Homeಕರ್ನಾಟಕಕರ್ನಾಟಕ ಫಲಿತಾಂಶ: 28 ಕ್ಷೇತ್ರದಲ್ಲಿ ಗೆಲುವು ಯಾರಿಗೆ?

ಕರ್ನಾಟಕ ಫಲಿತಾಂಶ: 28 ಕ್ಷೇತ್ರದಲ್ಲಿ ಗೆಲುವು ಯಾರಿಗೆ?

ಲೋಕಸಭೆ ಚುನಾವಣೆಯಲ್ಲಿ ಕರ್ನಾಟಕದ 28 ಕ್ಷೇತ್ರಗಳ ಫಲಿತಾಂಶ ಒಂದೊಂದಾಗಿ ಪ್ರಕಟವಾಗುತ್ತಿದ್ದು, ವಿಜಯಮಾಲೆ ಯಾರ ಕೊರಳಿಗೆ ಎಂಬುದು ಸ್ಪಷ್ಟವಾಗುತ್ತಿದೆ.

ಮಂಡ್ಯ: ಕುಮಾರಸ್ವಾಮಿ ಗೆಲುವು

ದೇಶದ ಗಮನ ಸೆಳೆದಿದ್ದ ಮಂಡ್ಯ ಲೋಕಸಭಾ ಕ್ಷೇತ್ರದಲ್ಲಿ ಜೆಡಿಎಸ್‌ ಅಭ್ಯರ್ಥಿ, ಮಾಜಿ ಸಿಎಂ ಹೆಚ್‌ ಡಿ ಕುಮಾರಸ್ವಾಮಿ ದೊಡ್ಡ ಅಂತರದಲ್ಲಿ ಗೆಲುವು ಸಾಧಿಸಿದ್ದಾರೆ. ಕಾಂಗ್ರೆಸ್‌ ಅಭ್ಯರ್ಥಿ ಸ್ಟಾರ್‌ ಚಂದ್ರು ಸೋಲು ಅನುಭವಿಸಿದ್ದಾರೆ.

ಕೋಲಾರ ಎಸ್‌ಸಿ ಮೀಸಲು ಕ್ಷೇತ್ರ: ಜೆಡಿಎಸ್‌ ಅಭ್ಯರ್ಥಿ ಮಲ್ಲೇಶ್‌ ಬಾಬು ಗೆಲುವು

ಕೋಲಾರ ಎಸ್‌ಸಿ ಮೀಸಲು ಕ್ಷೇತ್ರದಲ್ಲಿ ಜೆಡಿಎಸ್‌ ಅಭ್ಯರ್ಥಿ ಮಲ್ಲೇಶ್‌ ಬಾಬು 45 ಸಾವಿರ ಮತಗಳ ಅಂತರದಲ್ಲಿ ಗೆಲುವು ಸಾಧಿಸಿದ್ದಾರೆ. ಕಾಂಗ್ರೆಸ್‌ ಅಭ್ಯರ್ಥಿ ಕೆ ಎಚ್‌ ಗೌತಮ್‌ ಸೋಲು ಅನುಭವಿಸಿದ್ದಾರೆ.

ಹಾಸನ ಕ್ಷೇತ್ರ: ಅತ್ಯಾಚಾರ ಆರೋಪಿ ಪ್ರಜ್ವಲ್‌ ರೇವಣ್ಣ ಸೋಲು, ಶ್ರೇಯಸ್‌ ಪಟೇಲ್ ಗೆಲುವು

ಹಾಸನ ಕ್ಷೇತ್ರದಲ್ಲಿ ಕಾಂಗ್ರೆಸ್‌ ಅಭ್ಯರ್ಥಿ ಶ್ರೇಯಸ್‌ ಪಟೇಲ್ ಗೆಲುವಿನ ನಗೆ ಬೀರಿದ್ದಾರೆ. ಲೈಂಗಿಕ ದೌರ್ಜನ್ಯ ಮತ್ತು ಅತ್ಯಾಚಾರ ಪ್ರಕರಣದ ಆರೋಪಿಯಾಗಿರುವ ಜೆಡಿಎಸ್‌ ಅಭ್ಯರ್ಥಿ ಪ್ರಜ್ವಲ್‌ ರೇವಣ್ಣ ಸೋಲು ಅನುಭವಿಸಿದ್ದಾರೆ.

