Homeಕರ್ನಾಟಕಜಾಗತಿಕ ಹೂಡಿಕೆದಾರರ ಸಮಾವೇಶಕ್ಕೆ ಚಾಲನೆ | ಬೆಂಗಳೂರಿನ ಕೈಯಲ್ಲಿ ಭಾರತದ ಭವಿಷ್ಯ: ರಾಜನಾಥ್ ಸಿಂಗ್

ಜಾಗತಿಕ ಹೂಡಿಕೆದಾರರ ಸಮಾವೇಶಕ್ಕೆ ಚಾಲನೆ | ಬೆಂಗಳೂರಿನ ಕೈಯಲ್ಲಿ ಭಾರತದ ಭವಿಷ್ಯ: ರಾಜನಾಥ್ ಸಿಂಗ್

ವಿಶ್ವ ದರ್ಜೆಯ ಮೂಲಸೌಕರ್ಯ ಮತ್ತು ಕಾರ್ಯ ಪರಿಸರ ಹೊಂದಿರುವ ಕರ್ನಾಟಕವು ಬಂಡವಾಳ ಹೂಡಿಕೆಗೆ ಹೇಳಿಮಾಡಿಸಿದ ರಾಜ್ಯವಾಗಿದೆ. ಹೂಡಿಕೆದಾರರು ಇಲ್ಲಿ ಬಂಡವಾಳ ಹೂಡಿದರೆ ಇಡೀ ದೇಶವೇ ಅವರ ಬೆನ್ನಿಗಿರಲಿದೆ. ಭಾರತದ ಭವಿಷ್ಯದ ಬಗ್ಗೆ ಅನುಮಾನವಿರುವವರು ಒಮ್ಮೆ ಬೆಂಗಳೂರಿಗೆ ಬಂದು ಇಲ್ಲಿನ ಐಟಿ, ಸ್ಟಾರ್ಟಪ್ ಮತ್ತು ಇನ್ನಿತರ ಕ್ರಾಂತಿಕಾರಕ ಸಂಶೋಧನೆಗಳನ್ನು ನೋಡಿದರೆ, ಅವರ ಸಂಶಯಗಳೆಲ್ಲ ನಿವಾರಣೆಯಾಗಿ ಹೋಗುತ್ತವೆ ಎಂದು ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಹೇಳಿದರು.

ಅರಮನೆ ಮೈದಾನದಲ್ಲಿ ಆಯೋಜನೆಗೊಂಡ ಜಾಗತಿಕ ಹೂಡಿಕೆದಾರರ ಸಮಾವೇಶವಾದ ಇನ್ವೆಸ್ಟ್ ಕರ್ನಾಟಕ-2025ಕ್ಕೆ ಚಾಲನೆ ನೀಡಿ ಮಾತನಾಡಿದರು.

“ಫೆ.14ರವರೆಗೆ ನಡೆಯಲಿರುವ ಸಮಾವೇಶದಲ್ಲಿ ಜಗತ್ತಿನ ನಾನಾ ಭಾಗಗಳ 5,000ಕ್ಕೂ ಹೆಚ್ಚು ಉದ್ಯಮ ಪ್ರತಿನಿಧಿಗಳು ಭಾಗವಹಿಸುತ್ತಿದ್ದಾರೆ. ಕರ್ನಾಟಕವು ಜ್ಞಾನ ಮತ್ತು ಸಂಪತ್ತು ಎರಡೂ ಮೇಳೈಸಿರುವ ರಾಜ್ಯವಾಗಿದೆ. ದೇಶದ ತಂತ್ರಜ್ಞಾನ ರಾಜಧಾನಿಯಾಗಿರುವ ಬೆಂಗಳೂರು ವೈಮಾಂತರಿಕ್ಷ, ಕೃತಕ ಬುದ್ಧಿಮತ್ತೆ, ಪ್ರತಿಭೆ ಮತ್ತು ಯುವಜನರ ಆಗರವಾಗಿದೆ. ಇಲ್ಲಿರುವ ಶಕ್ತಿ, ಮಹತ್ತ್ವಾಕಾಂಕ್ಷೆ ಮತ್ತು ಇಲ್ಲಿ ನಡೆಯುತ್ತಿರುವ ನಿರ್ಣಾಯಕ ಕೆಲಸಗಳು ದೇಶವನ್ನು ಎತ್ತರಕ್ಕೆ ಕೊಂಡೊಯ್ಯುತ್ತಿವೆ. ಇಲ್ಲಿಂದ ಸದ್ಯದಲ್ಲೇ ಕೃತಕ ಬುದ್ಧಿಮತ್ತೆ ಕ್ಷೇತ್ರದ ಪ್ರಪ್ರಥಮ ಮಾದರಿ ಕೂಡ ಹೊರಬರಲಿದೆ . ಇದಕ್ಕೆಲ್ಲ ಇಲ್ಲಿರುವ ಮಾನವ ಸಂಪನ್ಮೂಲ ಮತ್ತು ಸನ್ನದ್ಧವಾಗಿರುವ ಪ್ರತಿಭೆಯೇ ಕಾರಣ” ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಅತ್ಯಂತ ಹೂಡಿಕೆದಾರ ಸ್ನೇಹಿ ರಾಜ್ಯ: ಸಿಎಂ

