Homeಕರ್ನಾಟಕನಾಗಮಂಗಲ ಗಲಾಟೆ | ಕಾಂಗ್ರೆಸ್‌ನ ಪೂರ್ವಯೋಜಿತ ಕೃತ್ಯ: ಹೆಚ್‌ ಡಿ ಕುಮಾರಸ್ವಾಮಿ ಆರೋಪ

ನಾಗಮಂಗಲ ಗಲಾಟೆ | ಕಾಂಗ್ರೆಸ್‌ನ ಪೂರ್ವಯೋಜಿತ ಕೃತ್ಯ: ಹೆಚ್‌ ಡಿ ಕುಮಾರಸ್ವಾಮಿ ಆರೋಪ

ಗಣೇಶ ಮೆರವಣಿಗೆ ವೇಳೆ ನಾಗಮಂಗಲ ಪಟ್ಟಣದಲ್ಲಿ ನಡೆದ ಗಲಭೆ ಪೂರ್ವಯೋಜಿತ ಕೃತ್ಯ, ವ್ಯವಸ್ಥಿತ ಪಿತೂರಿ. ಅಷ್ಟೇ ಅಲ್ಲ; ಇದು ಕಾಂಗ್ರೆಸ್ ಪ್ರಾಯೋಜಿತ ಗಲಭೆ ಎಂದು ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿ ನೇರ ಆರೋಪ ಮಾಡಿದರು.

ನಾಗಮಂಗಲದ ಗಲಭೆ ಪೀಡಿತ ಪ್ರದೇಶಗಳಿಗೆ ಶುಕ್ರವಾರ ಬೆಳಗ್ಗೆ ಭೇಟಿ ನೀಡಿ ದುಷ್ಕರ್ಮಿಗಳ ದಾಳಿಗೆ ತುತ್ತಾದ ಅಂಗಡಿ, ಮಳಿಗೆಗಳನ್ನು ವೀಕ್ಷಿಸಿದ ನಂತರ ಸಚಿವರು ಮಾಧ್ಯಮಗಳ ಜತೆ ಮಾತನಾಡಿದರು.

“ವ್ಯವಸ್ಥಿತವಾಗಿ ಗಲಭೆಗಳನ್ನು ಸೃಷ್ಟಿ ಮಾಡುವುದು ಕಾಂಗ್ರೆಸ್‌ಗೆ ಕರತಲಾಮಲಕ. ಹಿಂದಿನಿಂದಲೂ ಅದನ್ನು ಮಾಡಿಕೊಂಡು ಬಂದಿದೆ. 1990ರಲ್ಲಿ ಅಂದಿನ ಮುಖ್ಯಮಂತ್ರಿ ವೀರೇಂದ್ರ ಪಾಟೀಲ್ ಅವರನ್ನು ಅಧಿಕಾರದಿಂದ ಕೆಳಗಿಳಿಸಲು ರಾಮನಗರ, ಚನ್ನಪ್ಪಟ್ಟಣದಲ್ಲಿ ಕೋಮುಗಲಭೆ ಸೃಷ್ಟಿಸಿ ಬೆಂಕಿ ಹಾಕಲಾಯಿತು. ಅವಳಿ ಪಟ್ಟಣಗಳು ಹೊತ್ತಿ ಉರಿದವು. ಅದೇ ಮಾದರಿಯಲ್ಲಿ ನಾಗಮಂಗಲದಲ್ಲಿ ಗಲಭೆ ಎಬ್ಬಿಸಲಾಗಿದೆ” ಎಂದು ಆರೋಪಿಸಿದರು.

“ಡಿಜಿ ಹಳ್ಳಿ ಪೊಲೀಸ್ ಠಾಣೆಗೆ ಬೆಂಕಿ ಇಟ್ಟು ಸುಟ್ಟು ಹಾಕಲಾಯಿತು. ಅದಕ್ಕೂ ಕಾಂಗ್ರೆಸ್ ನಾಯಕರೇ ಕಾರಣ. ಆ ಪ್ರಕರಣದಲ್ಲಿ ಜೈಲಿಗೆ ಹೋದವರು ಏನಾಗಿದ್ದಾರೋ ಗೊತ್ತಿಲ್ಲ. ನಾಗಮಂಗಲದಲ್ಲಿ ಈಗ ಯಾವ ದುರುದ್ದೇಶ ಇಟ್ಟುಕೊಂಡು ಗಲಭೆ ಸೃಷ್ಟಿ ಮಾಡಲಾಗಿದೆಯೋ” ಎಂದು ಪ್ರಶ್ನಿಸಿದರು.