ಉತ್ತರ ಕನ್ನಡ: ಮಾಜಿ ಸಭಾಧ್ಯಕ್ಷ ಕಾಗೇರಿ ಗೆಲುವು

ಉತ್ತರ ಕನ್ನಡ ಕ್ಷೇತ್ರದಲ್ಲಿ ಕಾಂಗ್ರೆಸ್‌ ಅಭ್ಯರ್ಥಿ ಅಂಜಲಿ ನಿಂಬಾಳ್ಕರ್‌ ಸೋಲು ಅನುಭವಿಸಿದ್ದಾರೆ. ಪ್ರತಿಸ್ಪರ್ಧಿ ಬಿಜೆಪಿ ಅಭ್ಯರ್ಥಿ, ಮಾಜಿ ಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿಗೆ ಮತದಾರರು ಗೆಲುವಿನ ಹಾರ ಹಾಕಿದ್ದಾರೆ.

ಚಾಮರಾಜನಗರ ಎಸ್‌ಸಿ ಮೀಸಲು ಕ್ಷೇತ್ರ: ಕಾಂಗ್ರೆಸ್‌ ಅಭ್ಯರ್ಥಿ ಸುನೀಲ್‌ ಬೋಸ್‌ ಗೆಲುವು

ಚಾಮರಾಜನಗರ ಎಸ್‌ಸಿ ಮೀಸಲು ಕ್ಷೇತ್ರದಲ್ಲಿ ಕಾಂಗ್ರೆಸ್‌ ಅಭ್ಯರ್ಥಿ ಸಚಿವ ಹೆಚ್‌ ಸಿ ಮಹದೇವಪ್ಪ ಪುತ್ರ ಸುನೀಲ್‌ ಬೋಸ್‌ ಅವರು ಗೆಲುವಿನ ನಗೆ ಬೀರಿದ್ದಾರೆ. ಬಿಜೆಪಿ ಅಭ್ಯರ್ಥಿ ಎಸ್‌ ಬಾಲರಾಜ್‌ ಸೋಲು ಅನುಭವಿಸಿದ್ದಾರೆ.

ಬಳ್ಳಾರಿ ಎಸ್‌ಟಿ ಮೀಸಲು ಕ್ಷೇತ್ರ: ಕಾಂಗ್ರೆಸ್‌ ಗೆಲುವು

ಬಳ್ಳಾರಿ ಎಸ್‌ಟಿ ಮೀಸಲು ಕ್ಷೇತ್ರದಲ್ಲಿ ಕಾಂಗ್ರೆಸ್‌ ಅಭ್ಯರ್ಥಿ ಇ. ತುಕಾರಾಮ್ ಅವರು ಬಿಜೆಪಿ ಅಭ್ಯರ್ಥಿ ಬಿ ಶ್ರೀರಾಮುಲು ಅವರನ್ನು ಸೋಲಿಸಿ ಗೆಲುವಿನ ನಗೆ ಬೀರಿದ್ದಾರೆ.

ಚಿಕ್ಕೋಡಿ: ಪ್ರಿಯಾಂಕಾ ಜಾರಕಿಹೊಳಿ ಗೆಲುವು

ಚಿಕ್ಕೋಡಿ ಲೋಕಸಭಾ ಕ್ಷೇತ್ರದ ಕಾಂಗ್ರೆಸ್‌ ಅಭ್ಯರ್ಥಿ ಸಚಿವ ಸತೀಶ್‌ ಜಾರಕಿಹೊಳಿ ಪುತ್ರಿ ಪ್ರಿಯಾಂಕಾ ಜಾರಕಿಹೊಳಿ ಸಂಸದರಾಗಿ ಆಯ್ಕೆಯಾಗಿದ್ದಾರೆ. ಬಿಜೆಪಿ ಅಭ್ಯರ್ಥಿ ಅಣ್ಣಾ ಸಾಹೇಬ್‌ ಜೊಲ್ಲೆ ಸೋಲು ಅನುಭವಿಸಿದ್ದಾರೆ.

ಹಾವೇರಿ ಕ್ಷೇತ್ರ: ಮಾಜಿ ಸಿಎಂ ಬೊಮ್ಮಾಯಿ ಗೆಲುವು

ಹಾವೇರಿ ಕ್ಷೇತ್ರದಲ್ಲಿ ಕಾಂಗ್ರೆಸ್‌ ಅಭ್ಯರ್ಥಿ ಆನಂದಸ್ವಾಮಿ ಗಡ್ಡದೇವರಮಠ ಅವರಿಗೆ ಸೋಲಾಗಿದೆ. ನಿರೀಕ್ಷೆಯಂತೆ ಬಿಜೆಪಿ ಅಭ್ಯರ್ಥಿ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಗೆಲುವು ಸಾಧಿಸಿದ್ದಾರೆ.

