ಕಲುಷಿತ ನೀರು ಸೇವಿಸಿ ಅಸ್ವಸ್ಥಗೊಂಡಿದ್ದ ಮೈಸೂರು ಜಿಲ್ಲೆಯ ಕೆ.ಸಾಲುಂಡಿ ಗ್ರಾಮದ ನಿವಾಸಿ ಕನಕರಾಜು (22) ಮಂಗಳವಾರ ಸಾವನ್ನಪ್ಪಿದ್ದಾರೆ.
ತೀವ್ರ ವಾಂತಿ, ಭೇದಿಯಿಂದಾಗಿ ಅವರು ಸೋಮವಾರ ಬೆಳಿಗ್ಗೆ ಖಾಸಗಿ ಆಸ್ಪತ್ರೆಗೆ ತೆರಳಿದ್ದು, ಔಷಧಿ ಪಡೆದು ಮರಳಿದ್ದರು. ಸಂಜೆಯ ವೇಳೆಗೆ ಮತ್ತಷ್ಟು ಸಮಸ್ಯೆಯಾದಾಗ ಮತ್ತೆ ಆಸ್ಪತ್ರೆಗೆ ದಾಖಲಾಗಿದ್ದರು. ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ.
ಜಿಲ್ಲಾ ಆರೋಗ್ಯಾಧಿಕಾರಿ ಡಾ.ಕುಮಾರಸ್ವಾಮಿ ಮಾಧ್ಯಮಗಳಿಗೆ ಮಾಹಿತಿ ನೀಡಿದ್ದು, “ಅತಿಯಾದ ಭೇದಿಯಿಂದಾಗಿ ಆಸ್ಪತ್ರ ಸೇರಿದ್ದ 47 ಜನ ಚೇತರಿಸಿಕೊಂಡಿದ್ದಾರೆ. ನೇರವಾಗಿ ಖಾಸಗಿ ಆಸ್ಪತ್ರೆ ಸೇರಿದವರೊಬ್ಬರು ಮೃತಪಟ್ಟಿದ್ದಾರೆ. ಕುಡಿಯುವ ನೀರಿನಲ್ಲಿ ಮಲಿನ ಸೇರಿದ ಕಾರಣ ಘಟನೆ ನಡೆದಿದೆ” ಎಂದು ಹೇಳಿದ್ದಾರೆ.
ಸಿಎಂ ಸಿದ್ದರಾಮಯ್ಯ ಕರೆ
ಮೈಸೂರಿನ ಕೆ. ಸಾಲುಂಡಿ ಗ್ರಾಮದಲ್ಲಿ ಕಲುಷಿತ ನೀರು ಸೇವಿಸಿ ಸಾವು ಸಂಭವಿಸಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಆರೋಗ್ಯಾಧಿಕಾರಿ ಜೊತೆ ದೂರವಾಣಿ ಮೂಲಕ ಮಾತನಾಡಿ ಮಾಹಿತಿ ಪಡೆದುಕೊಂಡರು.
ನೀರು ಕಲುಷಿತಗೊಳ್ಳಲು ಕಾರಣವೇನು ಎಂಬುದನ್ನು ಪತ್ತೆ ಹಚ್ಚಿ ಸೂಕ್ತ ಕ್ರಮ ಕೈಗೊಳ್ಳುವಂತೆ ಸಿಎಂ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಕಲುಷಿತ ನೀರು ಸೇವನೆಯಿಂದ ಅಸ್ವಸ್ಥರಾಗಿ ಆಸ್ಪತ್ರೆಗೆ ದಾಖಲಾಗಿರುವವರ ಚಿಕಿತ್ಸೆಗೆ ಸೂಕ್ತ ವ್ಯವಸ್ಥೆ ಮಾಡುವಂತೆ ಆದೇಶಿಸಿದ್ದಾರೆ.