Homeಕರ್ನಾಟಕಗೃಹಲಕ್ಷ್ಮಿ‌ | ಚಾಮುಂಡೇಶ್ವರಿಗೆ ಐದು ವರ್ಷಗಳ 1.18 ಲಕ್ಷ ರೂ. ಹಣ ನೀಡಿದ ಸಚಿವೆ ಲಕ್ಷ್ಮೀ...

ಗೃಹಲಕ್ಷ್ಮಿ‌ | ಚಾಮುಂಡೇಶ್ವರಿಗೆ ಐದು ವರ್ಷಗಳ 1.18 ಲಕ್ಷ ರೂ. ಹಣ ನೀಡಿದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್

ಪ್ರತಿ ತಿಂಗಳಿಗೆ 2 ಸಾವಿರ ರೂ.ನಂತೆ 59 ತಿಂಗಳ ಕಂತಿನ ಹಣ ಒಟ್ಟು 1.18 ಲಕ್ಷ ರೂ.ಗಳನ್ನು ಚಾಮುಂಡೇಶ್ವರಿ ದೇವಿಗೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ವೈಯಕ್ತಿಕವಾಗಿ ನೀಡಿದ್ದಾರೆ.

ರಾಜ್ಯ ಕಾಂಗ್ರೆಸ್ ಸರ್ಕಾರದ ಮಹತ್ವಾಕಾಂಕ್ಷಿ ಗೃಹಲಕ್ಷ್ಮಿ ಯೋಜನೆಯ ಭರ್ತಿ ಐದು ವರ್ಷಗಳ ಕಂತನ್ನು ಶಾಸಕ ದಿನೇಶ್ ಗೂಳಿಗೌಡ ಅವರು ಚಾಮುಂಡೇಶ್ವರಿ ದೇವಿಗೆ ಸಮರ್ಪಿಸಿದರು.

ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರ ಪರವಾಗಿ ಶಾಸಕ ದಿನೇಶ್ ಗೂಳಿಗೌಡ ಅವರು ಮೈಸೂರಿನ ಚಾಮುಂಡಿ ಬೆಟ್ಟಕ್ಕೆ ತೆರಳಿ ನಾಡದೇವತೆ ಚಾಮುಂಡೇಶ್ವರಿ ದೇವಿ ದರ್ಶನ ಪಡೆದು ಹಣವನ್ನು ಅರ್ಪಿಸುವ ಮೂಲಕ ಸರ್ಕಾರದ ಹರಕೆ ತೀರಿಸಿದರು.

ಈ ಕುರಿತು ಪತ್ರಿಕಾ ಪ್ರಕಟಣೆ ಹೊರಡಿಸಿರುವ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್, “ಆಗಸ್ಟ್ 30 ರಂದು ಮೈಸೂರಿನಲ್ಲಿ ಗೃಹಲಕ್ಷ್ಮೀ ಯೋಜನೆಗೆ ಚಾಲನೆ ನೀಡುವ ಮೊದಲು ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್, ನಾನು, ಶಾಸಕರಾದ ದಿನೇಶ್ ಗೂಳಿಗೌಡ ಇತರ ಪ್ರಮುಖರು ದೇವಿಯ ದರ್ಶನ ಮಾಡಿ‌ ಹರಕೆ ತೀರಿಸಿದ್ದೆವು. ರಾಜ್ಯದ ಯಜಮಾನಿಯರ‌ ಖಾತೆಗೆ ಪ್ರತಿ ತಿಂಗಳು ಜಮಾ ಮಾಡುವ ತಲಾ 2 ಸಾವಿರ ರೂ.ಗಳ ಮೊದಲ ಕಂತನ್ನು ತಾಯಿ ಚಾಮುಂಡೇಶ್ವರಿ ದೇವಿಗೆ ಅಂದು ಸಮರ್ಪಣೆ ಮಾಡಿದ್ದೆವು” ಎಂದು ತಿಳಿಸಿದ್ದಾರೆ.

“ಪ್ರತಿ ತಿಂಗಳು ತಾಯಿ ಚಾಮುಂಡೇಶ್ವರಿ ದೇವಿಗೆ ಗೃಹಲಕ್ಷ್ಮಿ ಕಂತನ್ನು ನೀಡುವಂತೆ ಶಾಸಕ ದಿನೇಶ ಗೂಳಿಗೌಡ ಅವರು ಸಿಎಂ‌ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ. ಶಿವಕುಮಾರ್ ಅವರಲ್ಲಿ ಮನವಿ ಮಾಡಿದ್ದರು. ಅವರು ತಕ್ಷಣ ಈ ಕುರಿತು ಕ್ರಮ ವಹಿಸುವಂತೆ ಸೂಚಿಸಿದ್ದರು. ಆ ಹಿನ್ನೆಲೆಯಲ್ಲಿ ಒಂದೇ ಸಲ ಎಲ್ಲ ಕಂತಿನ ಹಣವನ್ನು ನಾಡದೇವಿಗೆ ಅರ್ಪಿಸಲಾಗಿದೆ” ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದ್ದಾರೆ.