ಬೀದರ್‌ ಕ್ಷೇತ್ರ: ಸಾಗರ್‌ ಖಂಡ್ರೆ ಗೆಲುವು

ಬೀದರ್‌ ಕ್ಷೇತ್ರದ ಕಾಂಗ್ರೆಸ್‌ ಅಭ್ಯರ್ಥಿ ಸಚಿವ ಈಶ್ವರ್‌ ಖಂಡ್ರೆ ಪುತ್ರ ಸಾಗರ್‌ ಖಂಡ್ರೆ ಗೆಲುವು ಸಾಧಿಸಿದ್ದಾರೆ. ಈ ಮೂಲಕ ಅವರು ಕರ್ನಾಟಕ ಕಿರಿಯ ಸಂಸದರು ಎಂಬ ಹೆಗ್ಗಳಿಕೆಗೂ ಪಾತ್ರರಾಗಿದ್ದಾರೆ. ಬಿಜೆಪಿ ಅಭ್ಯರ್ಥಿ ಭಗವಂತ ಖೂಬಾ ಸೋಲು ಅನುಭವಿಸಿದ್ದಾರೆ.

ಧಾರವಾಡ ಕ್ಷೇತ್ರ: ಪ್ರಲ್ಹಾದ್‌ ಜೋಶಿ ಗೆಲುವು

ಧಾರವಾಡ ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಪ್ರಲ್ಹಾದ್‌ ಜೋಶಿ ಮತ್ತೆ ಗೆಲುವಿನ ನಾಗಾಲೋಟ ಮುಂದುವರಿಸಿದ್ದಾರೆ. ಕಾಂಗ್ರೆಸ್‌ ಅಭ್ಯರ್ಥಿ ವಿನೋದ ಅಸೂಟಿಗೆ ಸೋಲಾಗಿದೆ.

ಶಿವಮೊಗ್ಗ ಕ್ಷೇತ್ರ: ಬಿ ವೈ ರಾಘವೇಂದ್ರ ಗೆಲುವು

ಶಿವಮೊಗ್ಗ ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್‌ನಿಂದ ಸ್ಪರ್ಧಸಿದ್ದ ಮಾಜಿ ಸಿಎಂ ಬಂಗಾರಪ್ಪ ಅವರ ಪುತ್ರಿ ಹಾಗೂ ನಟ ಶಿವರಾಜ್‌ ಕುಮಾರ್‌ ಅವರ ಪತ್ನಿ ಗೀತಾ ಶಿವರಾಜ್‌ ಕುಮಾರ್ ಸೋಲು ಅನುಭವಿಸಿದ್ದಾರೆ. ಬಿಜೆಪಿ ಅಭ್ಯರ್ಥಿ ಬಿ ಎಸ್‌ ಯಡಿಯೂರಪ್ಪ ಅವರ ಪುತ್ರ ಬಿ ವೈ ರಾಘವೇಂದ್ರ ಮತ್ತೆ ಗೆಲುವಿನ ನಗೆ ಬೀರಿದ್ದಾರೆ.

ಬೆಂಗಳೂರು ಗ್ರಾಮಾಂತರ: ಸಿ ಎನ್‌ ಮಂಜುನಾಥ್ ಗೆಲುವು

ಬಿಜೆಪಿ-ಜೆಡಿಎಸ್‌ ಮೈತ್ರಿ ಮತ್ತು ಕಾಂಗ್ರೆಸ್‌ಗೆ ಪ್ರತಿಷ್ಠಿತ ಕಣವಾಗಿದ್ದ ಬೆಂಗಳೂರು ಗ್ರಾಮಾಂತರ ಕ್ಷೇತ್ರದಲ್ಲಿ ಕಾಂಗ್ರೆಸ್‌ ಅಭ್ಯರ್ಥಿ ಡಿಸಿಎಂ ಡಿಕೆ ಶಿವಕುಮಾರ್‌ ಸಹೋದರ ಡಿ ಕೆ ಸುರೇಶ್‌ಗೆ ಸೋಲಾಗಿದೆ. ಬಿಜೆಪಿ ಅಭ್ಯರ್ಥಿ ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡ‌ ಅಳಿಯ ಡಾ. ಸಿ ಎನ್‌ ಮಂಜುನಾಥ್ ಗೆಲುವು ಸಾಧಿಸಿದ್ದಾರೆ.

