ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ವಿರುದ್ಧ ತನಿಖೆ ನಡೆಸಲು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ನೀಡಿದ್ದ ಅನುಮತಿಯನ್ನು ಹೈಕೋರ್ಟ್ ಎತ್ತಿಹಿಡಿದಿದೆ. ಈ ಮೂಲಕ ಮುಖ್ಯಮಂತ್ರಿ ಸಿದ್ದರಾಮಯ್ಯ ಅರ್ಜಿ ವಜಾಗೊಂಡಿದೆ.
ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ತಮ್ಮ ವಿರುದ್ಧ ತನಿಖೆಗೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ನೀಡಿದ್ದ ಅನುಮತಿ ಪ್ರಶ್ನಿಸಿ ಸಿಎಂ ಸಿದ್ದರಾಮಯ್ಯ ಹೈಕೋರ್ಟ್ ಕದ ತಟ್ಟಿದ್ದರು. ಸುದೀರ್ಘ ವಾದ ವಿವಾದ ಆಲಿಸಿರುವ ಹೈಕೋರ್ಟ್ ನ್ಯಾಯಾಧೀಶ ಜ. ಎಂ ನಾಗಪ್ರಸನ್ನ ಪೀಠ ಮಂಗಳವಾರ 12 ಗಂಟೆಗೆ ಸಿಎಂ ಸಿದ್ದರಾಮಯ್ಯ ಅವರ ಅರ್ಜಿಯನ್ನು ವಜಾಗೊಳಿಸಿ ತೀರ್ಪು ಪ್ರಕಟಿಸಿದೆ.
ಹೈಕೋರ್ಟ್ ತೀರ್ಪಿನ ಹಿನ್ನೆಲೆಯಲ್ಲಿ ರಾಜ್ಯ ರಾಜಕೀಯ ಪಡಸಾಲೆಯಲ್ಲಿ ಕುತೂಹಲದ ವಾತಾವರಣ ಸೃಷ್ಟಿಯಾಗಿತ್ತು. ಈಗ ಹೈಕೋರ್ಟ್ ತೀರ್ಪು ಸಿದ್ದರಾಮಯ್ಯ ವಿರುದ್ಧವಾಗಿ ಬಂದಿದೆ.
ಸಿದ್ದರಾಮಯ್ಯ ಸಲ್ಲಿಸಿದ್ದ ರಿಟ್ ಅರ್ಜಿಯ ವಿಚಾರಣೆ ನಡೆಸಿದ್ದ ಹೈಕೋರ್ಟ್ ನ್ಯಾಯಪೀಠ ಉಭಯ ಪಕ್ಷಗಳ ದಿಗ್ಗಜ ವಕೀಲರ ವಾದವನ್ನು ಆಲಿಸಿ, ಸೆಪ್ಟಂಬರ್ 12 ರಂದು ತೀರ್ಪನ್ನು ಕಾಯ್ದಿರಿಸಿತ್ತು. ಅರ್ಜಿದಾರ ಸಿದ್ದರಾಮಯ್ಯ ಅವರ ಪರವಾಗಿ ಹಿರಿಯ ವಕೀಲ ಅಭಿಶೇಕ್ ಮನುಸಿಂಘ್ವಿ ಹಾಗೂ ರವಿವರ್ಮ ಕುಮಾರ್ ವಾದ ಮಂಡಿಸಿದ್ದರು. ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಪರವಾಗಿ ಅಡ್ವಕೇಟ್ ಜನರಲ್ ಕೆ. ಶಶಿಕಿರಣ್ ಶೆಟ್ಟಿ ವಾದ ಮಂಡಿಸಿದ್ದರು.
ಅದೇ ರೀತಿಯಲ್ಲಿ ರಾಜ್ಯಪಾಲರ ವಿಶೇಷ ಕಾರ್ಯದರ್ಶಿಗಳ ಪರವಾಗಿ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ, ಟಿಜೆ ಅಬ್ರಹಾಂ ಪರವಾಗಿ ರಂಗನಾಥ್ ರೆಡ್ಡಿ, ಸ್ನೇಹಮಯಿ ಕೃಷ್ಣ ಪರವಾಗಿ ಮಣಿಂದರ್ ಸಿಂಗ್, ಕೆಜಿ ರಾಘವನ್, ಲಕ್ಷ್ಮಿ ಅಯ್ಯಂಗಾರ್, ಎಸ್ ಪಿ ಪ್ರದೀಪ್ ಹಾಗೂ ಹಿರಿಯ ವಕೀಲ ಪ್ರಭುಲಿಂಗ ನಾವದಗಿ ವಾದ ಮಂಡಿಸಿದ್ದರು.
ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಹೈಕೋರ್ಟ್ ತೀರ್ಪು ಸಿದ್ದರಾಮಯ್ಯ ಅವರ ವಿರುದ್ಧವಾಗಿ ಬಂದಿರುವುದರಿಂದ ರಾಜ್ಯ ರಾಜಕೀಯದಲ್ಲಿ ಸಾಕಷ್ಟು ಬೆಳವಣಿಗೆಗಳು ನಡೆಯುವ ಸಾಧ್ಯತೆ ಇದೆ. ಹೈಕೋರ್ಟ್ ತೀರ್ಪನ್ನು ಮುಂದಿಟ್ಟುಕೊಂಡು ಸಿಎಂ ಸಿದ್ದರಾಮಯ್ಯ ವಿರುದ್ಧ ಬಿಜೆಪಿ ಮತ್ತು ಜೆಡಿಎಸ್ ಮತ್ತೊಂದು ಸುತ್ತಿನ ಹೋರಾಟ ಹಮ್ಮಿಕೊಳ್ಳಬಹುದು.
ಸಿಎಂ ಸಿದ್ದರಾಮಯ್ಯ ಅವರು ಹೈಕೋರ್ಟ್ ತೀರ್ಪಿನ ಹಿನ್ನೆಲೆಯಲ್ಲಿ ರಾಜೀನಾಮೆ ನೀಡಬೇಕು ಎಂದು ವಿರೋಧ ಪಕ್ಷಗಳು ಒತ್ತಾಯಿಸಬಹುದು. ಅಲ್ಲದೆ, ಸಿದ್ದರಾಮಯ್ಯ ವಿರುದ್ಧ ಎಫ್‌ಐಆರ್ ಆದಲ್ಲಿ ಇದು ಸಿದ್ದರಾಮಯ್ಯಗೂ ನೈತಿಕವಾಗಿ ಸಿಎಂ ಕುರ್ಚಿಯ ಮೇಲೆ ಕುಳಿತುಕೊಳ್ಳಲು ಸಮಸ್ಯೆ ಸೃಷ್ಟಿಸಲಿದೆ.
ಇನ್ನು ಹೈಕೋರ್ಟ್ ತೀರ್ಪನ್ನು ಪ್ರಶ್ನಿಸಿ ಸಿದ್ದರಾಮಯ್ಯ ಅವರು ಸುಪ್ರೀಂ ಕೋರ್ಟ್ ಕದತಟ್ಟುವ ಬಗ್ಗೆ ಈಗಾಗಲೇ ಸಿಎಂ ಅವರೇ ಸುಳಿವು ನೀಡಿದ್ದಾರೆ. ಈ ಬಗ್ಗೆ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ.