Homeಕರ್ನಾಟಕವಾಲ್ಮೀಕಿ ಸಮುದಾಯ ಸೇರಿ ಪರಿಶಿಷ್ಟ ಪಂಗಡದ ಕಟ್ಟ ಕಡೆಯ ವ್ಯಕ್ತಿಗೂ ಸೌಲಭ್ಯ ತಲುಪಿಸುವುದೇ ನನ್ನ ಗುರಿ:...

ವಾಲ್ಮೀಕಿ ಸಮುದಾಯ ಸೇರಿ ಪರಿಶಿಷ್ಟ ಪಂಗಡದ ಕಟ್ಟ ಕಡೆಯ ವ್ಯಕ್ತಿಗೂ ಸೌಲಭ್ಯ ತಲುಪಿಸುವುದೇ ನನ್ನ ಗುರಿ: ಟಿ. ರಘುಮೂರ್ತಿ

ವಾಲ್ಮೀಕಿ/ನಾಯಕ ಸಮುದಾಯ ಒಳಗೊಂಡಂತೆ ಪರಿಶಿಷ್ಟ ಪಂಗಡದ ಕಟ್ಟ ಕಡೆಯ ವ್ಯಕ್ತಿಗೂ ಸೌಲಭ್ಯ ದೊರೆಯುವಂತೆ ನೋಡಿಕೊಳ್ಳಲಾಗುವುದು. ಈ ನಿಟ್ಟಿನಲ್ಲಿ ಪ್ರಾಮಾಣಿಕವಾಗಿ ಪ್ರಯತ್ನ ಮಾಡಲಾಗುವುದು. ಎಲ್ಲ ಭರವಸೆಗಳನ್ನು ಈಡೇರಿಸಲಾಗುವುದು ಎಂದು ಪರಿಶಿಷ್ಟ ಪಂಗಡಗಳ ಕಲ್ಯಾಣ ಹಾಗೂ ಚಿತ್ರದುರ್ಗ ಜಿಲ್ಲಾ ಉಸ್ತುವಾರಿ ಸಚಿವರಾದ ಟಿ. ರಘುಮೂರ್ತಿ ತಿಳಿಸಿದ್ದಾರೆ.

ಬೆಂಗಳೂರಿನ ಕಬ್ಬನ್ ಪಾರ್ಕ್‌ನಲ್ಲಿರುವ ರಾಜ್ಯ ಸರ್ಕಾರಿ ನೌಕರರ ಸಂಘದ ಭವನದಲ್ಲಿ ಗುರುವಾರ ನಡೆದ ವಾಲ್ಮೀಕಿ/ನಾಯಕ ಸಮುದಾಯದ ಕುಂದುಕೊರತೆಗಳ ಸಭೆಯಲ್ಲಿ ಸಚಿವರು ಈ ಭರವಸೆ ನೀಡಿದರು.

ಸಭೆಯಲ್ಲಿ ಭಾಗವಹಿಸಿದ್ದ ನೂರಾರು ಬಾಂಧವರು, ಸರ್ಕಾರವು ಸಮುದಾಯಕ್ಕಾಗಿ ಕಾಯ್ದಿರಿಸಲಾದ ವಿವಿಧ ಯೋಜನೆಗಳು, ಕಾರ್ಯಕ್ರಮಗಳು ಹಾಗೂ ಸೌಲಭ್ಯಗಳನ್ನು ತ್ವರಿತವಾಗಿ ತಲುಪಿಸಲು ಕ್ರಮ ಕೈಗೊಳ್ಳಬೇಕು ಎಂದು ಮವನಿ ಮಾಡಿದರು ಮತ್ತು ಈ ಕುರಿತು ತಮ್ಮ ಅಭಿಪ್ರಾಯಗಳನ್ನು ಮಂಡಿಸಿದರು.

ಇದನ್ನು ಆಲಿಸಿದ ನಂತರ ಉತ್ತರ ನೀಡಿದ ಸಚಿವ ರಘುಮೂರ್ತಿ, ಪರಿಶಿಷ್ಟ ಪಂಗಡದ ವ್ಯಾಪ್ತಿಗೆ ಬರುವ ವಾಲ್ಮೀಕಿ/ನಾಯಕ ಸಮುದಾಯದ ಕೊನೆಯ ವ್ಯಕ್ತಿಗೂ ಸರ್ಕಾರದ ಎಲ್ಲಾ ಯೋಜನೆಗಳು, ಕಾರ್ಯಕ್ರಮಗಳು ಮತ್ತು ಕಲ್ಯಾಣ ಕಾರ್ಯಕ್ರಮಗಳನ್ನು ತಲುಪಿಸಲು ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ. ಸರ್ಕಾರ ಕೂಡ ಈ ವಿಷಯದಲ್ಲಿ ಬದ್ಧತೆ ತೋರುತ್ತದೆ ಎಂದು ಭರವಸೆ ನೀಡಿದರು.

