ಗರ್ಭಕಂಠದ ಕ್ಯಾನ್ಸರ್ ತಡೆಗಟ್ಟುವಲ್ಲಿ ಹೆಚ್‌ಪಿವಿ ಲಸಿಕೆ ಮಹತ್ವದ ಪಾತ್ರ ವಹಿಸಲಿದ್ದು, ಅರ್ಹ ವಯಸ್ಸಿನ ಹೆಣ್ಣುಮಕ್ಕಳಿಗೆ ಪೋಷಕರು ತಪ್ಪದೇ ಲಸಿಕೆ ಹಾಕಿಸಬೇಕು ಎಂದು ದಾವಣಗೆರೆ ಸಂಸದೆ ಡಾ. ಪ್ರಭಾ ಮಲ್ಲಿಕಾರ್ಜುನ್ ಮನವಿ ಮಾಡಿದರು.
ಹೊನ್ನಾಳಿ ತಾಲ್ಲೂಕಿನ ಅರಬಗಟ್ಟ ಗ್ರಾಮದಲ್ಲಿ ಸರ್ಕಾರದ ವತಿಯಿಂದ ಆಯೋಜಿಸಿದ್ದ ಉಚಿತ ಹೆಚ್‌ಪಿವಿ ಲಸಿಕಾ ಕಾರ್ಯಕ್ರಮದಲ್ಲಿ ಭಾಗವಹಿಸಿ, ವಿದ್ಯಾರ್ಥಿನಿಯರಿಗೆ ಲಸಿಕೆ ನೀಡುವ ಪ್ರಕ್ರಿಯೆಯನ್ನು ವೀಕ್ಷಿಸಿ ಅವರು ಮಾತನಾಡಿದರು.
ಈ ಸಂದರ್ಭದಲ್ಲಿ ವಿದ್ಯಾರ್ಥಿನಿಯರೊಂದಿಗೆ ಕುಳಿತು ಆತ್ಮೀಯವಾಗಿ ಮಾತುಕತೆ ನಡೆಸಿದ ಸಂಸದರು, ಲಸಿಕೆ ಪಡೆಯುವ ಮಕ್ಕಳಿಗೆ ಧೈರ್ಯ ತುಂಬಿದರು. ಆರೋಗ್ಯ ಸಿಬ್ಬಂದಿ ಲಸಿಕೆ ನೀಡುವ ಸಂದರ್ಭದಲ್ಲಿ ಮಕ್ಕಳೊಂದಿಗೆ ಇದ್ದು, ಅವರಲ್ಲಿ ಆತ್ಮವಿಶ್ವಾಸ ಮೂಡಿಸಿದರು.
ಗರ್ಭಕಂಠದ ಕ್ಯಾನ್ಸರ್ ಮಹಿಳೆಯರ ಆರೋಗ್ಯಕ್ಕೆ ಗಂಭೀರ ಸವಾಲಾಗಿದ್ದು, ಹೆಚ್‌ಪಿವಿ ಲಸಿಕೆ ಪಡೆಯುವುದರಿಂದ ಈ ಕ್ಯಾನ್ಸರ್‌ನ ಅಪಾಯವನ್ನು ಗಣನೀಯವಾಗಿ ತಗ್ಗಿಸಬಹುದು. ಹೀಗಾಗಿ ಸೂಕ್ತ ವಯಸ್ಸಿನಲ್ಲಿ ಹೆಣ್ಣುಮಕ್ಕಳಿಗೆ ಲಸಿಕೆ ದೊರೆಯುವಂತೆ ನೋಡಿಕೊಳ್ಳುವುದು ಅತ್ಯಂತ ಅಗತ್ಯವಾಗಿದೆ ಎಂದು ತಿಳಿಸಿದರು.
ಕಾಯಿಲೆ ಬಂದ ನಂತರ ಚಿಕಿತ್ಸೆ ಪಡೆಯುವುದಕ್ಕಿಂತ ಮುನ್ನೆಚ್ಚರಿಕೆ ಕ್ರಮಗಳ ಮೂಲಕ ಆರೋಗ್ಯ ಕಾಪಾಡಿಕೊಳ್ಳುವುದು ಮುಖ್ಯ. ಹೆಣ್ಣುಮಕ್ಕಳ ಆರೋಗ್ಯ ರಕ್ಷಣೆ ಕೇವಲ ಕುಟುಂಬದ ಜವಾಬ್ದಾರಿಯಲ್ಲ, ಅದು ಸಮಾಜದ ಸಾಮೂಹಿಕ ಹೊಣೆಗಾರಿಕೆಯೂ ಆಗಿದೆ. ಸರ್ಕಾರದ ಉಚಿತ ಲಸಿಕಾ ಕಾರ್ಯಕ್ರಮಗಳ ಕುರಿತು ಗ್ರಾಮೀಣ ಭಾಗಗಳಲ್ಲಿ ಹೆಚ್ಚಿನ ಜಾಗೃತಿ ಮೂಡಿಸಬೇಕಿದೆ ಎಂದು ಹೇಳಿದರು.
ಅರ್ಹ ಹೆಣ್ಣುಮಕ್ಕಳಿಗೆ ಲಸಿಕಾ ಸೌಲಭ್ಯ ತಲುಪಿಸುವಲ್ಲಿ ಪೋಷಕರು, ಶಿಕ್ಷಕರು ಹಾಗೂ ಆರೋಗ್ಯ ಇಲಾಖೆಯ ಸಿಬ್ಬಂದಿ ಸಮನ್ವಯದಿಂದ ಕಾರ್ಯನಿರ್ವಹಿಸಬೇಕು. ಮಕ್ಕಳ ಆರೋಗ್ಯದ ದೃಷ್ಟಿಯಿಂದ ಸರ್ಕಾರದ ಇಂತಹ ಕಾರ್ಯಕ್ರಮಗಳ ಸದುಪಯೋಗ ಪಡೆದುಕೊಳ್ಳಬೇಕು ಎಂದು ಮನವಿ ಮಾಡಿದರು.
ಕಾರ್ಯಕ್ರಮದಲ್ಲಿ ಆರೋಗ್ಯ ಇಲಾಖೆಯ ವೈದ್ಯರು, ಸಿಬ್ಬಂದಿ ಹಾಗೂ ಶಾಲಾ ವಿದ್ಯಾರ್ಥಿನಿಯರು ಉಪಸ್ಥಿತರಿದ್ದರು.


