ಹಾಸನ ಸಂಸದ ಪ್ರಜ್ವಲ್ ರೇವಣ್ಣ ಪೆನ್‌ಡ್ರೈವ್ ಪ್ರಕರಣ ವಿಚಾರವಾಗಿ ಮೌನ ಮುರಿದಿರುವ ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡ ಅವರು ಪ್ರಜ್ವಲ್ ರೇವಣ್ಣನನ್ನು ಉದ್ದೇಶಿಸಿ ‘ಎಚ್ಚರಿಕೆ ಪತ್ರ’ ಬರೆದಿದ್ದಾರೆ.
ತಮ್ಮ ಸುದೀರ್ಘ ಪತ್ರವನ್ನು ಎಕ್ಸ್ ತಾಣದಲ್ಲಿ ಪೋಸ್ಟ್ ಮಾಡಿರುವ ಮಾಜಿ ಪ್ರಧಾನಿ, “ಪ್ರಜ್ವಲ್ ರೇವಣ್ಣನಿಗೆ ನನ್ನ ಎಚ್ಚರಿಕೆ.. ನನ್ನ ಬಗ್ಗೆ ಪ್ರಜ್ವಲ್ ರೇವಣ್ಣನಿಗೆ ಏನಾದರೂ ಗೌರವವಿದ್ದರೆ ಎಲ್ಲಿದ್ದರೂ ಕೂಡ ಹಿಂದಿರುಗಬೇಕು. ಕಾನೂನನ್ನು ಎದುರಿಸಬೇಕು” ಎಂದು ಸೂಚಿಸಿದ್ದಾರೆ.
“ಪ್ರಜ್ವಲ್‌ನಿಂದ ನನಗೆ. ನನ್ನ ಕುಟುಂಬಕ್ಕೆ, ನನ್ನ ಸಹೋದ್ಯೋಗಿಗಳಿಗೆ, ಸ್ನೇಹಿತರಿಗೆ ಮತ್ತು ನನ್ನ ಪಕ್ಷದ ಕಾರ್ಯಕರ್ತರಿಗೆ ತಂದೊಡ್ಡಿರುವ ಆಘಾತ ಮತ್ತು ನೋವಿನಿಂದ ಹೊರಬಂದು ಮಾತನಾಡಲು ಕೊಂಚ ಸಮಯ ಹಿಡಿಯಿತು. ನಾನು ಈಗಾಗಲೇ ಸ್ಪಷ್ಟಪಡಿಸಿರುವ ಹಾಗೆ ಕಾನೂನಿನ ಪ್ರಕಾರ ಅವನು ತಪ್ಪಿತಸ್ಥನೆಂದಾದರೆ, ಅವನಿಗೆ ಅತ್ಯಂತ ಕಠಿಣ ಶಿಕ್ಷೆ ವಿಧಿಸಬೇಕು” ಎಂದು ಹೇಳಿದ್ದಾರೆ.
“ಈ ಪ್ರಕರಣದ ಎಲ್ಲಾ ಸತ್ಯಾಂಶಗಳು ಹೊರಬರುವವರೆಗೂ ಅವರು ತಾಳ್ಮೆಯಿಂದ ಕಾಯಬೇಕಿತ್ತು ಎಂದು ಅವರೊಂದಿಗೆ ವಾದಕ್ಕೆ ಇಳಿಯುವುದಿಲ್ಲ. ಪ್ರಜ್ವಲ್‌ನ ಚಟುವಟಿಕೆಗಳ ಬಗ್ಗೆ ನನಗೆ ಯಾವುದೇ ಮಾಹಿತಿ ಇರಲಿಲ್ಲ ಎಂದು ನಾನು ಅವರಿಗೆ ಮನವರಿಕೆ ಮಾಡಿಕೊಡಲು ಸಾಧ್ಯವಿಲ್ಲ. ಅವನನ್ನು ರಕ್ಷಿಸುವ ಯಾವುದೇ ಇರಾದೆಯೂ ನನಗಿಲ್ಲ” ಎಂದು ಹೇಳಿದ್ದಾರೆ.
“ಪ್ರಜ್ವಲ್‌ನ ಈಗಿನ ಚಲನವಲನ ಮತ್ತು ಅವನ ವಿದೇಶಿ ಯಾತ್ರೆಯ ಬಗ್ಗೆ ನನಗೆ ಏನೂ ತಿಳಿದಿಲ್ಲ, ತಿಳಿದಿರಲಿಲ್ಲ ಎಂದು ನಾನು ಜನರಿಗೆ ಅರ್ಥ ಮಾಡಿಸಲು ಸಾಧ್ಯವಿಲ್ಲ. ನಾನು ನನ್ನ ಆತ್ಮಸಾಕ್ಷಿಗೆ ಮಾತ್ರ ಉತ್ತರಿಸಬಲ್ಲೆ. ನನಗೆ ದೇವರಲ್ಲಿ ನಂಬಿಕೆ ಇದೆ ಮತ್ತು ಆ ದೇವರಿಗೆ ಎಲ್ಲಾ ಸತ್ಯ ತಿಳಿದಿದೆ ಎಂದು ನಾನು ನಂಬಿದ್ದೇನೆ” ಎಂದು ಹೇಳಿದ್ದಾರೆ.
“ನಾನಾಗಲಿ, ನನ್ನ ಕುಟುಂಬದವರಾಗಲಿ ಈ ವಿಚಾರಣೆಯಲ್ಲಿ ಹಸ್ತಕ್ಷೇಪ ಮಾಡುವುದಿಲ್ಲ ಎಂದು ಭರವಸೆ ಕೊಡುತ್ತೇನೆ. ಇದರಲ್ಲಿ ಯಾವುದೇ ಭಾವನೆಗೆ ಸಿಲುಕದೆ. ಅವನು ಎಸಗಿದ್ದಾನೆ ಎನ್ನಲಾದ ಕೃತ್ಯಗಳು ಮತ್ತು ತಪ್ಪುಗಳಿಂದ ನೊಂದಿರುವ, ಅನ್ಯಾಯಕ್ಕೆ ಒಳಗಾಗಿರುವ ಎಲ್ಲರಿಗೂ ನ್ಯಾಯ ಸಿಗುವುದಷ್ಟೆ ನನಗೆ ಮುಖ್ಯ. ಜನರ ವಿಶ್ವಾಸವನ್ನು ಮರಳಿ ಪಡೆಯುವುದಷ್ಟೆ ನನ್ನ ಗುರಿ” ಎಂದು ತಿಳಿಸಿದ್ದಾರೆ.
“ಜನರು ಆರು ದಶಕಗಳ ಕಾಲದ ನನ್ನ ರಾಜಕೀಯ ಜೀವನದುದ್ದಕ್ಕೂ ನನ್ನ ಜೊತೆಗೆ ನಿಂತಿದ್ದಾರೆ. ಅವರಿಗೆ ನಾನು ಸದಾ ಋಣಿ ಮತ್ತು ನಾನು ಬದುಕಿರುವವರೆಗೂ ಅವರ ಹಿತದ ವಿರುದ್ಧ ನಡೆದುಕೊಳ್ಳುವುದಿಲ್ಲ” ದೇವೇಗೌಡರು ಹೇಳಿದ್ದಾರೆ.