ವ್ಯಾಪಾರ ಸಂಸ್ಥೆಗಳ ಸೂಚನಾ ಫಲಕಗಳಲ್ಲಿ ಕಡ್ಡಾಯವಾಗಿ ಶೇ.60 ರಷ್ಟು ಕನ್ನಡ ಕಡ್ಡಾಯಗೊಳಿಸಿ ರಾಜ್ಯ ಸರ್ಕಾರ ಸಿದ್ಧಪಡಿಸಿದ್ದ ಸುಗ್ರೀವಾಜ್ಞೆಯನ್ನು ರಾಜ್ಯಪಾಲ ಥಾವರಚಂದ್ ಗೆಹ್ಲೋಟ್ ಅವರು ವಾಪಸ್ ಕಳುಹಿಸಿದ್ದಾರೆ ಎಂದು ಡಿಸಿಎಂ ಡಿ ಕೆ ಶಿವಕುಮಾರ್ ತಿಳಿಸಿದ್ದಾರೆ.
ಬೆಂಗಳೂರಿನಲ್ಲಿ ಮಾತನಾಡಿದ ಅವರು, “ಜನವರಿ 5ರಂದು ನಡೆದ ಸಚಿವ ಸಂಪುಟ ಸಭೆಯಲ್ಲಿ, ವ್ಯಾಪಾರ ಸಂಸ್ಥೆಗಳಲ್ಲಿ ಸೂಚನಾ ಫಲಕಗಳಲ್ಲಿ ಶೇ.60ರಷ್ಟು ಕನ್ನಡ ಭಾಷೆಯನ್ನು ಕಡ್ಡಾಯಗೊಳಿಸುವ ‘ಕನ್ನಡ ಭಾಷಾ ಸಮಗ್ರ ಅಭಿವೃದ್ಧಿ ಕಾಯ್ದೆ’ಗೆ ತಿದ್ದುಪಡಿ ತರಲು ಸುಗ್ರೀವಾಜ್ಞೆಗೆ ಅನುಮೋದನೆ ನೀಡಲಾಗಿತ್ತು” ಎಂದರು.
“ಸುಗ್ರೀವಾಜ್ಞೆಯನ್ನು ಹೊರಡಿಸಲು ಅನುಮೋದನೆ ನೀಡುವಂತೆ ರಾಜ್ಯ ಸರ್ಕಾರವು ರಾಜ್ಯಪಾಲರಿಗೆ ಶಿಫಾರಸು ಮಾಡಿತ್ತು. ರಾಜ್ಯಪಾಲರು ಅದನ್ನು ತಿರಸ್ಕರಿಸಿ ವಿಧಾನಸಭೆಯಲ್ಲಿ ಅಂಗೀಕಾರ ಪಡೆಯುವಂತೆ ರಾಜ್ಯ ಸರ್ಕಾರಕ್ಕೆ ಸೂಚಿಸಿದ್ದಾರೆ. ಅವರು ಸಹಿ ಹಾಕಬಹುದಿತ್ತು” ಎಂದು ಡಿ ಕೆ ಶಿವಕುಮಾರ್ ಹೇಳಿದರು.