“ಮೊದಲ ಕಂತನ್ನು ಸಿಎಂ, ಡಿಸಿಎಂ ಹಾಗೂ ನಾನು ತಾಯಿ ಚಾಮುಂಡೇಶ್ವರಿ ದೇವಿಗೆ ಅರ್ಪಿಸಿದ್ದೇವೆ. ಹಾಗಾಗಿ ಉಳಿದ 59 ತಿಂಗಳ ಹಣವನ್ನು ದೇವಿಗೆ ನಾನು ವೈಯಕ್ತಿಕವಾಗಿ ಸಲ್ಲಿಸುತ್ತಿದ್ದೇನೆ. ಈ ಮೊತ್ತವನ್ನು ಶಾಸಕರಾದ ದಿನೇಶ್ ಗೂಳಿಗೌಡ ಅವರ ಮೂಲಕ ಸಮರ್ಪಿಸುತ್ತಿದ್ದೇನೆ” ಎಂದು ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಹೇಳಿದ್ದಾರೆ.‌

5 ವರ್ಷವೂ ಯೋಜನೆ

“ಮಹಿಳೆಯರನ್ನು ಆರ್ಥಿಕವಾಗಿ ಸಬಲರನ್ನಾಗಿ ಮಾಡುವ ಗೃಹಲಕ್ಷ್ಮೀ ಯೋಜನೆಯು ದೇಶದಲ್ಲಿ, ಅಥವಾ ವಿಶ್ವದಲ್ಲಿ ಜಾರಿಯಾದ ಅತಿ ವಿಶಿಷ್ಟ ಹಾಗೂ ಜನಪ್ರಿಯ ಯೋಜನೆಯಾಗಿದೆ. ಇದುವರೆಗೆ ರಾಜ್ಯಾದ್ಯಂತ 1 ಕೋಟಿ 17 ಲಕ್ಷ ಯಜಮಾನಿಯರು ಗೃಹಲಕ್ಷ್ಮಿ ಯೋಜನೆ ಮೂಲಕ ಹಣ ಪಡೆಯಲು ನೋಂದಣಿ ಮಾಡಿಕೊಂಡಿದ್ದಾರೆ. ಇವರಲ್ಲಿ 1 ಕೋಟಿ 10 ಲಕ್ಷ ಯಜಮಾನಿಯರ ಖಾತೆಗಳಿಗೆ ನೇರವಾಗಿ ಹಣ ಜಮಾ ಆಗುತ್ತಿದೆ” ಎಂದಿದ್ದಾರೆ.

“ಯೋಜನೆಗಾಗಿ ನಮ್ಮ ಸರ್ಕಾರ 11,200 ಕೋಟಿ ರೂ.ಗಳನ್ನು ಈಗಾಗಲೇ ಬಿಡುಗಡೆ ಮಾಡಿದೆ. ಪ್ರತಿ ತಿಂಗಳು ಸುಮಾರು 2,100 ಕೋಟಿ ರೂ.ಗಳನ್ನು ಮಹಿಳೆಯರ ಖಾತೆಗೆ ಜಮಾ ಮಾಡಲಾಗುತ್ತಿದೆ. ಇದುವರೆಗೆ ಸುಮಾರು 6 ಸಾವಿರ ಕೋಟಿ ರೂ. ಜಮಾ ಆಗಿದೆ. 2028 ರ ವಿಧಾನಸಭೆ ಚುನಾವಣೆಯಲ್ಲೂ ನಾವು ಮತ್ತೆ ಅಧಿಕಾರಕ್ಕೆ ಬಂದು ಗ್ಯಾರಂಟಿ ಯೋಜನೆಗಳನ್ನು ಪುನಃ, ಪುನಃ ಮುಂದುವರಿಸಲಿದ್ದೇವೆ. ಯೋಜನೆ 3 ತಿಂಗಳಿಗೆ ನಿಲ್ಲುತ್ತದೆ, 6 ತಿಂಗಳಿಗೆ ಸ್ಥಗಿತವಾಗುತ್ತದೆ. ಲೋಕಸಭಾ ಚುನಾವಣೆಯ ನಂತರ ಮುಕ್ತಾಯವಾಗುತ್ತದೆ ಎಂದು ವಿರೋಧ ಪಕ್ಷಗಳು ಅಪಪ್ರಚಾರ ಮಾಡುತ್ತಿವೆ. ಅವುಗಳಿಗೆ ಕಿವಿಗೊಡಬೇಡಿ. ಕೇವಲ ಈ ಐದು ವರ್ಷವಲ್ಲ,ಮುಂದಿನ ಐದು ವರ್ಷವೂ ನಾವೇ ಅಧಿಕಾರದಲ್ಲಿರುತ್ತೇವೆ. ಮತ್ತೆ ಈ ಗ್ಯಾರಂಟಿ ಯೋಜನೆಗಳನ್ನು ಮುಂದುವರಿಸುತ್ತೇವೆ” ಎಂದು ಲಕ್ಷ್ಮಿ ಹೆಬ್ಬಾಳ್ಕರ್ ಸ್ಪಷ್ಟಪಡಿಸಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments