ವೃತ್ತಿಪರ ಕೋರ್ಸ್‌ಗಳ ಪ್ರವೇಶಕ್ಕೆ ಅವಕಾಶ ಕಲ್ಪಿಸುವ ‘ಸಾಮಾನ್ಯ ಪ್ರವೇಶ ಪರೀಕ್ಷೆ (ಸಿಇಟಿ) ಬರೆಯುವ ಮುನ್ನ ವಿದ್ಯಾರ್ಥಿಗಳು ಧರಿಸಿದ್ದ ಜನಿವಾರವನ್ನು ಬಲವಂತವಾಗಿ ಕತ್ತರಿಸಿ ತೆಗೆಯಲಾಗಿದೆ ಎಂದು ಆಕ್ಷೇಪಿಸಿ ಸಲ್ಲಿಸಲಾಗಿದ್ದ ಅರ್ಜಿಗೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ಮತ್ತು ಕರ್ನಾಟಕ ಪರೀಕ್ಷಾ ಪ್ರಾಧಿಕಾರಕ್ಕೆ ನೋಟಿಸ್ ಜಾರಿಗೊಳಿಸಲು ಹೈಕೋರ್ಟ್ ಆದೇಶಿಸಿದೆ.
ಕರ್ನಾಟಕದಲ್ಲಿ ಸಿಇಟಿ ಪರೀಕ್ಷೆ ವೇಳೆ ಜನಿವಾರ ತೆಗೆಸಿದ ಪ್ರಕರಣ ಖಂಡಿಸಿ ಜಿಲ್ಲೆ ಜಿಲ್ಲೆಯಲ್ಲೂ ಬ್ರಾಹ್ಮಣ ಸಮುದಾಯ ಪ್ರತಿಭಟನೆಗೆ ಮುಂದಾಗಿತ್ತು. ಶಿವಮೊಗ್ಗ, ಬೀದರ್, ಧಾರವಾಡ, ಸಾಗರದಲ್ಲಿ ಜನಿವಾರ ತೆಗೆಸಿದನ್ನು ವಿರೋಧಿಸಿ ಪ್ರತಿಭಟನೆ ಮಾಡಲಾಗಿತ್ತು. ಪ್ರಕರಣಕ್ಕೆ ಸಂಬಂಧಿಸಿದಂತೆ ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾ ಹೈಕೋರ್ಟ್ಗೆ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿತ್ತು.
ಈ ಸಂಬಂಧ ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾ ಅಧ್ಯಕ್ಷ ರಘುನಾಥ್ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ಎನ್.ವಿ. ಅಂಜಾರಿಯಾ ನೇತೃತ್ವದ ವಿಭಾಗೀಯ ನ್ಯಾಯಪೀಠ ಶನಿವಾರ ವಿಚಾರಣೆ ನಡೆಸಿತು.
ವಿಚಾರಣೆ ವೇಳೆ ಅರ್ಜಿದಾರರ ಪರ ಪದಾಂಕಿತ ಹಿರಿಯ ವಕೀಲ ಎಸ್.ಶ್ರೀರಂಗ ಅವರ ವಾದ ಆಲಿಸಿದ ನ್ಯಾಯಪೀಠ ಪ್ರತಿವಾದಿಗಳಾದ, ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಮತ್ತು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ (ಕೆಇಎ) ಕಾರ್ಯ ನಿರ್ವಾಹಕ ಅಧಿಕಾರಿಗೆ ನೋಟಿಸ್ ಜಾರಿಗೊಳಿಸಲು ಆದೇಶಿಸಿತು. ಪ್ರತಿವಾದಿಗಳು ಆಕ್ಷೇಪಣೆ ಸಲ್ಲಿಸುವಂತೆ ನಿರ್ದೇಶಿಸಿದ ನ್ಯಾಯಪೀಠ ವಿಚಾರಣೆಯನ್ನು ಜೂನ್ 9ಕ್ಕೆ ಮುಂದೂಡಿದೆ.