ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ) ಹಗರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಿಸಲು ಅನುಮತಿ ಕೋರಿ ವಕೀಲ ಟಿ ಜೆ ಅಬ್ರಹಾಂ ರಾಜ್ಯಪಾಲರಿಗೆ ಮನವಿ ಮಾಡಿದ್ದರು. ಈ ಮನವಿ ಮೇರೆಗೆ ರಾಜ್ಯಪಾಲರು ಸಿಎಂಗೆ ನೋಟಿಸ್ ನೀಡಿದ್ದಾರೆ.
ಹಗರಣಕ್ಕೆ ಸಂಬಂಧಸಿದಂತೆ ಸಿಎಂ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಿಸಲು ಕೋರಿ ಸಲ್ಲಿಸಿರುವ ಅರ್ಜಿಯಲ್ಲಿ ಉಲ್ಲೇಖವಾಗಿರುವ ಅಂಶಗಳ ಕುರಿತು ವಿವರಣೆ ನೀಡುವಂತೆ ರಾಜ್ಯಪಾಲ ಥಾವರ್ ಚಂದ್ ಗೆಹಲೋಟ್ ಅವರು ಸಿದ್ದರಾಮಯ್ಯಗೆ ನೀಡಿರುವ ನೋಟಿಸ್ನಲ್ಲಿ ತಿಳಿಸಿದ್ದಾರೆ.
ರಾಜ್ಯಪಾಲರ ಈ ನಡೆ ರಾಜಕೀಯವಾಗಿಯೂ ಸಾಕಷ್ಟು ಚರ್ಚೆಗೆ ಒಳಗಾಗುತ್ತಿದೆ. ರಾಜ್ಯಪಾಲರ ನಡೆ ಕುರಿತು ಇಂದಿನ ಸಚಿವ ಸಂಪುಟ ಸಭೆಯಲ್ಲಿ ಮಹತ್ವದ ಚರ್ಚೆ ನಡೆಯಲಿದೆ.
ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ಅವರಿಗೆ ರಾಜ್ಯಪಾಲರ ನೋಟಿಸ್ ಬೆನ್ನಲ್ಲೇ ಮುಖ್ಯಮಂತ್ರಿ ಸಿದ್ದರಾಮಯ್ಯ ನಿವಾಸದಲ್ಲಿ ಗುರುವಾರ ಬೆಳಿಗ್ಗೆ ಸಚಿವರಿಗೆ ಬ್ರೇಕ್ ಫಾಸ್ಟ್ ಮೀಟಿಂಗ್ ನಡೆಸಿ ಈ ಬಗ್ಗೆ ಚರ್ಚಿಸಲಾಗಿದೆ.
ಬ್ರೇಕ್ ಫಾಸ್ಟ್ ಮೀಟಿಂಗ್‌ನಲ್ಲಿ ಉಪ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್, ಗೃಹ ಸಚಿವ ಡಾ ಜಿ ಪರಮೇಶ್ವರ್, ಕೆಜೆ ಜಾರ್ಜ್, ಎಚ್ ಕೆ ಪಾಟೀಲ್, ಮಧು ಬಂಗಾರಪ್ಪ, ಡಾ ಎಚ್ ಸಿ ಮಹದೇವಪ್ಪ, ಚಲುವರಾಯಸ್ಬಾಮಿ, ರಾಮಲಿಂಗಾ ರೆಡ್ಡಿ, ಲಕ್ಷ್ಮಿ ಹೆಬ್ಬಾಳ್ಕರ್, ಜಮೀರ್ ಅಹ್ಮದ್ ಖಾನ್, ಸಂತೋಷ್ ಲಾಡ್ ಸೇರಿದಂತೆ ಇತರ ಸಚಿವರು ಉಪಸ್ಥಿತರಿದ್ದರು.
ಮುಡಾ ಬದಲಿ ನಿವೇಶನ ಹಂಚಿಕೆಗೆ ಸಂಬಂಧಿಸಿದಂತೆ ಮುಖ್ಯಮಂತ್ರಿಯ ಪ್ರಾಸಿಕ್ಯೂಷನ್‌ಗೆ ರಾಜ್ಯಪಾಲ ಥಾವರಚಂದ್ ಗೆಹಲೋತ್ ಅವರು ಅನುಮತಿ ನೀಡಿದರೆ, ರಾಜಕೀಯ ಮತ್ತು ಕಾನೂನು ಹೋರಾಟ ನಡೆಸುವ ಕುರಿತು ಸಿದ್ದರಾಮಯ್ಯ ಅವರು ಸಚಿವ ಜೊತೆ ಚರ್ಚಿಸಿದ್ದಾರೆ ಎಂದು ತಿಳಿದುಬಂದಿದೆ.