ದಕ್ಷಿಣ ಕನ್ನಡ: ಬ್ರಿಜೇಶ್‌ ಚೌಟಾ ಗೆಲುವು

ದಕ್ಷಿಣ ಕನ್ನಡ ಕ್ಷೇತ್ರದಲ್ಲಿ ಕಾಂಗ್ರೆಸ್‌ ಅಭ್ಯರ್ಥಿ‌ ಪದ್ಮರಾಜ್ ಅವರಿಗೆ ಸೋಲು ಅನುಭವಿಸಿದ್ದಾರೆ. ಬಿಜೆಪಿ ಅಭ್ಯರ್ಥಿ ಬ್ರಿಜೇಶ್‌ ಚೌಟಾ ಗೆಲುವು ಸಾಧಿಸಿದ್ದಾರೆ.

ಮೈಸೂರು: ಯಧುವೀರ್‌ ಒಡೆಯರ್‌ ಗೆಲುವು

ಮೈಸೂರು ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್‌ ಅಭ್ಯರ್ಥಿ ಎಂ ಲಕ್ಷ್ಮಣ್‌ ಸೋಲು ಅನುಭವಿಸಿದ್ದಾರೆ. ಬಿಜೆಪಿ ಅಭ್ಯರ್ಥಿ ಯಧುವೀರ್‌ ಒಡೆಯರ್‌ ಕೊರಳಿಗೆ ಮತದಾರರು ಗೆಲುವಿನ ಹಾರ ಹಾಕಿದ್ದಾರೆ. ಈ ಮೂಲಕ ಅವರು ಮೊದಲ ಬಾರಿಗೆ ಸಂಸತ್‌ ಪ್ರವೇಶಿಸುತ್ತಿದ್ದಾರೆ.

ಬೆಂಗಳೂರು ದಕ್ಷಿಣ: ತೇಜಸ್ವಿ ಸೂರ್ಯ ಗೆಲುವು

ಬೆಂಗಳೂರು ದಕ್ಷಿಣ ಕೇತ್ರದಲ್ಲಿ ಕಾಂಗ್ರೆಸ್‌ ಅಭ್ಯರ್ಥಿಯಾಗಿದ್ದ ಸಚಿವ ರಾಮಲಿಂಗಾರೆಡ್ಡಿ ಪುತ್ರಿ ಸೌಮ್ಯಾ ರೆಡ್ಡಿಗೆ ಸೋಲು ಉಂಟಾಗಿದೆ. ಬಿಜೆಪಿ ಅಭ್ಯರ್ಥಿ ತೇಜಸ್ವಿ ಸೂರ್ಯ ಮತ್ತೆ ಎರಡನೇ ಬಾರಿಗೆ ಸಂಸತ್‌ ಪ್ರವೇಶಿಸುತ್ತಿದ್ದಾರೆ.

ಬಾಗಲಕೋಟೆ ಕ್ಷೇತ್ರ: ಪಿ ಸಿ ಗದ್ದಿಗೌಡರ್ ಗೆಲುವು

ಬಾಗಲಕೋಟೆ ಕ್ಷೇತ್ರದಲ್ಲಿ ಕಾಂಗ್ರೆಸ್‌ ಅಭ್ಯರ್ಥಿಯಾಗಿದ್ದ ಸಚಿವ ಶಿವಾನಂದ ಪಾಟೀಲ್‌ ಪುತ್ರಿ ಸಂಯುಕ್ತಾ ಪಾಟೀಲ್ ಅವರು ಸೋಲು ಅನುಭವಿಸಿದ್ದಾರೆ. ಆ ಮೂಲಕ ಸೋಲಿಲ್ಲದ ಸರ್ದಾರ ಖ್ಯಾತಿಯ ಬಿಜೆಪಿ ಅಭ್ಯರ್ಥಿ ಪಿ ಸಿ ಗದ್ದಿಗೌಡರ್ ಮತ್ತೆ ಗೆಲುವು ಸಾಧಿಸಿದ್ದಾರೆ.

