ಪರಿಶಿಷ್ಟ ಜಾತಿಯವರಿಗೆ ಒಳಮೀಸಲಾತಿ ಒದಗಿಸುವ ಬೇಡಿಕೆ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಗೃಹ ಕಚೇರಿ ಕೃಷ್ಣದಲ್ಲಿ ಶನಿವಾರ ಸಭೆ ನಡೆಯಿತು.
ಸಭೆಯಲ್ಲಿ ಸಚಿವರಾದ ಕೆ ಎಚ್ ಮುನಿಯಪ್ಪ, ಆರ್ ಬಿ ತಿಮ್ಮಾಪುರ, ಮಾಜಿ ರಾಜ್ಯಸಭಾ ಸದಸ್ಯ ಎಲ್.ಹನುಮಂತಯ್ಯ, ಮಾಜಿ ಸಚಿವ ಶಿವಣ್ಣ, ಎಚ್.ಆಂಜನೇಯ, ವಿಧಾನ ಪರಿಷತ್ ಸದಸ್ಯರಾದ ಡಾ.ತಿಮ್ಮಯ್ಯ, ಶಾಸಕರಾದ ಬಸಂತಪ್ಪ, ಮುಖ್ಯಮಂತ್ರಿಯವರ ರಾಜಕೀಯ ಕಾರ್ಯದರ್ಶಿ ನಸೀರ್ ಅಹ್ಮದ್, ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಮತ್ತಿತರರು ಉಪಸ್ಥಿತರಿದ್ದರು.
ಮುಖಂಡರ ಮನವಿ
“ಒಳಮೀಸಲಾತಿ ಜಾರಿಯಾಗುವವರೆಗೂ ಯಾವುದೇ ಹೊಸ ನೇಮಕಾತಿ ಆಗಬಾರದು, ಜಾರಿಯಲ್ಲಿರುವ ನೇಮಕಾತಿ ಪ್ರಕ್ರಿಯೆಗಳನ್ನು ರದ್ದು ಮಾಡಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮನವಿ ಮಾಡಿದ್ದೇವೆ” ಎಂದು ಸಚಿವ ಕೆ ಎಚ್ ಮುನಿಯಪ್ಪ ತಿಳಿಸಿದರು.
ಸಭೆಯ ಬಳಿಕ ಮಾತನಾಡಿದ ಕೆ ಎಚ್ ಮುನಿಯಪ್ಪ, “ಯಾವುದೇ ನೇಮಕಾತಿ ಮಾಡದಿರಲು ಮುಖ್ಯಮಂತ್ರಿಗಳು ಸ್ಪಂದಿಸಿದ್ದು, ಒಳ ಮೀಸಲಾತಿ ಜಾರಿಗೊಳಿಸಲು ನಮ್ಮ ಸರ್ಕಾರ ಬದ್ಧವಾಗಿದೆ” ಎಂದರು.
“ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮುಂದಿನ ಸಚಿವ ಸಂಪುಟ ಸಭೆಯಲ್ಲಿ ಒಳಮೀಸಲಾತಿ ಜಾರಿ ಕುರಿತು ಚರ್ಚೆ ನಡೆಸಿ ಅಂತಿಮವಾಗಿ ಹೈಕಮಾಂಡ್ ಒಪ್ಪಿಗೆ ಪಡೆದು ಜಾರಿಗೊಳಿಸಲು ಬದ್ದರಾಗಿದ್ದಾರೆ” ಎಂದು ತಿಳಿಸಿದರು.
“ಸುಪ್ರೀಂಕೋರ್ಟ್ ತೀರ್ಪಿನಂತೆ ಒಳಮೀಸಲಾತಿ ಜಾರಿಗೊಳಿಸಲು ಮುಖ್ಯಮಂತ್ರಿಗಳೊಂದಿಗೆ ನಮ್ಮ ಸಮುದಾಯದ ಎಲ್ಲ ಮಂತ್ರಿಗಳು, ಶಾಸಕರು, ಮಾಜಿ ಸಚಿವರು, ಮಾಜಿ ಸಂಸದರು ಸಭೆ ನಡೆಸಿದ್ದಾರೆ” ಎಂದು ಹೇಳಿದರು.