ರಾಜಕೀಯ ಪ್ರೇರಿತ ನೋಟಿಸ್‌ಗೆ ರಾಜಕೀಯ ಮತ್ತು ಕಾನೂನು ಸಂಘರ್ಷದ ಮೂಲಕವೇ ಉತ್ತರ ಕೊಡಬೇಕು ಎಂದು ಸಚಿವರು ಸಲಹೆ ನೀಡಿದ್ದಾರೆ. ಕಾನೂನು ಸಂಘರ್ಷ ಬಿಟ್ಟು ಬೇರೆ ದಾರಿ ಬೇಡ ಎಂದೂ ಹಿರಿಯ ಸಚಿವರು ಸಿದ್ದರಾಮಯ್ಯಗೆ ಮನವರಿಕೆ ಮಾಡಿದ್ದಾರೆ ಎಂದು ಮೂಲಗಳು ಹೇಳಿವೆ.
ಮುಡಾ ವಿಚಾರವಾಗಿ ರಾಜ್ಯಪಾಲರು ಉದ್ದೇಶಪೂರ್ವಕವಾಗಿ ನೋಟಿಸ್ ನೀಡಿದ್ದಾರೆ. ರಾಜಭವನವನ್ನು ದುರ್ಬಳಕೆ ಮಾಡಿಕೊಳ್ಳಲಾಗುತ್ತಿದೆ. ಮುಡಾ ಪ್ರಕರಣಕ್ಕೆ ಸಂಬಂಧಿಸಿದ ಎಲ್ಲ ದಾಖಲೆಗಳನ್ನೂ ಈಗಾಗಲೇ ರಾಜ್ಯಪಾಲರಿಗೆ ನೀಡಲಾಗಿದೆ. ಆದರೂ ದುರುದ್ದೇಶಪೂರ್ವಕವಾಗಿ ಅವರು ನೋಟಿಸ್ ನೀಡಲಾಗಿದೆ ಎಂಬ ಅಭಿಪ್ರಾಯವೂ ಸಬೆಯಲ್ಲಿ ವ್ಯಕ್ತವಾಗಿದೆ.
ಎಲ್ಲರ ಮಾತು ಆಲಿಸಿದ ಸಿದ್ದರಾಮಯ್ಯ ಅವರು ಒಂದು ವೇಳೆ ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿದರೆ ಕಾನೂನು ಹೋರಾಟ ನಡೆಸುವುದೇ ಸೂಕ್ತ ಎಂಬ ನಿರ್ಧಾರಕ್ಕೆ ಬಂದಿದ್ದಾರೆ. ಮುಖ್ಯಮಂತ್ರಿಯ ಮಾತಿಗೆ ಸಚಿವರು ಸಹಮತ ಸೂಚಿಸಿದ್ದಾರೆ ಎಂದು ತಿಳಿದು ಬಂದಿದೆ.
ಹೈಕಮಾಂಡ್ ಭೇಟಿ ಮಾಡಿದ ವೇಳೆ ಸಿಎಂ ಸಿದ್ದರಾಮಯ್ಯ ಅವರು ಮುಡಾ ಹಗರಣದಲ್ಲಿ ತಮ್ಮ ಪಾತ್ರವಿಲ್ಲ ಎಂಬುದನ್ನು ಸ್ಪಷ್ಟವಾಗಿ ಹೇಳಿದ್ದಾರೆ ಎನ್ನಲಾಗಿದೆ. ಸಿದ್ದರಾಮಯ್ಯನವರ ಮಾತಿಗೆ ಆಕ್ಷೇಪ ಎತ್ತದ ಹೈಕಮಾಂಡ್ ಕಾನೂನು ಹೋರಾಟ ಮಾಡಿ ಎಂದು ಬೆಂಬಲ ಸೂಚಿಸಿದ್ದಾರೆ ಎಂದು ಕಾಂಗ್ರೆಸ್ ಮೂಲಗಳು ತಿಳಿಸಿವೆ.