ಮಂಡ್ಯ ಲೋಕಸಭಾ ಕ್ಷೇತ್ರಕ್ಕೆ ಜೆಡಿಎಸ್ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಲು ಮಂಡ್ಯ ಜಿಲ್ಲಾಧಿಕಾರಿಗಳ ಕಚೇರಿಗೆ ತೆರಳುವ ಮೊದಲು ಮಾಜಿ ಸಿಎಂ ಎಚ್ ಡಿ ಕುಮಾರಸ್ವಾಮಿ ಅವರು ಮಂಡ್ಯ ನಗರದ ಅರ್ಕೇಶ್ವರ ದೇವಸ್ಥಾನಕ್ಕೆ ತೆರಳಿ ಪೂಜೆ ಸಲ್ಲಿಸಿದರು.
ಈ ವೇಳೆ ಪಕ್ಷದ ನೂರಾರು ಕಾರ್ಯಕರ್ತರು ಕುಮಾರಸ್ವಾಮಿ ಜೊತೆಗಿದ್ದರು. ಈ ವೇಳೆ ಅಂಬೇಡ್ಕರ್, ಕಾವೇರಿ, ವಿಶ್ವೇಶ್ವರಯ್ಯ ಪ್ರತಿಮೆಗೆ ಮಾಲಾರ್ಪಣೆ ಕುಮಾರಸ್ವಾಮಿ ಮಾಡಿದರು. ಮಂಡ್ಯ ಡಿಸಿ ಕಚೇರಿಗೆ ತೆರಳಿ ನಾಮಪತ್ರ ಸಲ್ಲಿಕೆ ಮಾಡುತ್ತಿದ್ದಾರೆ.
ನಾಮಪತ್ರ ಸಲ್ಲಿಕೆ ನಂತರ ಜೆಡಿಎಸ್-ಬಿಜೆಪಿ ಮೈತ್ರಿ ಸಮಾವೇಶ ನಡೆಯುತ್ತಿದೆ. ಮಂಡ್ಯ ವಿವಿ ಆವರಣದಲ್ಲಿ ಸಮಾವೇಶ ನಡೆಯಲಿದೆ. ಸಮಾವೇಶದಲ್ಲಿ ಹಲವು ಸಮುದಾಯದ ಮುಖಂಡರು ಭಾಗಿಯಾಗಲಿದ್ದಾರೆ. ಗೋವಾ ಸಿಎಂ ಪ್ರಮೋದ್ ಸಾವಂತ್, ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ, ಮೈಸೂರು ಅಭ್ಯರ್ಥಿ ಯದುವೀರ್, ನಿಖಿಲ್ ಕುಮಾರಸ್ವಾಮಿ, ಜಿಲ್ಲೆಯ ಮಾಜಿ ಸಚಿವರು, ಶಾಸಕರು, ಸ್ಥಳೀಯ ಮುಖಂಡರು ಸಮಾವೇಶದಲ್ಲಿ ಭಾಗಿಯಾಗುತ್ತಿದ್ದಾರೆ.
ಸುಮಲತಾ ಅಂಬರೀಶ್ ಅವರು ಮಂಡ್ಯ ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸದೆ ಬಿಜೆಪಿ ಸೇರುವ ಘೊಷಣೆ ನಿನ್ನೆ ಮಾಡಿದ್ದು ಕುಮಾರಸ್ವಾಮಿ ಅವರನ್ನು ನಿರಾಳವಾಗಿಸಿದೆ. ಆದಾಗ್ಯೂ ಪ್ರತಿಷ್ಠಿತ ಕಣವಾಗಿ ಮಾರ್ಪಟ್ಟಿರುವ ಮಂಡ್ಯ ಲೋಕಸಭಾ ಕ್ಷೇತ್ರದಲ್ಲಿ ಕುಮಾರಸ್ವಾಮಿಯವರ ಎದುರಾಳಿ ಕಾಂಗ್ರೆಸ್ ಪಕ್ಷದ ಸ್ಟಾರ್ ಚಂದ್ರು ಆಗಿದ್ದಾರೆ. ಚಂದ್ರು ಒಬ್ಬ ಉದ್ಯಮಿಯೂ ಆಗಿದ್ದು ರಾಜಕಾರಣಕ್ಕೆ ಹೊಸಬರು. ಡಿಸಿಎಂ ಡಿ ಕೆ ಶಿವಕುಮಾರ್ ಮತ್ತು ಟೀಮ್ ಹೇಗಾದ್ರೂ ಮಾಡಿ ಕಾಂಗ್ರೆಸ್ ಅಭ್ಯರ್ಥಿ ಗೆಲ್ಲಿಸಲು ರೋಚಕ ತಂತ್ರಗಳನ್ನು ಹೆಣೆಯುತ್ತಿದೆ.