Homeಕರ್ನಾಟಕಎನ್‌ಡಿಎ ಸಭೆ: ವಿಧಾನಪರಿಷತ್‌ಗೆ ಸಿದ್ಧತೆ; ಸರ್ಕಾರದ ವೈಫಲ್ಯ ತೆರೆದಿಡಲು ಜೋಶಿ ಕರೆ

ಎನ್‌ಡಿಎ ಸಭೆ: ವಿಧಾನಪರಿಷತ್‌ಗೆ ಸಿದ್ಧತೆ; ಸರ್ಕಾರದ ವೈಫಲ್ಯ ತೆರೆದಿಡಲು ಜೋಶಿ ಕರೆ

ವಿಧಾನಪರಿಷತ್ ಚುನಾವಣೆ ಹಿನ್ನೆಲೆಯಲ್ಲಿ ಬೆಂಗಳೂರಿನಲ್ಲಿ ಶನಿವಾರ ಎನ್‌ಡಿಎ ನಾಯಕರ ಸಭೆ ನಡೆದು, ಚುನಾವಣಾ ಕಾರ್ಯತಂತ್ರ ಕುರಿತು ಸಮಾಲೋಚನೆ ನಡೆಸಲಾಯಿತು.

ರಾಜ್ಯದಲ್ಲಿ ನಡೆಯಲಿರುವ ವಿಧಾನಪರಿಷತ್ ಚುನಾವಣೆಯನ್ನು ಎನ್‌ಡಿಎ ಮೈತ್ರಿಕೂಟ ಗಂಭೀರವಾಗಿ ಪರಿಗಣಿಸಿದ್ದು, ಆಡಳಿತಾರೂಢ ಕಾಂಗ್ರೆಸ್ ವಿರುದ್ಧ ಗೆಲುವಿಗೆ ಈಗಿನಿಂದಲೇ ಅಗತ್ಯ ಸಿದ್ಧತೆಗಳನ್ನು ಕೈಗೊಳ್ಳುವ ಬಗ್ಗೆ ಚರ್ಚೆ ನಡೆಸಲಾಯಿತು. ಕೇಂದ್ರ ಸಚಿವ ಪ್ರಲ್ಹಾದ ಜೋಶಿ, ಎಚ್.ಡಿ. ಕುಮಾರಸ್ವಾಮಿ, ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ, ವಿಪಕ್ಷ ನಾಯಕ ಆರ್. ಅಶೋಕ್, ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಸೇರಿದಂತೆ ನಾಯಕರು ಸಭೆಯಲ್ಲಿ ಪಾಲ್ಗೊಂಡು ಮಹತ್ವದ ಚರ್ಚೆ ನಡೆಸಿದರು.

ಮುಂದಿನ ದಿನಗಳಲ್ಲಿ ನಡೆಯುವ ವಿಧಾನಪರಿಷತ್ ಹಾಗೂ ಸ್ಥಳೀಯ ಸಂಸ್ಥೆಗಳ ಚುನಾವಣೆಯನ್ನು ಸಮರ್ಥವಾಗಿ ಎದುರಿಸಿ ಮೈತ್ರಿ ಅಭ್ಯರ್ಥಿಗಳನ್ನು ಗೆಲ್ಲಿಸಿಕೊಳ್ಳುವ ಕುರಿತು ಬಿಜೆಪಿ ಮತ್ತು ಜೆಡಿಎಸ್ ಮುಖಂಡರು ಪ್ರಮುಖ ವಿಷಯಗಳ ಮೇಲೆ ಸಮಾಲೋಚನೆ ನಡೆಸಿದರು.

