ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ (ಮುಡಾ) ನಿವೇಶನ ಹಂಚಿಕೆ ಆರೋಪದಡಿಯಲ್ಲಿನ ಸಿಎಂ ಸಿದ್ದರಾಮಯ್ಯ ಮತ್ತು ಅವರ ಕುಟುಂಬದ ಸದಸ್ಯರ ವಿರುದ್ಧದ ತನಿಖೆಯನ್ನು ಸಿಬಿಐಗೆ ವಹಿಸಬೇಕು ಎಂದು ಕೋರಲಾದ ಅರ್ಜಿಗೆ ಸಂಬಂಧಿಸಿದಂತೆ ಸಿದ್ದರಾಮಯ್ಯ ಹಾಗೂ ಸಿಬಿಐಗೆ ನೋಟಿಸ್ ಜಾರಿಗೊಳಿಸಲು ಹೈಕೋರ್ಟ್ ಆದೇಶಿಸಿದೆ.
ಈ ಸಂಬಂಧ ಮೈಸೂರಿನ ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ದಾಖಲಿಸಿರುವ ರಿಟ್ ಅರ್ಜಿಯನ್ನು ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರಿದ್ದ ಏಕಸದಸ್ಯ ನ್ಯಾಯಪೀಠ ಮಂಗಳವಾರ ವಿಚಾರಣೆ ನಡೆಸಿತು.
ವಿಚಾರಣೆ ವೇಳೆ ಸ್ನೇಹಮಯಿ ಕೃಷ್ಣ ಪರ ಹಾಜರಾಗಿದ್ದ ಹಿರಿಯ ವಕೀಲ ಕೆ.ಜಿ.ರಾಘವನ್, “ಈ ಪ್ರಕರಣದ ಫಲಿತಾಂಶ ಅಂತಿಮವಾಗಿ ಏನೇ ಹೊರಹೊಮ್ಮಿದರೂ ಸರಿಯೇ, ಆದರೆ ಸಾರ್ವಜನಿಕರ ವಿಶ್ವಾಸ ಉಳಿಸಿಕೊಂಡು ತನಿಖೆ ನಡೆಸಬೇಕಾದ ಜರೂರತ್ತಿದೆ. ಆದ್ದರಿಂದ, ಈ ಪ್ರಕರಣದ ತನಿಖೆಯನ್ನು ಸಿಬಿಐ ತೆಕ್ಕೆಗೆ ವರ್ಗಾಯಿಸಲು ಆದೇಶಿಸಬೇಕು” ಎಂದು ಮನವಿ ಮಾಡಿದರು.
ಇದನ್ನು ಮಾನ್ಯ ಮಾಡಿದ ನ್ಯಾಯಪೀಠ ಪ್ರಕರಣದ ಪ್ರತಿವಾದಿಗಳಾದ ಕೇಂದ್ರ ಗೃಹ ಸಚಿವಾಲಯದ ಕಾರ್ಯದರ್ಶಿ, ರಾಜ್ಯ ಗೃಹ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ, ಸಿಬಿಐ ನಿರ್ದೇಶಕ, ಮೈಸೂರು ಜಿಲ್ಲಾ ಲೋಕಾಯುಕ್ತ ಪೊಲೀಸ್ ವರಿಷ್ಠಾಧಿಕಾರಿ, ರಾಜ್ಯ ಡಿಜಿ-ಐಜಿಪಿ, ಲೋಕಾಯುಕ್ತ ಎಡಿಜಿಪಿ, ವಿಜಯನಗರ ಪೊಲೀಸ್ ಠಾಣಾಧಿಕಾರಿ, ಮುಖ್ಯಮಂತ್ರಿ ಸಿದ್ದರಾಮಯ್ಯ, ಬಿ.ಎಂ.ಪಾರ್ವತಿ, ಮಲ್ಲಿಕಾರ್ಜುನ ಸ್ವಾಮಿ ಮತ್ತು ಜೆ.ದೇವರಾಜು ಅವರಿಗೆ ನೋಟಿಸ್ ಜಾರಿಗೊಳಿಸಲು ಆದೇಶಿಸಿತು.
ಹಾಗೆಯೇ “2024 ನವೆಂಬರ್ 25ವರೆಗೆ ಲೋಕಾಯುಕ್ತ ನಡೆಸುವ ತನಿಖಾ ವರದಿಯನ್ನು ನ್ಯಾಯಾಲಯಕ್ಕೆ ಸಲ್ಲಿಸಬೇಕು” ಎಂದು ಲೋಕಾಯುಕ್ತಕ್ಕೆ ತಾಕೀತು ಮಾಡಿ ವಿಚಾರಣೆಯನ್ನು ಇದೇ 26ಕ್ಕೆ ಮುಂದೂಡಿತು.
ಸಿಬಿಐ ಪರ ಪಿ.ಪ್ರಸನ್ನ ಕುಮಾರ್, ರಾಜ್ಯ ಸರ್ಕಾರದ ಪರ, ರಾಜ್ಯದ ಹೆಚ್ಚುವರಿ ಪ್ರಾಸಿಕ್ಯೂಟರ್ ಬಿ.ಎನ್.ಜಗದೀಶ್ ನೋಟಿಸ್ ಪಡೆದರು. ಪ್ರಕರಣದ ಮೊದಲ ಆರೋಪಿ ಸಿದ್ದರಾಮಯ್ಯ ಅವರನ್ನು ಹೊರತುಪಡಿಸಿದಂತೆ ಉಳಿದೆಲ್ಲಾ ಆರೋಪಿಗಳಿಗೆ ತುರ್ತು ನೋಟಿಸ್ ಜಾರಿಗೊಳಿಸಲು ನ್ಯಾಯಪೀಠ ಆದೇಶಿಸಿದೆ.