ಪ್ರಧಾನಿ ನರೇಂದ್ರ ಮೋದಿಯವರ 10 ವರ್ಷಗಳ ಸಾಧನೆಯ ಬ್ರಹ್ಮಾಸ್ತ್ರ ನಮ್ಮಲ್ಲಿದೆ. ಆ ಮೂಲಕ ಬಿಜೆಪಿ- ಜೆಡಿಎಸ್ ದಾಖಲೆಯ ಗೆಲುವು ಸಾಧಿಸಲು ಕಾರ್ಯಕರ್ತರು ಶ್ರಮಿಸಬೇಕು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ಕರೆ ನೀಡಿದರು.
ಬೆಂಗಳೂರಿನ ದಿ ಕ್ಯಾಪಿಟಲ್ ಹೋಟೆಲ್‍ನಲ್ಲಿ ಸೋಮವಾರ ಏರ್ಪಡಿಸಿದ್ದ ಬಿಜೆಪಿ ಮಾಧ್ಯಮ ಮತ್ತು ಸಾಮಾಜಿಕ ಜಾಲತಾಣ ವಿಭಾಗದ ರಾಜ್ಯ ಮಟ್ಟದ ಕಾರ್ಯಾಗಾರ ಉದ್ಘಾಟಿಸಿ ಮಾತನಾಡಿದರು.
“ಸಕಾರಾತ್ಮಕ ಅಂಶಗಳನ್ನು ಜನರ ಮುಂದಿಡಿ. ಬಡವರು, ರೈತರು, ಮಹಿಳೆಯರು, ಯುವಜನತೆ ಎಂಬ 4 ವರ್ಗಗಳ ಜನರನ್ನು ನಾವು ತಲುಪಿ ಮೋದಿಯವರ ಸಾಧನೆಗಳನ್ನು ತಲುಪಿಸಬೇಕಿದೆ. ಕರ್ನಾಟಕ ರಾಜ್ಯವು ಬಿಜೆಪಿಗೆ ದಕ್ಷಿಣ ಭಾರತದ ಹೆಬ್ಬಾಗಿಲು ಎಂಬುದನ್ನು ಮುಂದಿನ ಲೋಕಸಭಾ ಚುನಾವಣೆಯಲ್ಲಿ ಮತ್ತೊಮ್ಮೆ ರುಜುವಾತು ಮಾಡಬೇಕಿದೆ” ಎಂದರು.
“ನರೇಂದ್ರ ಮೋದಿಯವರ ಕೈಗಳನ್ನು ಬಲಪಡಿಸುವ ಚುನಾವಣೆ ಇದು. ದೇಶದೆಲ್ಲೆಡೆ ಬಿಜೆಪಿ ಪರ ಅಲೆ ಇದೆ. ನರೇಂದ್ರ ಮೋದಿಯವರು ಮತ್ತೊಮ್ಮೆ ಪ್ರಧಾನಿ ಆಗುವುದನ್ನು ತಡೆಯಲು ಸಾಧ್ಯವಿಲ್ಲ ಎಂದು ಈ ದೇಶದ ವಿರೋಧ ಪಕ್ಷಗಳು ಈಗಾಗಲೇ ತೀರ್ಮಾನ ಮಾಡಿವೆ. ಆದರೂ, ನಾವು ಚುನಾವಣೆಯನ್ನು ಸವಾಲಾಗಿ, ಗಂಭೀರವಾಗಿ ಸ್ವೀಕರಿಸಬೇಕು” ಎಂದು ತಿಳಿಸಿದರು.
“ಎಲ್ಲ 58 ಸಾವಿರ ಬೂತ್‍ಗಳನ್ನು ನೇರವಾಗಿ ತಲುಪಬೇಕಿದೆ. ನರೇಂದ್ರ ಮೋದಿಯವರ ಜನಪ್ರಿಯತೆ, ಜನಪರ ಯೋಜನೆಗಳನ್ನು ಮತವಾಗಿ ಪರಿವರ್ತಿಸುವ ಸವಾಲನ್ನು ಸ್ವೀಕರಿಸಿ. ರಾಜ್ಯದಲ್ಲಿ ಅಧಿಕಾರದಲ್ಲಿರುವ ಕಾಂಗ್ರೆಸ್ ಪಕ್ಷವು ಒಂದು ಸುಳ್ಳನ್ನು ನೂರು ಬಾರಿ ಹೇಳಿ ಅಧಿಕಾರ ಪಡೆದಿದೆ. ಹಿಂದಿನ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಬಗ್ಗೆ ತಪ್ಪು ನರೇಟಿವ್ ಅನ್ನು ಕಾಂಗ್ರೆಸ್ ಪಕ್ಷ ಮುಂದಿಟ್ಟಿತ್ತು” ಎಂದರು.
ಮಾಜಿ ರಾಷ್ಟೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ. ರವಿ, ರಾಷ್ಟ್ರೀಯ ವಕ್ತಾರ ಶೆಹಜಾದ್ ಪೂನಾವಾಲ, ರಾಜ್ಯ ಪ್ರಧಾನ ಕಾರ್ಯದರ್ಶಿ ಪಿ. ರಾಜೀವ್, ಪ್ರೀತಮ್ ಗೌಡ, ರಾಜ್ಯ ಉಪಾಧ್ಯಕ್ಷೆ ಮತ್ತು ಮಾಜಿ ಶಾಸಕಿ ರೂಪಾಲಿ ನಾಯಕ್, ರಾಜ್ಯ ಮುಖ್ಯ ವಕ್ತಾರ ಅಶ್ವತ್ಥನಾರಾಯಣ, ಪ್ರಕೋಷ್ಟಗಳ ರಾಜ್ಯ ಸಂಚಾಲಕ ಎಸ್. ದತ್ತಾತ್ರಿ, ರಾಜ್ಯ ಮಾಧ್ಯಮ ಸಂಚಾಲಕ ಕರುಣಾಕರ ಖಾಸಲೆ ಇದ್ದರು.