ಐಪಿಎಲ್ ಇತಿಹಾಸದಲ್ಲಿ ಟ್ರೋಪಿ ವಂಚಿತ ತಂಡವಾಗಿದ್ದ ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್‌ಸಿಬಿ) ಐಪಿಎಲ್ ಹದಿನೆಂಟನೇ ಆವೃತ್ತಿಯನ್ನು ಪಂಜಾಬ್ ವಿರುದ್ಧ ಗೆಲ್ಲುವ ಮೂಲಕ 18 ವರ್ಷದ ಕನಸನ್ನು ನನಸಾಗಿಸಿದೆ.
ಆರ್‌ಸಿಬಿ ತಂಡ ಐಪಿಎಲ್ ಚಾಂಪಿಯನ್ ಆಗಿರುವುದರಿಂದ ಕರ್ನಾಟಕದಲ್ಲಿ ಸಂಭ್ರಮ ಮನೆ ಮಾಡಿದೆ. ಆರ್‌ಸಿಬಿ ಟ್ರೋಪಿ ಎತ್ತಿ ಹಿಡಿದ ಹಿನ್ನೆಲೆಯಲ್ಲಿ ಆರ್‌ಸಿಬಿ ಆಟಗಾರರನ್ನು ಬುಧವಾರ ವಿಧಾನಸೌಧದ ಮೆಟ್ಟಿಲುಗಳ ಮೇಲೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್, ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಅವರು ಸನ್ಮಾನಿಸಿ, ಅಭಿನಂದಿಸಿದರು.
ಮೊದಲಿಗೆ ಆರ್‌ಸಿಬಿ ತಂಡದ ನಾಯಕ ರಜತ್ ಪಾಟಿದಾರ್ ಮತ್ತು ಆರ್‌ಸಿಬಿ ಸ್ಟಾರ್ ಆಟಗಾರ ವಿರಾಟ್ ಕೊಹ್ಲಿ ಅವರನ್ನು ರಾಜ್ಯಪಾಲರು ಶಾಲು ಹೊದಿಸಿ ಸನ್ಮಾನಿಸಿದರು. ಬಳಿಕ ಪ್ರತಿಯೊಬ್ಬ ಆಟಗಾರರು ಮತ್ತು ಕೋಚ್ ಆಂಡಿ ಫ್ಲವರ್ ಅವರನ್ನು ಗೌರವಿಸಲಾಯಿತು.
ಚಾಂಪಿಯನ್ ಆಗಿ ಸಂಭ್ರಮದಲ್ಲಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಆಟಗಾರರು ಬೆಂಗಳೂರು ನಗರಕ್ಕೆ ಆಗಮಿಸಿದಾಗ ಡಿಸಿಎಂ ಡಿ ಕೆ ಶಿವಕುಮಾರ್ ಅವರು ಎಚ್ ಎ ಎಲ್ ವಿಮಾನ ನಿಲ್ದಾಣಕ್ಕೆ ತೆರಳಿ ಪ್ರತಿಯೊಬ್ಬ ಆಟಗಾರರಿಗೆ ಹೂಗುಚ್ಛ ನೀಡಿ ಸ್ವಾಗತಿಸಿಕೊಂಡರು.