ಚಿಕ್ಕಬಳ್ಳಾಪುರ ಕ್ಷೇತ್ರ: ಕೆ ಸುಧಾಕರ್ ಗೆಲುವು 

ಚಿಕ್ಕಬಳ್ಳಾಪುರ ಕ್ಷೇತ್ರದಲ್ಲಿ ಕಾಂಗ್ರೆಸ್‌ ಅಭ್ಯರ್ಥಿ ರಕ್ಷಾ ರಾಮಯ್ಯ ಸೋಲು ಅನುಭವಿಸಿದ್ದಾರೆ. ಬಿಜೆಪಿ ಅಭ್ಯರ್ಥಿ  ಡಾ. ಕೆ ಸುಧಾಕರ್ ಗೆಲುವು ಸಾಧಿಸಿದ್ದು, ಮೊದಲ ಬಾರಿಗೆ ಸಂಸತ್‌ ಪ್ರವೇಶಿಸುತ್ತಿದ್ದಾರೆ.

ದಾವಣಗೆರೆ: ಕಾಂಗ್ರೆಸ್‌ ಅಭ್ಯರ್ಥಿ ಪ್ರಭಾ ಮಲ್ಲಿಕಾರ್ಜುನ ಗೆಲುವು

ದಾವಣಗೆರೆ ಕ್ಷೇತ್ರದಲ್ಲಿ ಕಾಂಗ್ರೆಸ್‌ನಿಂದ ಸ್ಪರ್ಧಿಸಿದ್ದ ಶಾಮನೂರು ಶಿವಶಂಕರಪ್ಪ ಸೊಸೆ ಡಾ. ಪ್ರಭಾ ಮಲ್ಲಿಕಾರ್ಜುನ ಗೆಲುವು ಸಾಧಿಸಿದ್ದಾರೆ. ಬಿಜೆಪಿ ಅಭ್ಯರ್ಥಿ ಗಾಯಿತ್ರಿ ಸಿದ್ದೇಶ್ವರ್ ಸೋಲು ಅನುಭವಿಸಿದ್ದಾರೆ.

ರಾಯಚೂರು ಎಸ್‌ಟಿ: ಕಾಂಗ್ರೆಸ್‌ ಅಭ್ಯರ್ಥಿ ಜಿ ಕುಮಾರ್‌ ನಾಯಕ್ ಗೆಲುವು

ರಾಯಚೂರು ಎಸ್‌ಟಿ ಮೀಸಲು ಕ್ಷೇತ್ರದಲ್ಲಿ ಕಾಂಗ್ರೆಸ್‌ ಅಭ್ಯರ್ಥಿ ಜಿ ಕುಮಾರ್‌ ನಾಯಕ್ ಗೆಲುವು ಸಾಧಿಸಿದ್ದಾರೆ. ಬಿಜೆಪಿ ಅಭ್ಯರ್ಥಿ ರಾಜಾ ಅಮರೇಶ್ವರ್‌ ನಾಯಕ್ ಸೋಲು ಕಂಡಿದ್ದಾರೆ.

ಚಿತ್ರದುರ್ಗ ಎಸ್‌ಸಿ: ಗೋವಿಂದ ಕಾರಜೋಳ ಗೆಲುವು 

ಚಿತ್ರದುರ್ಗ ಎಸ್‌ಸಿ ಮೀಸಲು ಕ್ಷೇತ್ರದಲ್ಲಿ ಕಾಂಗ್ರೆಸ್‌ ಅಭ್ಯರ್ಥಿ ಬಿ ಎನ್‌ ಚಂದ್ರಪ್ಪ ಸೋಲು ಅನುಭವಿಸಿದ್ದು, ಜೆಪಿ ಅಭ್ಯರ್ಥಿ ಗೋವಿಂದ ಕಾರಜೋಳ ಗೆಲುವು ಸಾಧಿಸಿದ್ದಾರೆ.

ಕೊಪ್ಪಳ ಕ್ಷೇತ್ರ: ರಾಘವೇಂದ್ರ ಹಿಟ್ನಾಳ್ ಗೆಲುವು

ಕೊಪ್ಪಳ ಕ್ಷೇತ್ರದಲ್ಲಿ ಕಾಂಗ್ರೆಸ್‌ ಅಭ್ಯರ್ಥಿ ರಾಘವೇಂದ್ರ ಹಿಟ್ನಾಳ್ ಗೆಲುವು ಸಾಧಿಸಿದ್ದಾರೆ. ಬಿಜೆಪಿ ಅಭ್ಯರ್ಥಿ ಡಾ. ಬಸವರಾಜ ಕ್ಯಾವಟರ್‌ ಸೋಲು ಅನುಭವಿಸಿದ್ದಾರೆ. 