ಭಾರತದ ಆರ್ಥಿಕತೆಯ ಪರಿವರ್ತನೆಯಲ್ಲಿ ಕರ್ನಾಟಕ ಸದಾ ಮುಂಚೂಣಿಯಲ್ಲಿರುವ ರಾಜ್ಯ. ಇಂದು ದೇಶದಲ್ಲಿಯೇ ಕರ್ನಾಟಕ ಅತ್ಯಂತ ಹೂಡಿಕೆದಾರ ಸ್ನೇಹಿ ರಾಜ್ಯವೆಂಬ ನಮ್ಮ ಬದ್ಧತೆಯನ್ನು ಮತ್ತೊಮ್ಮೆ ಧೃಢೀಕರಿಸುತ್ತಿದ್ದೇವೆ. ಸದೃಢ ನೀತಿ ನಿರೂಪಣೆ, ಸಕ್ರಿಯ ಆಡಳಿತ ಮತ್ತು ವ್ಯವಹಾರ-ಸ್ನೇಹಿ ಪರಿಸರ ವ್ಯವಸ್ಥೆಯಿದ್ದು, ಇಲ್ಲಿ ಮಾಡುವ ಪ್ರತಿ ಹೂಡಿಕೆಯೂ ಯಶಸ್ವಿಯಾಗುವಂತೆ ಹಾಗೂ ಸುಸ್ಥಿರ ಬೆಳವಣಿಗೆಗೆ ಕೊಡುಗೆ ನೀಡುವಂತೆ ಖಾತ್ರಿಪಡಿಸುತ್ತೇವೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.

“ಜಾಗತಿಕ ಹೂಡಿಕೆದಾರರ ಸಮಾವೇಶ – ಇನೆವೆಸ್ಟ್ ಕರ್ನಾಟಕ-2025ರಲ್ಲಿ ಆಯೋಜಿಸಿರುವ ನಾವೀನ್ಯತೆಯ ಭವಿಷ್ಯ ಕುರಿತ ವಸ್ತುಪ್ರದರ್ಶನವು ಸುಮಾರು 40ಕ್ಕೂ ಹೆಚ್ಚು ಜಾಗತಿಕ ಕಂಪನಿಗಳು, ಸ್ಟಾರ್ಟ್ ಅಪ್ ಕಂಪನಿಗಳಿಂದ, ಡ್ರೋನ್ ತಂತ್ರಜ್ಞಾನ, ಅಂತರಿಕ್ಷ ತಂತ್ರಜ್ಞಾನ, ಆರೋಗ್ಯ ವಲಯ, ಕೃಷಿ ಹಾಗೂ ಆರೋಗ್ಯ ತಂತ್ರಜ್ಞಾನ ಮತ್ತು ವೈಮಾನಿಕ ಮತ್ತು ರಕ್ಷಣಾ ವಲಯಗಳ ತಂತ್ರಜ್ಞಾನಕ್ಕೆ ಸಂಬಂಧಿಸಿದಂತೆ ಅತ್ಯಾಧುನಿಕ ವಲಯಗಳ ಕುರಿತು ಸ್ವಾಯತ್ತ ಪರಿಹಾರಗಳನ್ನು ಒದಗಿಸುತ್ತಿರುವುದನ್ನು ಬಿಂಬಿಸಲಿದೆ” ಎಂದರು.

“ನೂತನ ಕೈಗಾರಿಕಾ ನೀತಿ-2025, ನಾವೀನ್ಯತೆ, ಸುಸ್ಥಿರತೆ ಮತ್ತು ಒಳಗೊಳ್ಳುವ ಬೆಳವಣಿಗೆಯನ್ನು ಸೇರಿದಂತೆ ಕರ್ನಾಟಕದ ಮಹತ್ವಾಕಾಂಕ್ಷಿ ದೂರದೃಷ್ಟಿಯನ್ನು ಒತ್ತಿಹೇಳಿದೆ. ಉತ್ಪಾದನಾ ವಲಯದಲ್ಲಿ ಶೇ.12 ರಷ್ಟು ವಾರ್ಷಿಕ ಬೆಳವಣಿಗೆಯ ದರದ ಗುರಿಯನ್ನು ಹೊಂದಿದ್ದು, 2030 ರೊಳಗೆ 7.5 ಲಕ್ಷ ಕೋಟಿ ಹೂಡಿಕೆ ಹಾಗೂ 20 ಲಕ್ಷ ಉದ್ಯೋಗ ಸೃಜನೆಯ ಗುರಿಯನ್ನು ಹೊಂದಿದೆ” ಎಂದು ಹೇಳಿದರು.

12 ವಿಶೇಷ ಹೂಡಿಕೆ ವಲಯ ಸ್ಥಾಪನೆ: ಎಂ ಬಿ ಪಾಟೀಲ್

“ರಾಜ್ಯದಲ್ಲಿ ಸಮಗ್ರ ಕೈಗಾರಿಕಾ ಬೆಳವಣಿಗೆ ಸಾಧಿಸಲು ಈಗ ಇರುವ 200ಕ್ಕೂ ಹೆಚ್ಚು ಕೈಗಾರಿಕಾ ಪ್ರದೇಶಗಳ ಜತೆಗೆ 30 ಸಾವಿರ ಎಕರೆ ವಿಸ್ತೀರ್ಣದಲ್ಲಿ 12 ವಿಶೇಷ ಹೂಡಿಕೆ ವಲಯಗಳನ್ನು ಸ್ಥಾಪಿಸಲಾಗುವುದು ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ ಬಿ ಪಾಟೀಲ್ ತಿಳಿಸಿದರು.

“ಜಾಗತಿಕ ಹೂಡಿಕೆದಾರರ ಸಮಾವೇಶ ಉದ್ದೇಶಿಸಿ ಮಾತನಾಡಿದ ಅವರು, ಇದಕ್ಕಾಗಿ ಇತ್ತೀಚೆಗೆ ಅಧಿಸೂಚನೆ ಹೊರಡಿಸಿದ್ದು, ಇಲ್ಲೆಲ್ಲ ವಿಶ್ವ ದರ್ಜೆಯ ಮೂಲಸೌಕರ್ಯ ಒದಗಿಸಲಾಗುವುದು. ಕೆಐಎಡಿಬಿ ರಾಜ್ಯದಲ್ಲಿ ಈಗಾಗಲೇ 85 ಸಾವಿರ ಎಕರೆಗೂ ಹೆಚ್ಚು ವಿಸ್ತೀರ್ಣದ ಕೈಗಾರಿಕಾ ಪ್ರದೇಶಗಳನ್ನು ಅಭಿವೃದ್ಧಿ ಪಡಿಸಿದ್ದು, ಇಲ್ಲಿ 25 ಸಾವಿರ ಕೈಗಾರಿಕೆಗಳು ನೆಲೆಯೂರಿವೆ. ಉತ್ಪಾದನಾ ವೆಚ್ಚ ಕಡಿಮೆಯಾಗಿ, ದಕ್ಷತೆ ಹೆಚ್ಚಾಗಬೇಕು ಎನ್ನುವುದು ಸರಕಾರದ ನೀತಿಯಾಗಿದೆ. ಇದನ್ನು ಸಾಧಿಸಲು `ಕ್ಲಸ್ಟರ್ ಆಧಾರಿತ ನೀತಿ’ ಅಳವಡಿಸಿಕೊಳ್ಳಲಾಗಿದೆ. ಹೀಗಾಗಿ ಬೇರೆಬೇರೆ ಭಾಗಗಳಲ್ಲಿ ಏರೋಸ್ಪೇಸ್ ಮತ್ತು ಡಿಫೆನ್ಸ್, ಇ.ವಿ.ತಯಾರಿಕೆ ಕ್ಲಸ್ಟರ್, ಫಾರ್ಮಾ, ಡೀಪ್-ಟೆಕ್ ಮತ್ತು ಡ್ರೋನ್ ಪಾರ್ಕ್ ಗಳನ್ನು ಸ್ಥಾಪಿಸಲಾಗುತ್ತಿದೆ. ಕೈಗಾರಿಕಾ ಪ್ರದೇಶಗಳಿಗೆ ಹತ್ತಿರದ ನದೀಮೂಲಗಳಿಂದ ಶುದ್ಧ ಕುಡಿಯುವ ನೀರು ಪೂರೈಸಲು 3,800 ಕೋಟಿ ರೂ. ಮೊತ್ತದ ಬೃಹತ್ ಯೋಜನೆ ರೂಪಿಸಲಾಗಿದೆ” ಎಂದರು.

