ದೇವಸ್ಥಾನದ ಜಾಗವನ್ನು ಅತಿಕ್ರಮಿಸಿ ನಿರ್ಮಿಸಿದ ಗೋಡೆಯನ್ನು ತೆರವುಗೊಳಿಸುವ ವಿಚಾರವಾಗಿ ಎರಡು ಗುಂಪುಗಳ ನಡುವೆ ಘರ್ಷಣೆ ಉಂಟಾಗಿ ಕಲ್ಲು ತೂರಾಟ ನಡೆದಿರುವ ಘಟನೆ ಮಧ್ಯಪ್ರದೇಶದ ಮೌಗಂಜ್ ಜಿಲ್ಲೆಯ ದೇವ್ರಾ ಗ್ರಾಮದಲ್ಲಿ ನಡೆದಿದೆ.
ಪರಿಸ್ಥಿತಿ ತಿಳಿಗೊಳಿಸಲು ಬಂದಿದ್ದ ಪೊಲೀಸರಿಗೂ ಕಿಡಿಗೇಡಿಗಳು ಕಲ್ಲು ಹೊಡೆದಿದ್ದಾರೆ. ಘಟನೆಯಲ್ಲಿ ಇಬ್ಬರು ಪೊಲೀಸರು ಸೇರಿದಂತೆ ಐವರು ಗಂಭೀರವಾಗಿ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ.
ದೇವಸ್ಥಾನದ ಒತ್ತುವರಿ ಜಾಗವನ್ನು ತೆರವುಗೊಳಿಸುವಂತೆ ಆಗ್ರಹಿಸಿ ಗ್ರಾಮಸ್ಥರು ಕಳೆದ ಮೂರು ದಿನಗಳಿಂದ ಪ್ರತಿಭಟನೆ ನಡೆಸುತ್ತಿದ್ದರು. ಹಾಗಾಗಿ ಕ್ರಮ ಕೈಗೊಳ್ಳುವಂತೆ ಶಾಸಕರು ಸ್ಥಳೀಯ ಆಡಳಿತಕ್ಕೆ ಸೂಚಿಸಿದ್ದರು.
ಸ್ಥಳೀಯ ಅಧಿಕಾರಿಗಳು ಕ್ರಮಕೈಗೊಳ್ಳದಿದ್ದಾಗ ಬಿಜೆಪಿ ಶಾಸಕ ಪ್ರದೀಪ್ ಪಟೇಲ್ ಅವರು ತಮ್ಮ ಬೆಂಬಲಿಗರೊಂದಿಗೆ ದೇವಸ್ಥಾನದ ಬಳಿ ಬಂದಿದ್ದರು. ಇದೇ ಸಂದರ್ಭದಲ್ಲಿ ಶಾಸಕರು ಬೆಂಬಲಿಗರು ಮತ್ತು ಪ್ರತಿಭಟನಾಕಾರರ ನಡುವೆ ಘರ್ಷಣೆ ನಡೆದಿದೆ. ಕೆಲವು ಕಿಡಿಗೇಡಿಗಳು ಗುಡಿಸಲಿಗೆ ಬೆಂಕಿ ಹಚ್ಚಿದ್ದಾರೆ.
ಮೌಗಂಜ್ ಎಸ್‌ಪಿ ರಸ್ನಾ ಠಾಕೂರ್ ಈ ಬಗ್ಗೆ ಮಾತನಾಡಿದ್ದು, “ದೇವ್ರಾ ಗ್ರಾಮದಲ್ಲಿ ಪರಿಸ್ಥಿತಿ ನಿಯಂತ್ರಿಸಲು ಹಾಗೂ ಶಾಂತಿ ಕಾಪಾಡಲು ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ” ಎಂದು ತಿಳಿಸಿದ್ದಾರೆ.