ವಿಧಾನಪರಿಷತ್ ಚುನಾವಣೆಯಲ್ಲಿ ರಾಜ್ಯ ಸರ್ಕಾರದ ವೈಫಲ್ಯಗಳನ್ನು ಜನರೆದುರು ತೆರೆದಿಡಬೇಕು ಎಂದು ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಸಲಹೆ ನೀಡಿದರು. “ರಾಜ್ಯದಲ್ಲಿ ಬೆಲೆ ಏರಿಕೆ, ಭ್ರಷ್ಟಾಚಾರ ಮತ್ತು ತುಷ್ಟೀಕರಣದ ರಾಜಕಾರಣ ಎಲ್ಲೆಯನ್ನು ಮೀರಿದೆ. ಇದರ ವಿರುದ್ಧ ಹೋರಾಡುತ್ತಲೇ ಚುನಾವಣೆ ಗೆಲುವಿಗೆ ಎನ್‌ಡಿಎ ನಾಯಕರು ಮತ್ತು ಕಾರ್ಯಕರ್ತರು ಒಟ್ಟಾಗಿ ಶ್ರಮಿಸಬೇಕು,” ಎಂದು ಅವರು ಹೇಳಿದರು.

ರಾಜ್ಯದಲ್ಲಿ ಬರ ಪರಿಸ್ಥಿತಿ ನಿಭಾಯಿಸುವಲ್ಲಿ ಕಾಂಗ್ರೆಸ್ ಸರ್ಕಾರ ತಡವರಿಸುತ್ತಿದೆ ಎಂದು ಆರೋಪಿಸಿದ ಅವರು, “ಕಾಂಗ್ರೆಸ್ ಸರ್ಕಾರದ ಧನದಾಹಕ್ಕೆ ಅಧಿಕಾರಿಗಳು, ಗುತ್ತಿಗೆದಾರರು ಮತ್ತು ರೈತರು ನೇಣಿಗೆ ಕೊರಳೊಡ್ಡುವ ಸ್ಥಿತಿ ನಿರ್ಮಾಣವಾಗಿದೆ. ಅಭಿವೃದ್ಧಿಗೆ ಆರ್ಥಿಕ ಇಲಾಖೆ ವಿತ್ತಕೊರತೆ ಎಂದು ಹೇಳಿ ಕೈಚೆಲ್ಲಿ ಕುಳಿತಿದೆ. ಇದೆಲ್ಲದರ ಬಗ್ಗೆ ಜನಜಾಗೃತಿ ಮೂಡಿಸಬೇಕು,” ಎಂದು ಹೇಳಿದರು.

“ಕಾಂಗ್ರೆಸ್‌ನಲ್ಲಿ ವಿರೋಧಾಭಾಸ”
ಕಾಂಗ್ರೆಸ್ ಪಕ್ಷದಲ್ಲಿ ವಿರೋಧಾಭಾಸವಿದೆ ಎಂದು ಪ್ರಲ್ಹಾದ ಜೋಶಿ ಹೇಳಿದರು. “ಬರದ ನೆಪವೊಡ್ಡಿ ಆ ಪಕ್ಷದ ಶಾಸಕರೇ ರಾಜೀನಾಮೆ ಬೆದರಿಕೆ ಹಾಕುತ್ತಿದ್ದಾರೆ. ಇನ್ನೊಂದೆಡೆ ಖಜಾನೆ ಖಾಲಿಯಾಗಿದೆ. ಆಡಳಿತ ವೈಫಲ್ಯವನ್ನು ಜನರಿಗೆ ಮನವರಿಕೆ ಮಾಡಿಕೊಡಿ,” ಎಂದು ಅವರು ಕರೆ ನೀಡಿದರು.

ಸಭೆಯಲ್ಲಿ ಕೇಂದ್ರ ರಾಜ್ಯಖಾತೆ ಸಚಿವೆ ಶೋಭಾ ಕರಂದ್ಲಾಜೆ, ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ, ಜೆಡಿಎಸ್ ಶಾಸಕಾಂಗ ನಾಯಕ ಸುರೇಶ್ ಬಾಬು, ಬೋಜೇಗೌಡ, ನಿಖಿಲ್ ಕುಮಾರಸ್ವಾಮಿ, ಪರಿಷತ್ ಸದಸ್ಯ ಎಸ್.ವಿ. ಸಂಕನೂರ್ ಸೇರಿದಂತೆ ಶಾಸಕರು, ವಿಧಾನಪರಿಷತ್ ಸದಸ್ಯರು, ಎರಡೂ ಪಕ್ಷಗಳ ಪದಾಧಿಕಾರಿಗಳು, ಮುಖಂಡರು ಹಾಗೂ ಕಾರ್ಯಕರ್ತರು ಭಾಗವಹಿಸಿದ್ದರು.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments