Homeಕರ್ನಾಟಕಐಜಿಪಿ ಚಂದ್ರಶೇಖರ್‌ನಿಂದ ರಾಜ್ಯಪಾಲರ ಕಚೇರಿ ಮಾಹಿತಿ ಸೋರಿಕೆ: ಕುಮಾರಸ್ವಾಮಿ ಆರೋಪ

ಐಜಿಪಿ ಚಂದ್ರಶೇಖರ್‌ನಿಂದ ರಾಜ್ಯಪಾಲರ ಕಚೇರಿ ಮಾಹಿತಿ ಸೋರಿಕೆ: ಕುಮಾರಸ್ವಾಮಿ ಆರೋಪ

ಸರಣಿ ಅಪರಾಧಗಳನ್ನು ಮಾಡಿರುವ ಒಬ್ಬ ಭ್ರಷ್ಟ ಐಪಿಎಸ್ ಅಧಿಕಾರಿಯೊಬ್ಬ ರಾಜ್ಯಪಾಲರ ಕಚೇರಿಯ ಸಿಬ್ಬಂದಿಯನ್ನು ತನಿಖೆ ಮಾಡುವ ಅನುಮತಿ ಕೇಳಿದ್ದಾನೆ. ಈತನಿಗೆ ರಾಜ್ಯ ಕಾಂಗ್ರೆಸ್ ಸರ್ಕಾರದ ಪೂರ್ಣ ಕೃಪಾಕಟಾಕ್ಷವಿದೆ ಎಂದು ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿ ಆರೋಪ ಮಾಡಿದರು.

ಜೆಡಿಎಸ್ ರಾಜ್ಯ ಕಚೇರಿ ಜೆಪಿ ಭವನದಲ್ಲಿ ನಡೆದ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿ, “ಲೋಕಾಯುಕ್ತ ವಿಶೇಷ ತನಿಖಾ ದಳದ ಐಜಿಪಿ ಎಂ.ಚಂದ್ರಶೇಖರ್ ಆ ಭ್ರಷ್ಟ ಅಧಿಕಾರಿ ಆಗಿದ್ದು, ಇಂಥ ದರೋಡೆಕೋರ ಅಧಿಕಾರಿಗಳನ್ನು ಇಟ್ಟುಕೊಂಡು ರಾಜ್ಯ ಸರ್ಕಾರ ತನಿಖೆ ಮಾಡಿಸುತ್ತಿದೆ” ಎಂದು ಕಿಡಿಕಾರಿದರು.

“ಸಿದ್ದರಾಮಯ್ಯ ಅವರ ಸರ್ಕಾರದಲ್ಲಿ ಯಾವ ತನಿಖೆಯೂ ಪಾರದರ್ಶಕವಾಗಿ ನಡೆಯುತ್ತಿಲ್ಲ. ರಾಜಕೀಯ ಸೇಡಿಗಾಗಿ ತನಿಖೆ ನಡೆಸಲಾಗುತ್ತಿದೆ. ಅದಕ್ಕೆ ಚಂದ್ರಶೇಖರ್ ಅವರಂಥ ಕಳಂಕಿತ ಅಧಿಕಾರಿಗಳನ್ನು ಬಳಸಿಕೊಳ್ಳುತ್ತಿದ್ದಾರೆ. ಈ ಅಧಿಕಾರಿಯ ವಿರುದ್ಧ ಕೇಂದ್ರ ಗೃಹ ಸಚಿವಾಲಯಕ್ಕೆ ದೂರು ನೀಡಲಾಗುವುದು” ಎಂದು ಕುಮಾರಸ್ವಾಮಿ ಹೇಳಿದರು.

“ನನ್ನ ಪ್ರಕರಣಕ್ಕೆ ಸಂಬಂಧಿಸಿ ರಾಜ್ಯಪಾಲರು ಲೋಕಾಯುಕ್ತಕ್ಕೆ ಬರೆದಿದ್ದ ಅತಿ ಗೌಪ್ಯ ಪಾತ್ರವೊಂದು ಸೋರಿಕೆ ಆಗಿತ್ತು. ಅದು ನಮ್ಮ ಕುಟುಂಬದ ವಿರುದ್ಧ ಅನೇಕ ತಿಂಗಳಿನಿಂದ ವೈಯಕ್ತಿಕವಾಗಿ ತೇಜೋವಧೆ ಮಾಡುತ್ತಿರುವ ಖಾಸಗಿ ಸುದ್ದಿವಾಹಿನಿಗೆ ಆ ಪತ್ರ ಸೋರಿಕೆ ಆಗಿತ್ತು. ಅದು ಐಜಿಪಿ ಚಂದ್ರಶೇಖರ್ ಅವರಿಂದಲೇ ಸೋರಿಕೆ ಆಗಿದೆ. ಆದರೆ, ಅದೇ ಅಧಿಕಾರಿ ರಾಜ್ಯಪಾಲರ ಕಚೇರಿಯಿಂದಲೇ ಪತ್ರ ಸೋರಿಕೆ ಆಗಿದೆ ಎಂದು ಕಥೆ ಕಟ್ಟಿ ರಾಜ್ಯಪಾಲರ ಕಾರ್ಯಾಲಯದ ಸಿಬ್ಬಂದಿಯನ್ನು ತನಿಖೆಗೆ ಒಳಪಡಿಸಲು ಅನುಮತಿ ಕೊಡುವಂತೆ ಲೋಕಾಯುಕ್ತ ತನಿಖಾ ಸಂಸ್ಥೆಯ ಹೆಚ್ಚುವರಿ ಪೊಲೀಸ್ ಮಹಾ ನಿರ್ದೇಶಕರಿಗೆ ಪತ್ರ ಬರೆದಿದ್ದಾರೆ” ಎಂದು ದೂರಿದರು.

ದಾಖಲೆ ಇಟ್ಟರೆ ಆರೇಳು ಸಚಿವರ ತಲೆದಂಡ

ರಾಜ್ಯ ಸಚಿವ ಸಂಪುಟದಲ್ಲಿ ಒಬ್ಬರಿಗಿಂತ ಒಬ್ಬರು ಪೈಪೋಟಿಯಲ್ಲಿ ಲೂಟಿ ಮಾಡುತ್ತಿದ್ದಾರೆ. ನನ್ನ ಬಳಿ ಇರುವ ದಾಖಲೆಗಳನ್ನು ಬಯಲು ಮಾಡಿದರೆ ಕೊನೇಪಕ್ಷ 6ರಿಂದ 7 ಸಚಿವರು ರಾಜೀನಾಮೆ ನೀಡಬೇಕಾಗುತ್ತದೆ. ಶೀಘ್ರದಲ್ಲಿಯೇ ಎಲ್ಲಾ ದಾಖಲೆಗಳನ್ನು ಬಿಡುತ್ತೇನೆ ಎಂದು ಕುಮಾರಸ್ವಾಮಿ ಅವರು ಹೇಳಿದರು.

ಸಿಎಂ ವಿರುದ್ಧ ಲೋಕಾಯುಕ್ತದಲ್ಲಿ 70ಕ್ಕೂ ಹೆಚ್ಚು ಪ್ರಕರಣ

ನಾನು ಬಹಳ ಕ್ಲೀನ್, ಪಾರದರ್ಶಕ, ನನ್ನ ಜೀವನ ತೆರೆದ ಪುಸ್ತಕ ಎಂದೆಲ್ಲಾ ಹೇಳುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ಲೋಕಾಯುಕ್ತದಲ್ಲಿ 70ಕ್ಕೂ ಹೆಚ್ಚು ಪ್ರಕರಣಗಳು ದಾಖಲಾಗಿವೆ. ಆ ಪ್ರಕರಣಗಳ ಕಥೆ ಏನಾಗಿದೆ? ಅವುಗಳ ತನಿಖೆ ಎಲ್ಲಿಗೆ ಬಂದಿದೆ ಎಂಬುದನ್ನು ಜನರಿಗೆ ಹೇಳಬೇಕಲ್ಲವೇ? ಎಂದು ಕೇಂದ್ರ ಸಚಿವರು ಒತ್ತಾಯ ಮಾಡಿದರು.

ಇವರು ಕ್ಲೀನ್, ಸ್ವಚ್ಚ ಆಗಿದ್ದರೆ ಇಷ್ಟು ಪ್ರಕರಣಗಳು ಇವರ ಮೇಲೆ ಏಕೆ ದಾಖಲಾಗುತ್ತಿದ್ದವು ಎಂದು ಪ್ರಶ್ನಿಸಿದ ಕುಮಾರಸ್ವಾಮಿ ಅವರು; ಇಂಥ ಪ್ರಕರಣಗಳನ್ನು ಮುಚ್ಚಿ ಹಾಕಿಕೊಳ್ಳಲು ಹಿಂದೆ ಲೋಕಾಯುಕ್ತವನ್ನು ಮುಗಿಸಿ ಎಸಿಬಿಯನ್ನು ರಚನೆ ಮಾಡಿಕೊಂಡಿದ್ದರು ಎಂದು ಅವರು ಹೇಳಿದರು.

ಮಾಧ್ಯಮಗೋಷ್ಟಿಯಲ್ಲಿ ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಸುರೇಶ್ ಬಾಬು, ಮಾಜಿ ಸಚಿವ ಬಂಡೆಪ್ಪ ಕಾಶೆಂಪೂರ್, ಜೆಡಿಎಸ್ ನಗರ ಘಟಕದ ಅಧ್ಯಕ್ಷ ಹೆಚ್.ಎಂ.ರಮೇಶ್ ಗೌಡ, ಮಾಜಿ ಶಾಸಕ ಅಶ್ವಿನ್ ಕುಮಾರ್, ಮಂಜುನಾಥ್, ಪಕ್ಷದ ಹಿರಿಯ ನಾಯಕರಾದ ಜಪ್ರುಲ್ಲಾ ಖಾನ್, ಸುಧಾಕರ ಶೆಟ್ಟಿ ಸೇರಿದಂತೆ ಹಲವಾರು ಉಪಸ್ಥಿತರಿದ್ದರು.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments