“ಪ್ರಧಾನಿ ನರೇಂದ್ರ ಮೋದಿ ಅವರು ಬಾಯಿ ಮಾತಿನಲ್ಲಿ ರಾಜ್ಯಕ್ಕೆ ಪೂರ್ಣ ಸಹಕಾರ ನೀಡುತ್ತೇವೆ ಎಂದರೆ ಸಾಲದು. ರಾಜ್ಯಕ್ಕೆ ನ್ಯಾಯಯುತವಾಗಿ ಬರಬೇಕಾದ ಅನುದಾನವನ್ನು ಕೂಡಲೇ ಬಿಡುಗಡೆ ಮಾಡಬೇಕು” ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಈಶ್ವರ ಬಿ. ಖಂಡ್ರೆ ಹೇಳಿದ್ದಾರೆ.
ಕೆಪಿಸಿಸಿ ಕಚೇರಿಯಲ್ಲಿಂದು ಆಯೋಜಿಸಿದ್ದ ಮಾಜಿ ಪ್ರಧಾನಿ ಜವಾಹರಲಾಲ್ ನೆಹರೂ ಜನ್ಮದಿನದ ಕಾರ್ಯಕ್ರಮಕ್ಕೂ ಮುನ್ನ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ ಅವರು, ಬೇರೆ ರಾಜ್ಯಗಳಿಗೆ ಇಲ್ಲದ ನಿಬಂಧನೆಗಳನ್ನು ಕರ್ನಾಟಕಕ್ಕೆ ವಿಧಿಸಿ ಹಣ ಬಿಡುಗಡೆ ಮಾಡದೆ ಕೇಂದ್ರ ಘೋರ ಅನ್ಯಾಯ ಮಾಡುತ್ತಿದೆ ಎಂದರು.
ರಾಜ್ಯದ ಗ್ರಾಮ ಪಂಚಾಯತಿಗಳಿಗೆ 15ನೇ ಹಣಕಾಸು ಆಯೋಗದ ಶಿಫಾರಸಿನಂತೆ 2025-26ರ ಸಾಲಿನಲ್ಲಿ ಕೇಂದ್ರ ಸರ್ಕಾರ 2186.20 ಕೋಟಿ ರೂ. ಕೊಡಬೇಕಾಗಿತ್ತು. ಆದರೆ, ಇ-ಗ್ರಾಮ ಸ್ವರಾಜ್ ಪೋರ್ಟಲ್ ನಲ್ಲಿ ಅಪ್ ಲೋಡ್ ಮಾಡಿಲ್ಲ ಎಂಬ ಕ್ಷುಲ್ಲಕ ಕಾರಣ ನೀಡಿ ಹಣ ಬಿಡುಗಡೆ ಮಾಡಿಲ್ಲ. ತೀವ್ರ ಬರಗಾಲ ಇರುವ ಸಂದರ್ಭದಲ್ಲಿ ಕೇಂದ್ರದ ಈ ನಡೆ ಸಮರ್ಥನೀಯವಲ್ಲ ಎಂದರು.
ತಾವೇ ಸ್ವತಃ ಕೇಂದ್ರದ ಸಂಬಂಧಿತ ಸಚಿವರಿಗೆ, ರಾಜ್ಯದಿಂದ ರಾಜ್ಯಸಭೆಗೆ ಆಯ್ಕೆಯಾಗಿರುವ ಹಣಕಾಸು ಸಚಿವರಾದ ನಿರ್ಮಲಾ ಸೀತಾರಾಮನ್ ಅವರಿಗೆ ಮನವಿ ಮಾಡಿದರೂ ಕೇಂದ್ರ ಸರ್ಕಾರ ನ್ಯಾಯಸಮ್ಮತವಾಗಿ ನೀಡಬೇಕಾದ ಹಣ ನೀಡದೆ ರಾಜ್ಯದ ಜನತೆಗೆ ದ್ರೋಹ ಮಾಡಿದೆ ಎಂದರು.
“ಮಾತಿನಲ್ಲಿ ಸಹಕಾರ ಬೇಡ, ಕೂಡಲೇ ಹಣ ಬಿಡುಗಡೆ ಮಾಡಿ ಸಹಕಾರ ತೋರಲಿ” ಎಂದು ಈಶ್ವರ ಖಂಡ್ರೆ ಆಗ್ರಹಿಸಿದ್ದಾರೆ.