“ಚನ್ನಪಟ್ಟಣದಲ್ಲಿ ಉಪಚುನಾವಣೆ ಬರುತ್ತಿದೆ. ಬೇರೆ ಬೇರೆ ಘಟನೆಗಳು ಕೂಡ ನಡೆಯುತ್ತಿವೆ. ಹೀಗಾಗಿ ಒಂದು ಸಮುದಾಯದ ಓಲೈಕೆ ಮಾಡಲು ಈ ಸಂಚು ರೂಪಿಸಿರಬಹುದು. ಇಡೀ ಘಟನೆಯನ್ನು ನೋಡಿದರೆ ನಾಗಮಂಗಲದ ಕೃತ್ಯದ ಹಿಂದೆ ಕಾಂಗ್ರೆಸ್ ಇರಬಹುದು” ಎಂದು ಶಂಕೆ ವ್ಯಕ್ತಪಡಿಸಿದರು.

“ಈ ಘಟನೆಗೆ ರಾಜ್ಯ ಕಾಂಗ್ರೆಸ್ ಸರಕಾರದ ಆಡಳಿತ ವೈಫಲ್ಯ ಹಾಗೂ ಸ್ಥಳೀಯ ಪೊಲೀಸರ ಕರ್ತವ್ಯ ಲೋಪವೂ ಕಾರಣ. ಪೊಲೀಸರು ನಿಜವಾದ ದುಷ್ಕರ್ಮಿಗಳನ್ನು ಬಂಧಿಸಿ ಅವರಿಗೆ ಶಿಕ್ಷೆಯಾಗುವ ರೀತಿಯಲ್ಲಿ ಕೆಲಸ ಮಾಡಬೇಕು” ಆಗ್ರಹಿಸಿದರು.

ಹತ್ತೇ ನಿಮಿಷದಲ್ಲಿ ಕಲ್ಲು, ಪೆಟ್ರೋಲ್ ಬಾಂಬ್ ಎಲ್ಲಿಂದ ಬಂದವು?

“ಮೆರವಣಿಗೆ ಹೊರಟಿದ್ದವರ ಮೇಲೆ ಕಲ್ಲು, ಚಪ್ಪಲಿ, ಪೆಟ್ರೋಲ್ ಬಾಂಬ್ ಗಳನ್ನು ಎಸೆಯಲಾಗಿದೆ. ಕೇವಲ ಹತ್ತು ನಿಮಿಷದಲ್ಲಿ ಅಷ್ಟು ಪ್ರಮಾಣದ ಕಲ್ಲು, ಚಪ್ಪಲಿ, ಕಬ್ಬಿಣದ ಪೈಪ್‌ಗಳು, ಪೆಟ್ರೋಲ್ ಬಾಂಬ್‌ಗಳು ಎಲ್ಲಿಂದ ಬಂದವು? ಹತ್ತೇ ನಿಮಿಷದಲ್ಲಿ ಇವನ್ನೆಲ್ಲಾ ಸಂಗ್ರಹ ಮಾಡಿಕೊಳ್ಳಲು ಸಾಧ್ಯವೇ? ಇಡೀ ಗಲಭೆಯ ರೀತಿಯನ್ನು ನೋಡಿದರೆ ಹಿಂದೆ ದೊಡ್ಡ ಪಿತೂರಿ ಅಡಗಿರುವಂತೆ ತೋರುತ್ತದೆ” ಎಂದು ಅನುಮಾನ ವ್ಯಕ್ತಪಡಿಸಿದರು.

