ಕೇರಳದಲ್ಲಿ ಸಂಭವಿಸಿದ ಗುಡ್ಡ ಕುಸಿತ ಅವಘಡದಲ್ಲಿ 70ಕ್ಕೂ ಅಧಿಕ ಮಂದಿ ಸಾವಿಗೀಡಾಗಿದ್ದು, ಹಲವರು ಕಣ್ಮರೆಯಾಗಿರುವ ಸುದ್ದಿ ಕೇಳಿ ಎದೆ ನಲುಗಿತು. ಇಂತಹ ಸಂಕಷ್ಟದ ಸಮಯದಲ್ಲಿ ನೆರೆಯ ಕೇರಳ ಜನರ ಜೊತೆ ನಾವು ನಿಲ್ಲಲಿದ್ದೇವೆ. ಕೇರಳಕ್ಕೆ ಅಗತ್ಯವಿರುವ ಎಲ್ಲ ನೆರವನ್ನು ನಮ್ಮ ಸರ್ಕಾರ ನೀಡಲಿದೆ ಎಂದು ಸಿಎಂ ಸಿದ್ದರಾಮಯ್ಯ ಎಕ್ಸ್ ತಾಣದ ಮೂಲಕ ತಿಳಿಸಿದ್ದಾರೆ.
ಹಾಗೆಯೇ ಕೇಂದ್ರ ಸಚಿವ ಎಚ್ ಡಿ ಕುಮಾರಸ್ವಾಮಿ ಈ ಬಗ್ಗೆ ಮಾಧ್ಯಮ ಹೇಳಿಕೆ ಬಿಡುಗಡೆ ಮಾಡಿ, “ಕೇರಳದ ವಯನಾಡು ಬಳಿ ಉಂಟಾಗಿರುವ ಭೀಕರ ಭೂಕುಸಿತದಿಂದ ಅನೇಕರು ಧಾರುಣ ಸಾವನ್ನಪ್ಪಿರುವ ಘಟನೆ ನನಗೆ ತೀವ್ರ ಆಘಾತ ಉಂಟು ಮಾಡಿದೆ” ಎಂದಿದ್ದಾರೆ.
ಮುಂದುವರಿದು, “ಇನ್ನು ಅನೇಕರು ಮಣ್ಣಿನಡಿಯಲ್ಲಿ ಸಿಲುಕಿದ್ದು, ಅವರನ್ನು ರಕ್ಷಿಸುವ ಕಾರ್ಯ ಸಮರೋಪಾದಿಯಲ್ಲಿ ಸಾಗಿದೆ. ಪ್ರಧಾನಿ ನರೇಂದ್ರ ಮೋದಿ ಅವರು ತುರ್ತಾಗಿ ಸ್ಪಂದಿಸಿದ್ದು, ಕೇರಳದ ಮುಖ್ಯಮಂತ್ರಿಗಳ ಜತೆ ಮಾತನಾಡಿ, ರಕ್ಷಣಾ ಕಾರ್ಯಗಳಿಗೆ ಸಕಲ ನೆರವು ನೀಡುವುದಾಗಿ ಭರವಸೆ ನೀಡಿದ್ದಾರೆ. ಹೀಗಾಗಿ ಪ್ರಧಾನಿಗಳನ್ನು ನಾನು ಅಭಿನಂದಿಸುತ್ತೇನೆ” ಎಂದು ಹೇಳಿದ್ದಾರೆ.
“ಈ ದುರಂತದಲ್ಲಿ ಸಾವನ್ನಪ್ಪಿದವರಿಗೆ ಚಿರಶಾಂತಿ ಸಿಗಲಿ ಹಾಗೂ ಈ ದುಃಖವನ್ನು ಭರಿಸುವ ಶಕ್ತಿಯನ್ನು ಆ ಭಗವಂತ ಎಲ್ಲಾ ಕುಟುಂಬಗಳಿಗೆ ನೀಡಲಿ ಎಂದು ಪ್ರಾರ್ಥಿಸುತ್ತೇನೆ ಎಂದಿರುವ ಸಚಿವರು; ಕೇರಳ ಸೇರಿ ದೇಶದೆಲ್ಲೆಡೆ ಭಾರೀ ಮಳೆ ಆಗುತ್ತಿದ್ದು, ಭೂಕುಸಿತ, ನೆರೆ ಉಂಟಾಗಿದೆ. ಕರ್ನಾಟಕದಲ್ಲಿಯೂ ಅನೇಕ ಜಿಲ್ಲೆಗಳಲ್ಲಿ ಇದೇ ಸಮಸ್ಯೆ ಸೃಷ್ಟಿಯಾಗಿದೆ. ಈ ಬಗ್ಗೆ ಸಾರ್ವಜನಿಕರು ಬಹಳ ಎಚ್ಚರಿಕೆ ವಹಿಸಬೇಕು ಹಾಗೂ ರಾಜ್ಯ ಸರಕಾರವೂ 24X7 ರಕ್ಷಣಾ ಸಿಬ್ಬಂದಿಯನ್ನು ಸನ್ನದ್ಧ ಸ್ಥಿತಿಯಲ್ಲಿಟ್ಟು, ಅಪಾಯವಿರುವ ಸ್ಥಳಗಳಲ್ಲಿ ಅಧಿಕಾರಿಗಳನ್ನು ನಿಯೋಜಿಸಬೇಕು” ಎಂದು ಒತ್ತಾಯಿಸಿದ್ದಾರೆ.