“ಜಾಗತಿಕ ಮಟ್ಟದಲ್ಲಿ ಚೀನಾದಿಂದ ತೀವ್ರ ಸವಾಲು ಎದುರಾಗಿದ್ದು, ತಯಾರಿಕೆ ವಲಯದ ಚಿತ್ರಣವೇ ಬದಲಾಗಬೇಕಾದ ಅನಿವಾರ್ಯತೆ ಇದೆ. ಜೊತೆಗೆ ಜಾಗತಿಕ ಅಸ್ಥಿರತೆಯ ಸಮಸ್ಯೆಯೂ ಇದೆ. ಸರಕಾರವು ಪ್ರಗತಿಗೆ ಹೊಸ ಭಾಷ್ಯ ಬರೆಯಲು ಮುಂದಾಗಿದ್ದು, ಕರ್ನಾಟಕವನ್ನು ಜಾಗತಿಕ ಮಟ್ಟದಲ್ಲಿ ತಯಾರಿಕೆ ಮತ್ತು ನಾವೀನ್ಯತೆಯ ತೊಟ್ಟಿಲನ್ನಾಗಿ ಪ್ರತಿಷ್ಠಾಪಿಸಲಿದೆ” ಎಂದು ಹೇಳಿದರು.‌

ನೂತನ ಕೈಗಾರಿಕಾ ನೀತಿ ಅನಾವಣಗೊಳಿಸಿದ ಡಿಸಿಎಂ

ರಾಜ್ಯ ಸರಕಾರವು ಮುಂದಿನ ಐದು ವರ್ಷಗಳ (2025-30) ಉದ್ಯಮ ಬೆಳವಣಿಗೆಗೆ ರೂಪಿಸಿರುವ ನೂತನ ಕೈಗಾರಿಕಾ ನೀತಿಯನ್ನು ಉಪ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಬಿಡುಗಡೆ ಜಾಗತಿಕ ಹೂಡಿಕೆದಾರರ ಸಮಾವೇಶದಲ್ಲಿ ಮಂಗಳವಾರ ಅನಾವರಣಗೊಳಿಸಿದರು.

ಹೊಸ ನೀತಿಯು ಇನ್ನು ಐದು ವರ್ಷಗಳಲ್ಲಿ ರಾಜ್ಯಕ್ಕೆ 7.50 ಲಕ್ಷ ಕೋಟಿ ರೂಪಾಯಿ ಬಂಡವಾಳ ಹೂಡಿಕೆ ಆಕರ್ಷಿಸುವ, 20 ಲಕ್ಷ ಉದ್ಯೋಗ ಸೃಷ್ಟಿಸುವ ಮತ್ತು ಸನ್-ರೈಸ್ ವಲಯದಲ್ಲಿ ರಾಜ್ಯವನ್ನು ಇಡೀ ದೇಶಕ್ಕೆ ನಂಬರ್ ಒನ್ ಆಗಿ ಪ್ರತಿಷ್ಠಾಪಿಸುವ ಹೆಗ್ಗುರಿಗಳನ್ನು ಹೊಂದಿದೆ. ಇದನ್ನೆಲ್ಲ ಸಾಧಿಸಲು ಬೆಂಗಳೂರಿನ ಆಚೆಗೆ ಹಾಗೂ ಹಿಂದುಳಿದ ಮತ್ತು ಅತೀ ಹಿಂದುಳಿದ ಜಿಲ್ಲೆ/ತಾಲ್ಲೂಕುಗಳಿಗೆ ಆದ್ಯತೆ ಕೊಡಲಾಗಿದೆ. ಇದಕ್ಕಾಗಿ ಕೈಗಾರಿಕಾ ಬೆಳವಣಿಗೆ ಆಧರಿಸಿ ಪ್ರದೇಶವಾರು ಪ್ರೋತ್ಸಾಹಕ ಭತ್ಯೆಗಳನ್ನು ನೀಡಲಾಗುವುದು ಎಂದು ಹೊಸ‌ ನೀತಿಯಲ್ಲಿ ತಿಳಿಸಲಾಗಿದೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments