ಮೈಸೂರು ಮೂಲದ ಸ್ನೇಹಮಯಿ ಕೃಷ್ಣ ಎಂಬುವರು ಸಿಎಂ ವಿರುದ್ಧ ರಾಜ್ಯಪಾಲ ಥಾವರ್ ಚಂದ್ ಗೆಹಲೋಟ್ ಅವರಿಗೆ ದೂರು ನೀಡಿದ್ದು, ಅಕ್ರಮ ಡಿನೋಟಿಫೈ ಪ್ರಕ್ರಿಯೆಯಲ್ಲಿ ಸಿದ್ದರಾಮಯ್ಯ ಭಾಗಿಯಾಗಿದ್ದಾರೆ ಎಂದು ಆರೋಪಿಸಿದ್ದಾರೆ.
ಮುಡಾ ಹಗರಣಕ್ಕೆ ಸಂಬಂಧಿಸಿ ಸಿಎಂ ಸಿದ್ದರಾಮಯ್ಯ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ರಾಜ್ಯಪಾಲರಿಗೆ ಸಲ್ಲಿಸಿರುವ ಎರಡನೇ ದೂರು ಇದಾಗಿದೆ.
ಇದಕ್ಕೂ ಮೊದಲು ವಕೀಲ ಟಿ ಜೆ ಅಬ್ರಹಾಂ ಅವರು ಸಿಎಂ ವಿರುದ್ಧ ದೂರು ಸಲ್ಲಿಸಿ, ಈ ಪ್ರಕರಣವನ್ನು ಪ್ರಾಸಿಕ್ಯೂಶನ್‌ಗೆ ನೀಡಲು ಅವಕಾಶ ಕೊಡಬೇಕು ಎಂದು ಕೋರಿದ್ದರು. ಈ ದೂರು ಆದರಿಸಿ ರಾಜ್ಯಪಾಲ ಥಾವರ್ ಚಂದ್ ಗೆಲ್ಹೋಟ್ ಸಿಎಂಗೆ ಶೋಕಾಸ್ ನೋಟಿಸ್ ನೀಡಿದ್ದರು.
ಸ್ನೇಹಮಯಿ ಕೃಷ್ಣ ದೂರು ಏನು?
ಮುಡಾದಲ್ಲಿ ಸಿಎಂ ಸಿದ್ದರಾಮಯ್ಯ ಅವರು ತಮ್ಮ ಪ್ರಭಾವ ಬೀರಿ ಅಕ್ರಮವಾಗಿ ಜಮೀನು ಡಿನೋಟಿಫೈ ಮಾಡಿದ್ದಾರೆ. ಹೀಗಾಗಿ ಸಿಎಂ ಸಿದ್ದರಾಮಯ್ಯ ವಿರುದ್ಧ ಪ್ರಕರಣ ದಾಖಲಿಸಬೇಕು ಎಂದು ಸ್ನೇಹಮಯಿ ಕೃಷ್ಣ ದೂರು ನೀಡಿದ್ದಾರೆ.
1979ರಲ್ಲಿ ಮೈಸೂರು ತಾಲೂಕು ವರುಣದ ಉತ್ತನಹಳ್ಳಿಯಲ್ಲಿ ಆಶ್ರಯ ಮನೆಗಳಿಗಾಗಿ ಭೂಸ್ವಾಧೀನ ಮಾಡಿದ್ದ ಜಮೀನಿಗೆ 30 ವರ್ಷದ ಬಳಿಕ ಡಿನೋಟಿಫೈ ಮಾಡುವಂತೆ ಸಿದ್ದರಾಮಯ್ಯ ಪತ್ರ ಬರೆದಿದ್ದರು. ಮರಪ್ಪ ಎಂಬುವವರ ಹೆಸರಿಗೆ 1.39 ಎಕರೆ ಜಮೀನು ಡಿನೋಟಿಫೈ ಮಾಡುವಂತೆ ಸಿದ್ದರಾಮಯ್ಯ ಶಿಫಾರಸು ಮಾಡಿದ್ದರು. ಮರಪ್ಪ ಎಂಬುವವರಿಗೆ ಸಂಬಂಧವೇ ಇರದಿದ್ದರೂ ನಕಲಿ ದಾಖಲೆ ಆಧರಿಸಿ ಮರಪ್ಪ ಹೆಸರಿಗೆ ಡಿನೋಟಿಫೈ ಮಾಡಲಾಗಿದೆ ಎಂದು ದೂರುದಾರ ಆರೋಪಿಸಿದ್ದಾರೆ.
ಸಿದ್ದರಾಮಯ್ಯ ಪತ್ರ ಆಧರಿಸಿ ಜಿಲ್ಲಾಡಳಿತ 14 ತಿಂಗಳ ಬಳಿಕ ನಕಲಿ ದಾಖಲೆಗಳನ್ನು ಸೃಷ್ಟಿಸಿ, ಮಾರಪ್ಪ ಎಂಬುವರ ಹೆಸರಿಗೆ 1.39 ಎಕರೆ ಜಮೀನನ್ನು ಡಿನೋಟಿಫೈ ಮಾಡಿದ್ದಾರೆ. ಮೂಲ ಜಮೀನಿನ ಮಾಲೀಕರು ಮಾರಪ್ಪ ಅಲ್ಲ, ಆದರೂ ಅವರ ಹೆಸರಿಗೆ ಡಿನೋಟಿಫೈ ಮಾಡಲಾಗಿದೆ. ಈ ವಿಚಾರ ತಿಳಿದ ಫಲಾನುಭವಿಗಳು 2011ರಲ್ಲಿ ಅಂದಿನ ಜಿಲ್ಲದಾಧಿಕಾರಿಗಳಿಗೆ ಪತ್ರ ಬರೆದು, ನಮ್ಮ ಜಮೀನು ನಮಗೆ ನೀಡುವಂತೆ ಮನವಿ ಮಾಡುತ್ತಾರೆ ಎಂದು ಸ್ನೇಹಮಯಿ ಕೃಷ್ಣ ದೂರಿನಲ್ಲಿ ಉಲ್ಲೇಖಿಸಿದ್ದಾರೆ.