ಕುಮಾರಸ್ವಾಮಿ ಮುಖ್ಯಮಂತ್ರಿಯಾಗಿದ್ದಾಗ ರಾಜ್ಯ ಹಿಂದುಳಿದ ವರ್ಗಗಳ ಶಾಶ್ವತ ಆಯೋಗದ ಮಾಜಿ ಅಧ್ಯಕ್ಷ ಎಚ್. ಕಾಂತರಾಜ ವರದಿ ಸ್ವೀಕರಿಸಲಿಲ್ಲ ಎಂದು ಸಿದ್ದರಾಮಯ್ಯ ಹೇಳಿದ್ದಾರೆ. ಸ್ವೀಕರಿಸುವುದಕ್ಕೆ ಆ ವರದಿಯಲ್ಲಿ ಸದಸ್ಯ ಕಾರ್ಯದರ್ಶಿ ಸಹಿ ಇತ್ತಾ” ಎಂದು ಮಾಜಿ ಸಿಎಂ ಎಚ್ ಡಿ ಕುಮಾರಸ್ವಾಮಿ ಪ್ರಶ್ನಿಸಿದರು.
ರಾಮನಗರ ತಾಲ್ಲೂಕಿನ ಕೇತಗಾನಹಳ್ಳಿಯಲ್ಲಿರುವ ತಮ್ಮ ತೋಟದ ಮನೆಯಲ್ಲಿ ಸುದ್ದಿಗಾರರ ಜೊತೆ ಮಾತನಾಡಿ, “ಆ ವರದಿಗೆ ಇವತ್ತಿನವರೆಗೂ ಸಹಿ ಹಾಕಿಲ್ಲ. ಸಹಿ ಹಾಕದ ವರದಿಯನ್ನು ನಾನು ಹೇಗೆ ಸ್ವೀಕರಿಸಲಿ. ಸುಮ್ಮನೆ ನನ್ನ ಮೇಲೆ ಆರೋಪ ಮಾಡುತ್ತಾರೆ” ಎಂದು ಆಕ್ರೋಶ ವ್ಯಕ್ತಪಡಿಸಿದರು.
“ಕಾಂತರಾಜ ನೇತೃತ್ವದಲ್ಲಿ ಸಿದ್ಧಪಡಿಸಿರುವ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ (ಜಾತಿಗಣತಿ) ವರದಿಯನ್ನು ಸ್ವೀಕರಿಸಬೇಡಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಹಿಡಿದುಕೊಂಡಿರುವವರು ಯಾರು” ಎಂದರು ಕುಮಾರಸ್ವಾಮಿ ಪ್ರಶ್ನಿಸಿದರು.
“ಕಾಂಗ್ರೆಸ್ ಸರ್ಕಾರದಲ್ಲಿ ಕಮಿಷನ್ ವ್ಯವಹಾರ ಇದೆ ಎಂದು ನಾನು ಪ್ರಶ್ನೆ ಮಾಡಿದರೆ ಇವರಿಗೆ ಅಸಹನೆ. ಮಾನಸಿಕ ಸ್ಥಿಮಿತ ಕಳೆದುಕೊಂಡಿದ್ದಾರೆ ಎಂದು ಹೇಳುತ್ತಾರೆ. ನಿತ್ಯ ವರ್ಗಾವಣೆ ಮಾಡುತ್ತಿದ್ದಾರೆ. ಇದೀಗ, ಅವರದ್ದೇ ಪಕ್ಷದವರಾದ ಹಾಸನದ ಮಾಜಿ ಸಚಿವ ಬಿ. ಶಿವರಾಮ್ ಕಮಿಷನ್ ಆರೋಪ ಮಾಡಿದ್ದಾರೆ. ಬಿಜೆಪಿಗಿಂತಲೂ ಕಾಂಗ್ರೆಸ್‌ನಲ್ಲಿ ಕಮಿಷನ್ ಪರ್ಸೆಂಟ್ ಜಾಸ್ತಿಯಾಗಿದೆ ಎಂದು ತಲೆ ಚಚ್ಚಿಕೊಂಡಿದ್ದಾರೆ. ಹೀಗಿದ್ದರೂ, ಸಿದ್ದರಾಮಯ್ಯ ಅವರು ಮೋದಿ ಅವರನ್ನು ಟೀಕಿಸುತ್ತಾರೆ. ಮೊದಲು ಅವರ ಸ್ಥಿತಿ ನೋಡಿಕೊಳ್ಳಲಿ” ಎಂದು ಲೇವಡಿ ಮಾಡಿದರು.