ರಾಷ್ಟ್ರಕವಿ ಕುವೆಂಪು ಅವರಿಗೆ ಮರಣೋತ್ತರವಾಗಿ ಭಾರತ ರತ್ನ ಪುರಸ್ಕಾರ ನೀಡಬೇಕೆಂದು ಕೇಂದ್ರ ಸರ್ಕಾರಕ್ಕೆ ಶಿಫಾರಸ್ಸು ಮಾಡಲು ಸಿಎಂ ಸಿದ್ದರಾಮಯ್ಯ ನೇತೃತ್ವದ ಕ್ಯಾಬಿನೆಟ್ ಸಭೆಯಲ್ಲಿ ತೀರ್ಮಾನ ಕೈಗೊಳ್ಳಲಾಗಿದೆ.
ಕನ್ನಡ ಸಾಹಿತ್ಯ ಲೋಕದ ದಿಗ್ಗಜ ಕುವೆಂಪು ಅವರಿಗೆ ‘ಭಾರತ ರತ್ನ’ ಪ್ರಶಸ್ತಿ ಸಿಗಬೇಕು ಎಂಬುದು ಓದುಗರು ಮತ್ತು ಅಭಿಮಾನಿಗಳ ಬಹುಕಾಲದ ಬೇಡಿಕೆಯಾಗಿತ್ತು. ಆ ಬಗ್ಗೆ ರಾಜ್ಯ ಸರ್ಕಾರದ ಸಂಪುಟ ಸಭೆಯಲ್ಲಿ ಚರ್ಚೆ ಕೇಂದ್ರಕ್ಕೆ ಶಿಫಾರಸು ಮಾಡಿದೆ.
ರಾಷ್ಟ್ರಕವಿ ಕುವೆಂಪು ಅವರು ಕನ್ನಡ ಸಾಹಿತ್ಯ ಲೋಕಕ್ಕೆ ನೀಡಿರುವ ಕೊಡುಗೆ ಅಪಾರ. ಕರ್ನಾಟಕ ರತ್ನ, ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ, ಪಂಪ ಪ್ರಶಸ್ತಿ ಸೇರಿದಂತೆ ಹಲವಾರು ಗೌರವಗಳು ಅವರಿಗೆ ಸಂದಿವೆ.
ಕರ್ನಾಟಕದ ಮೂವರಿಗೆ ಮಾತ್ರವೇ ಇದುವರೆಗೂ ಭಾರತ ರತ್ನ ಪುರಸ್ಕಾರ ನೀಡಲಾಗಿದೆ. ಸರ್ ಎಂ.ವಿಶ್ವೇಶ್ವರಯ್ಯ, ಭೀಮಸೇನ ಜೋಶಿ ಹಾಗೂ ಸಿಎನ್.ಆರ್. ರಾವ್ ಅವರಿಗೆ ಭಾರತ ರತ್ನ ನೀಡಲಾಗಿದೆ.
ಕರ್ನಾಟಕ ಸರ್ಕಾರವು ಈ ಹಿಂದೆ ಸಿದ್ದಗಂಗಾ ಮಠದ ಪೀಠಾಧ್ಯಕ್ಷರಾಗಿದ್ದ ಶಿವಕುಮಾರ ಸ್ವಾಮೀಜಿಗಳಿಗೆ ಭಾರತ ರತ್ನ ಪುರಸ್ಕಾರ ನೀಡಬೇಕೆಂದು ಕೂಡ ಕೇಂದ್ರ ಸರ್ಕಾರಕ್ಕೆ ಶಿಫಾರಸ್ಸು ಮಾಡಿತ್ತು. ಅದರ ಬಗ್ಗೆಯೂ ಕೇಂದ್ರ ಸರ್ಕಾರ ಇದುವರೆಗೂ ಯಾವುದೇ ತೀರ್ಮಾನ ಕೈಗೊಂಡಿಲ್ಲ.
ಇನ್ನೂ 2024 ರಲ್ಲಿ ಕೇಂದ್ರದ ಮೋದಿ ಸರ್ಕಾರವು ಬಿಹಾರದ ಮಾಜಿ ಸಿಎಂ ಕರ್ಪೂರಿ ಠಾಕೂರ್, ಬಿಜೆಪಿಯ ಭೀಷ್ಮ ಎಲ್.ಕೆ.ಅಡ್ವಾಣಿ, ಕೃಷಿ ವಿಜ್ಞಾನಿ ಎಂ.ಎಸ್.ಸ್ವಾಮಿನಾಥನ್, ಮಾಜಿ ಪ್ರಧಾನಿ ಪಿ.ವಿ.ನರಸಿಂಹರಾವ್, ಚೌಧರಿ ಚರಣ್ ಸಿಂಗ್ ಅವರಿಗೆ ಭಾರತ ರತ್ನ ಪ್ರಶಸ್ತಿ ಘೋಷಿಸಿತ್ತು.