ಸಮುದಾಯದ ಅಭಿವೃದ್ಧಿಗಾಗಿ ಪ್ರತ್ಯೇಕ ಆಯೋಗ ರಚಿಸುವ ಕುರಿತು ಒತ್ತಾಯಗಳು ಕೇಳಿಬಂದಿವೆ. ಈ ನಿಟ್ಟಿನಲ್ಲಿ ಸೂಕ್ತ ವೇದಿಕೆಯಲ್ಲಿ ಚರ್ಚೆ ಮಾಡಿ, ಸೂಕ್ತ ನಿರ್ಧಾರ ಕೈಗೊಳ್ಳಲಾಗುವುದು. ಇದಕ್ಕಾಗಿ ಎಲ್ಲ ರೀತಿಯ ಪ್ರತ್ನ ಮಾಡುತ್ತೇನೆ ಎಂದರು.

ಸಮುದಾಯದ ಸಂಘಟನೆಗೆ ಹೆಚ್ಚಿನ ಆದ್ಯತೆ ನೀಡಬೇಕಾಗಿದೆ. ನಾವೆಲ್ಲರೂ ಒಟ್ಟಾಗಿ ನಿಂತರೆ ನಮ್ಮ ಅಭಿವೃದ್ಧಿ, ಏಳಿಗೆ ಸಾಧ್ಯವಾಗಲಿದೆ. ಈ ನಿಟ್ಟಿನಲ್ಲಿ ಸಂಘಟನೆಯನ್ನು ಬಲಿಷ್ಠಗೊಳಿಸೋಣ ಎಂದು ಸಚಿವರು ತಿಳಿಸಿದರು.

ಮುಖ್ಯಮಂತ್ರಿಗಳ ಜೊತೆ ಸಮಾಲೋಚನೆ ನಡೆಸಿ ಪರಿಶಿಷ್ಟ ಪಂಗಡ ಸಮುದಾಯದ ಯೋಜನೆಗಳು, ಕಾರ್ಯಕ್ರಮಗಳಿಗೆ ಹೆಚ್ಚಿನ ಅನುದಾನ ಒದಗಿಸುವ ಕುರಿತು ಮನವಿ ಸಲ್ಲಿಸುತ್ತೇನೆ. ಯಾವುದೇ ಕಾರಣಕ್ಕೂ ಸಮಸ್ಯೆ ಎದುರಾಗದಂತೆ ನೋಡಿಕೊಳ್ಳುವುದು ನಮ್ಮ ಸರ್ಕಾರದ ಮುಖ್ಯ ಗುರಿಯಾಗಿದೆ ಎಂದು ಸಚಿವ ಟಿ. ರಘುಮೂರ್ತಿ ಸ್ಪಷ್ಟಪಡಿಸಿದರು.

ಶ್ರೀ ಮಹರ್ಷಿ ವಾಲ್ಮೀಕಿ ಗುರುಪೀಠದ ಜಗದ್ಗುರು ಶ್ರೀ ಪ್ರಸನ್ನಾನಂದ ಪುರಿ ಸ್ವಾಮೀಜಿ, ಲೋಕೋಪಯೋಗಿ ಸಚಿವ ಸತೀಶ್‌ ಜಾರಕಿಹೊಳಿ, ಜಗಳೂರು ಶಾಸಕ ದೇವೇಂದ್ರಪ್ಪ, ಕರ್ನಾಟಕ ದ್ರಾಕ್ಷಾರಸ ಮಂಡಳಿಯ ಅಧ್ಯಕ್ಷ ಯೋಗೇಶ್ ಬಾಬು, ಪರಿಶಿಷ್ಟ ಪಂಗಡಗಳ ಕಲ್ಯಾಣ ಇಲಾಖೆಯ ಕಾರ್ಯದರ್ಶಿ ಎಂ. ಕನಗವಲ್ಲಿ, ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ವ್ಯವಸ್ಥಾಪಕ ನಿರ್ದೇಶಕ ಅಶೋಕ್ ದುಡಗಂಟಿ ಕಲ್ಯಾಣ ಇಲಾಖೆಯ ನಿರ್ದೇಶಕ ಅಶೋಕ್ ಡಿ.ಆರ್. ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದರು.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments