ಬಿ ವೈ ವಿಜಯೇಂದ್ರನನ್ನು ನಾವು ಒಪ್ಪಲ್ಲ, ಅವರು ಬಿಜೆಪಿಯ ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಲೇಬೇಕು ಎಂದು ವಿಜಯಪುರ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಪುನರುಚ್ಚರಿಸುವ ಮೂಲಕ ವಾಗ್ದಾಳಿ ಮುಂದುವರಿಸಿದ್ದಾರೆ.
ಹುಬ್ಬಳ್ಳಿಯಲ್ಲಿ ಸೋಮವಾರ ಮಾತನಾಡಿ, “ಮಾಜಿ ಸಚಿವ ರಮೇಶ ಜಾರಕಿಹೊಳಿ ಮಾತನಾಡಿದ್ದು ಸತ್ಯ, ನಾನು ಸದಾಕಾಲ ಅವರ ಪರವಾಗಿದ್ದೇನೆ. ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನಕ್ಕೆ ವಿಜಯೇಂದ್ರ ಲಾಯಕ್ ಇಲ್ಲ. ವಿಜಯೇಂದ್ರ ಅವರ ಕಾರಣದಿಂದಾಗಿಯೇ ಸುನೀಲ್ ಕುಮಾರ್ ಅವರು ಕಾರ್ಯದರ್ಶಿ ಸ್ಥಾನಕ್ಕೆ ರಾಜೀನಾಮೆ ನೀಡಬೇಕಾಗಿ ಬಂದಿದೆ. ವಿಜಯೇಂದ್ರ ಅವರ ನಾಯಕತ್ವವನ್ನು ನಾವು ಒಪ್ಪಲ್ಲ, ವಿಜಯೇಂದ್ರ ಕೂಡಲೇ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕು” ಎಂದು ಆಗ್ರಹಿಸಿದರು.
“ಶಾಸಕ ರಮೇಶ ಜಾರಕಿಹೊಳಿ ಅವರ ಜೊತೆ ಚರ್ಚಿಸಿ, ನಮ್ಮ ಅಭ್ಯರ್ಥಿಯನ್ನು ಅಂತಿಮಗೊಳಿಸಲಾಗುವುದು. ಪಕ್ಷದ ಹೈಕಮಾಂಡ್ ವಿಜಯೇಂದ್ರ ಅವರನ್ನು ಏಕೆ ಅಧ್ಯಕ್ಷರನ್ನಾಗಿ ಮಾಡಿದೆಯೊ ಗೊತ್ತಿಲ್ಲ. ಪಕ್ಷದ ಹಿತದೃಷ್ಟಿಯಿಂದ ಅವರನ್ನು ಬದಲಾಯಿಸಲೇಬೇಕು. ವಂಶಾಡಳಿತ ಹಾಗೂ ಭ್ರಷ್ಟಾಚಾರದ ವಿರುದ್ಧ ನಾವು ಹೋರಾಡುತ್ತಿದ್ದೇವೆ” ಎಂದು ಹೇಳಿದರು.