ಗೃಹ ಸಚಿವರ ವಿರುದ್ಧ ಕಿಡಿ

“ಇಷ್ಟೊಂದು ದೊಡ್ಡ ಗಲಭೆ ಆಗಿದೆ. ಯೋಜಿತವಾಗಿ ಅಂಗಡಿಗಳಿಗೆ ಬೆಂಕಿ ಹಚ್ಚಲಾಗಿದೆ. ಆದರೂ ಇವರೂ ಸಣ್ಣ, ಆಕಸ್ಮಿಕ ಘಟನೆ ಎನ್ನುತ್ತಾರೆ, ಇವರನ್ನು ಗೃಹ ಸಚಿವರು ಎಂದು ಕರೆಯಬೇಕೆ? ಎಂದು ಆಕ್ರೋಶ ವ್ಯಕ್ತಪಡಿಸಿದರು.

“ನಾನು ನಾಗಮಂಗಲಕ್ಕೆ ಬರುತ್ತೇನೆ ಎಂದು ಗುರುವಾರವೇ ಹೇಳಿದ್ದೆ. ಅಂದು ಸಂಜೆ ಬಿಜೆಪಿ ನಾಯಕರು ಸ್ಥಳಕ್ಕೆ ಬಂದಿದ್ದರು. ಅದಕ್ಕಾಗಿಯೇ ಇನ್ಸ್ಪೆಕ್ಟರ್ ಅಶೋಕ್‌ ಕುಮಾರ್‌ರನ್ನು ಸಸ್ಪೆಂಡ್ ಮಾಡಿದ್ದಾರೆ. ಇದು ಕಣ್ಣೊರೆಸುವ ತಂತ್ರ. ಮಸೀದಿ ಬಳಿ 10 ನಿಮಿಷ ಡಾನ್ಸ್ ಮಾಡಲು ಬಿಟ್ಟವರು ಯಾರು? ಆಗ ಪೊಲೀಸರು ಏನು ಮಾಡುತಿದ್ದರು? ಹೆಚ್ಚುವರಿ ಪೊಲೀಸರು ಇದ್ದರೆ ಪರಿಸ್ಥಿತಿ ನಿಯಂತ್ರಣ ಮಾಡಬಹುದಿತ್ತು” ಎಂದರು.

ಆರ್ಥಿಕ ನೆರವು

ಇದೇ ವೇಳೆ ಕೇಂದ್ರ ಸಚಿವ ಕುಮಾರಸ್ವಾಮಿ ಅವರು ಗಲಭೆಯಲ್ಲಿ ಆಸ್ತಿಪಾಸ್ತಿ, ಜೀವನೋಪಾಯ ಕಳೆದುಕೊಂಡ ಅನೇಕರಿಗೆ ವೈಯಕ್ತಿಕವಾಗಿ ಆರ್ಥಿಕ ನೆರವು ನೀಡಿದರು.

“ಸರಕಾರ ಸರಿಯಾಗಿ ಅಂದಾಜು ಮಾಡಿ ಕನಿಷ್ಠ ಶೇ.70ರಿಂದ 80ರಷ್ಟು ಪರಿಹಾರ ಕೊಡಬೇಕು. ನಾನು ಕೊಡುವುದು ಆರಂಭದಲ್ಲಿ ಅವರ ಜೀವನೋಪಾಯಕ್ಕೆ ಮಾತ್ರ. ಅನೇಕ ವ್ಯಾಪಾರಿಗಳು ಇಡೀ ಅಸ್ತಿಯನ್ನೇ ಕಳೆದುಕೊಂಡಿದ್ದಾರೆ. ಅವರಿಗೆ ನನ್ನ ಕೈಲಾದ ಮಟ್ಟಿಗೆ ಸಹಾಯ ಮಾಡಿದ್ದೇನೆ. ಎರಡೂ ಸಮುದಾಯಗಳ ಜನರಿಗೂ ನೆರವಾಗಿದ್ದೇನೆ” ಎಂದು ಹೇಳಿದರು.

ಮಾಜಿ ಶಾಸಕರಾದ ಸುರೇಶ್ ಗೌಡ, ರವೀಂದ್ರ ಶ್ರೀಕಂಠಯ್ಯ, ಡಾ.ಕೆ.ಅನ್ನದಾನಿ, ಮಂಡ್ಯ ಜಿಲ್ಲಾ ಜೆಡಿಎಸ್ ಅಧ್ಯಕ್ಷ ರಮೇಶ್ ಸೇರಿ ಅನೇಕ ಮುಖಂಡರು ಜತೆಯಲ್ಲಿ ಇದ್ದರು.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments