತೆ ದೊಡ್ಡ ಚರ್ಚೆಗೆ ಕಾರಣವಾಗಿತ್ತು. ಆ ಬೆನ್ನಲ್ಲೇ ಸಿಎಂ ಸಿದ್ದರಾಮಯ್ಯನವರು ರಾಜೀನಾಮೆ ಅಂಗೀಕರಿಸಿದ್ದಾರೆ.