ಬೆಳಗಾವಿ ಕ್ಷೇತ್ರ: ಜಗದೀಶ್‌ ಶೆಟ್ಟರ್ ಗೆಲುವು

ಬೆಳಗಾವಿ ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್‌ ಅಭ್ಯರ್ಥಿಯಾಗಿದ್ದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ ಪುತ್ರ ಮೃಣಾಲ್‌ ಹೆಬ್ಬಾಳ್ಕರ್‌ ಅವರು ಸೋಲು ಅನುಭವಿಸಿದ್ದಾರೆ. ಮಾಜಿ ಸಿಎಂ ಜಗದೀಶ್‌ ಶೆಟ್ಟರ್ ಗೆಲುವು ಕಂಡಿದ್ದಾರೆ.

ಬೆಂಗಳೂರು ಕೇಂದ್ರ: ಪಿ ಸಿ ಮೋಹನ್ ಗೆಲುವು

ಬೆಂಗಳೂರು ಕೇಂದ್ರ ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್‌ ಅಭ್ಯರ್ಥಿ ಮನ್ಸೂರ್‌ ಅಲಿಖಾನ್ ಆರಂಭದಿಂದಲೂ ಮುನ್ನಡೆ ಸಾಧಿಸುತ್ತ ಬಂದರೂ ಕೊನೆ ಕ್ಷಣದಲ್ಲಿ ಸೋಲು ಅನುಭವಿಸಿದ್ದಾರೆ. ಬಿಜೆಪಿ ಅಭ್ಯರ್ಥಿ ಪಿ ಸಿ ಮೋಹನ್ ಮತ್ತೊಮ್ಮೆ ಗೆಲುವು ಸಾಧಿಸಿದ್ದಾರೆ.

ಬೆಂಗಳೂರು ಉತ್ತರ: ಶೋಭಾ ಕರಂದ್ಲಾಜೆ ಗೆಲುವು

ಬೆಂಗಳೂರು ಉತ್ತರ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಶೋಭಾ ಕರಂದ್ಲಾಜೆ ಗೆಲುವು ಸಾಧಿಸಿದ್ದಾರೆ. ಕಾಂಗ್ರೆಸ್‌ ಅಭ್ಯರ್ಥಿ ಪ್ರೊ.ರಾಜೀವ್‌ ಗೌಡ ಸೋಲು ಕಂಡಿದ್ದಾರೆ.

ಕಲಬುರಗಿ ಎಸ್‌ಸಿ ಮೀಸಲು ಕ್ಷೇತ್ರ: ಖರ್ಗೆ ಅಳಿಯ ರಾಧಾಕೃಷ್ಣ ಗೆಲುವು

ಕಲಬುರಗಿ ಎಸ್‌ಸಿ ಮೀಸಲು ಕ್ಷೇತ್ರದಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಅಳಿಯ ರಾಧಾಕೃಷ್ಣ ದೊಡ್ಡಮನಿ ಅವರು ಗೆಲುವು ಸಾಧಿಸಿದ್ದಾರೆ. ಈ ಮೂಲಕ ಅವರು ಮೊದಲ ಬಾರಿಗೆ ಸಂಸತ್‌ ಪ್ರವೇಶಿಸುತ್ತಿದ್ದಾರೆ. ಬಿಜೆಪಿ ಅಭ್ಯರ್ಥಿ ಉಮೇಶ್‌ ಜಾದವ್‌ ಇಲ್ಲಿ ಸೋಲು ಕಂಡಿದ್ದಾರೆ.

ವಿಜಯಪುರ ಎಸ್‌ಸಿ: ರಮೇಶ್‌ ಜಿಗಜಿಣಗಿ ಗೆಲುವು

ವಿಜಯಪುರ ಎಸ್‌ಸಿ ಮೀಸಲು ಕ್ಷೇತ್ರದಲ್ಲಿ ಕಾಂಗ್ರೆಸ್‌ ಅಭ್ಯರ್ಥಿ ರಾಜು ಅಲಗೂರು ಸೋಲು ಕಂಡಿದ್ದಾರೆ. ಬಿಜೆಪಿ ಅಭ್ಯರ್ಥಿ ರಮೇಶ್‌ ಜಿಗಜಿಣಗಿ ಗೆಲುವು ಸಾಧಿಸಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments