ದಕ್ಷಿಣ ಭಾರತದಲ್ಲಿ ಕರ್ನಾಟಕವು ಬಿಜೆಪಿಯ ಭದ್ರಕೋಟೆ ಎಂಬುದು ಮತ್ತೊಮ್ಮೆ ಲೋಕಸಭಾ ಚುನಾವಣೆಯಲ್ಲಿ ಸಾಬೀತಾಗಿದೆ. ಬಿಜೆಪಿ- ಜೆಡಿಎಸ್ ಒಟ್ಟಾಗಿರುವುದಕ್ಕೆ ರಾಜ್ಯದ ಜನರ ಆಶೀರ್ವಾದ ಲಭಿಸಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ಹೇಳಿದರು.
ಬೆಂಗಳೂರಿನ ಅರಮನೆ ಮೈದಾನದಲ್ಲಿ ರಾಜ್ಯದ 19 ಜನ ಎನ್‍ಡಿಎ ಸಂಸದರ ಸನ್ಮಾನ, ರಾಜ್ಯದ ಕೇಂದ್ರ ಸಚಿವರ ಅಭಿನಂದನೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿ, ಎಲ್ಲ ಕಾರ್ಯಕರ್ತರಿಗೆ ಅಭಿನಂದನೆ ತಿಳಿಸಿದರು.
“ಕಾಂಗ್ರೆಸ್ ಪಕ್ಷದ ಸಾಕಷ್ಟು ಅಪಪ್ರಚಾರದ ನಡುವೆ, ಆಮಿಷಗಳ ನಡುವೆ ರಾಜ್ಯದ ಜನತೆ ಬಿಜೆಪಿ- ಜೆಡಿಎಸ್ ಮೈತ್ರಿಕೂಟಕ್ಕೆ ಆಶೀರ್ವಾದ ಮಾಡಿದ್ದಾರೆ. ಹಿಂದೆ ಒಂದು ಸ್ಥಾನ ಗೆದ್ದ ಕಾಂಗ್ರೆಸ್ ಪಕ್ಷ ಈಗ 9 ಸ್ಥಾನ ಗೆದ್ದಿರಬಹುದು. ಆದರೆ, ಮತ್ತೊಂದು ಕಡೆ ರಾಜ್ಯದಲ್ಲಿ 145ಕ್ಕೂ ಹೆಚ್ಚು ವಿಧಾನಸಭಾ ಕ್ಷೇತ್ರಗಳಲ್ಲಿ ಬಿಜೆಪಿ ಮತ್ತು ಜೆಡಿಎಸ್ ಪಕ್ಷಗಳು ಮುನ್ನಡೆ ಸಾಧಿಸಿವೆ. ಕಾಂಗ್ರೆಸ್ ಸಚಿವರಿರುವ ಕ್ಷೇತ್ರದಲ್ಲೂ ನಮ್ಮ ಅಭ್ಯರ್ಥಿಗಳು ಲೀಡ್ ಪಡೆದಿದ್ದಾರೆ” ಎಂದು ವಿವರಿಸಿದರು.
ಕಾಂಗ್ರೆಸ್ ದುರಾಡಳಿತದಿಂದ ರಾಜ್ಯದ ಹಿನ್ನಡೆ
“ಮುಂದಿನ 4 ವರ್ಷ ರಾಜ್ಯದ ಕಾಂಗ್ರೆಸ್ ಪಕ್ಷದ ದುರಾಡಳಿತದ ವಿರುದ್ಧ ನಾವು ಹೋರಾಟ ಮಾಡಬೇಕಾಗಿದೆ. ಹಿಂದೆ ಬಿಜೆಪಿ ಅಧಿಕಾರದಲ್ಲಿ ಇದ್ದಾಗ ಕರ್ನಾಟಕವು ಎಲ್ಲ ಕ್ಷೇತ್ರಗಳಲ್ಲೂ ಮುಂಚೂಣಿಯಲ್ಲಿತ್ತು. ಆದರೆ, ಕಳೆದ ಒಂದು ವರ್ಷದ ಕಾಂಗ್ರೆಸ್ ದುರಾಡಳಿತದಲ್ಲಿ ರಾಜ್ಯವು ಎಲ್ಲ ಕ್ಷೇತ್ರಗಳಲ್ಲೂ ಹಿನ್ನಡೆ ಸಾಧಿಸುವಂತಾಗಿದೆ” ಎಂದರು.
“ಕಾಂಗ್ರೆಸ್ ಸರಕಾರ, ಮುಖ್ಯಮಂತ್ರಿಗಳು ವೈಫಲ್ಯವನ್ನು ಮುಚ್ಚಿಡಲು ನಮ್ಮ ಪ್ರಧಾನಮಂತ್ರಿ ನರೇಂದ್ರ ಮೋದಿಯವರನ್ನು ಟೀಕಿಸುತ್ತಿದ್ದಾರೆ. ರಾಜ್ಯದಲ್ಲಿ ಅಭಿವೃದ್ಧಿ ಸಂಪೂರ್ಣ ಸ್ಥಗಿತವಾಗಿದೆ. ಕಾಂಗ್ರೆಸ್ ಶಾಸಕ ನಾಡಗೌಡರು ಅಭಿವೃದ್ಧಿ ಇಲ್ಲದ ಕಾರಣಕ್ಕೆ ನಿವೃತ್ತಿ ಪಡೆಯುವ ಮಾತನಾಡಿದ್ದಾರೆ” ಎಂದು ಹೇಳಿದರು.
“ಗ್ಯಾರಂಟಿ ನೆಪದಲ್ಲಿ ಆದಾಯ ಮೂಲ ಹೆಚ್ಚಿಸಲು ಬೆಲೆ ಏರಿಕೆ ಮಾಡುತ್ತಿದ್ದಾರೆ. ರೈತರು ಬರಗಾಲದಿಂದ ಸಂಕಷ್ಟದಲ್ಲಿದ್ದರೂ, ಕೇಂದ್ರದಿಂದ 3,500 ಕೋಟಿ ಬರ ಪರಿಹಾರ ಕೊಟ್ಟರೂ ಸಹ ರಾಜ್ಯ ಸರಕಾರವು ರೈತರಿಗೆ ಸ್ಪಂದಿಸಿಲ್ಲ. ಆಸ್ತಿ ತೆರಿಗೆ ಹೆಚ್ಚಳ, ನೋಂದಣಿ ಶುಲ್ಕ ಏರಿಕೆ, ಮೋಟಾರು ವಾಹನ ತೆರಿಗೆ ಏರಿಕೆ, ವಿದ್ಯುತ್ ದರ ಹೆಚ್ಚಳ ಮಾಡಿದ್ದಾರೆ. ಹಾಲಿನ ದರ ಜಾಸ್ತಿ ಮಾಡಿದ್ದಾರೆ. ಪೆಟ್ರೋಲ್- ಡೀಸೆಲ್ ದರ ಏರಿಸಿದ್ದಾರೆ. ಕಾಂಗ್ರೆಸ್ ಸರಕಾರ ಬಡವರ ವಿರೋಧಿ, ರೈತ ವಿರೋಧಿ, ಜನಸಾಮಾನ್ಯರಿಗೆ ಬರೆ ಎಳೆಯುವ ಸರಕಾರ ಇದಾಗಿದೆ” ಎಂದು ಆಕ್ಷೇಪ ವ್ಯಕ್ತಪಡಿಸಿದರು.
“ಮುಂದೆ ಜಿಲ್ಲಾ ಪಂಚಾಯಿತಿ, ತಾಲ್ಲೂಕು ಪಂಚಾಯಿತಿ ಚುನಾವಣೆ ಬರಲಿದೆ. ಇದು ಕಾರ್ಯಕರ್ತರಿಗೆ ಶಕ್ತಿ ತುಂಬುವ ಚುನಾವಣೆ. ಇದನ್ನು ಜವಾಬ್ದಾರಿಯಿಂದ ನಿರ್ವಹಿಸಬೇಕಿದೆ. ಎಲ್ಲರೂ ಶ್ರಮ ಹಾಕೋಣ. ವಿಧಾನಸಭಾ ಅಧಿವೇಶನದಲ್ಲೂ ನಾವು ಒಟ್ಟಾಗಿ, ಒಂದಾಗಿ ಕಾಂಗ್ರೆಸ್ ಸೊಕ್ಕನ್ನು ಮುರಿಯುತ್ತೇವೆ” ಎಂದು ವಿಜಯೇಂದ್ರ ಅವರು ತಿಳಿಸಿದರು.