Homeಕರ್ನಾಟಕರೈತರ ಸಂಕಷ್ಟದಲ್ಲಿ ರಾಜಕೀಯ ಬೇಡ, ಕೇಂದ್ರ ತಕ್ಷಣ ಬರ ಪರಿಹಾರ ಬಿಡುಗಡೆ ಮಾಡಲಿ: ಡಾ.ಜಿ.ಪರಮೇಶ್ವರ

ರೈತರ ಸಂಕಷ್ಟದಲ್ಲಿ ರಾಜಕೀಯ ಬೇಡ, ಕೇಂದ್ರ ತಕ್ಷಣ ಬರ ಪರಿಹಾರ ಬಿಡುಗಡೆ ಮಾಡಲಿ: ಡಾ.ಜಿ.ಪರಮೇಶ್ವರ

ರಾಜ್ಯದ ಬರ ಪರಿಸ್ಥಿತಿಗೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರಕ್ಕೆ ಈಗಾಗಲೇ ಮೂರು ಬಾರಿ ಮನವಿ ಸಲ್ಲಿಸಿದ್ದರೂ, ಕಳೆದ ಎರಡು ತಿಂಗಳಿನಿಂದ ಯಾವುದೇ ಪ್ರತಿಕ್ರಿಯೆ ಬಂದಿಲ್ಲ. ರಾಜ್ಯಕ್ಕೆ ಬರ ಪರಿಹಾರವಾಗಿ ಒಟ್ಟು ₹22 ಸಾವಿರ ಕೋಟಿ ನೀಡುವಂತೆ ಮನವಿ ಮಾಡಲಾಗಿದೆ. ಕೇಂದ್ರ ಸರ್ಕಾರದ ತಂಡಗಳು ರಾಜ್ಯಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ವರದಿಯನ್ನೂ ಸಲ್ಲಿಸಿವೆ. ಆದರೂ ಪರಿಹಾರ ಬಿಡುಗಡೆಗೆ ಕೇಂದ್ರದಿಂದ ಯಾವುದೇ ಸ್ಪಂದನೆ ದೊರೆತಿಲ್ಲ. ಇನ್ನೂ ಸ್ವಲ್ಪ ಕಾಲ ಕಾಯಲಿದ್ದು, ಆನಂತರ ಮುಖ್ಯಮಂತ್ರಿಗಳು ಹಾಗೂ ಸಚಿವ ಸಂಪುಟದ ಸಹೋದ್ಯೋಗಿಗಳೊಂದಿಗೆ ಚರ್ಚಿಸಿ ಮುಂದಿನ ಕಾನೂನು ಮತ್ತು ಆಡಳಿತಾತ್ಮಕ ಕ್ರಮಗಳ ಕುರಿತು ತೀರ್ಮಾನ ಕೈಗೊಳ್ಳಲಾಗುವುದು ಎಂದು ಉಪಮುಖ್ಯಮಂತ್ರಿಗಳಾದ ಡಾ.ಜಿ.ಪರಮೇಶ್ವರ ತಿಳಿಸಿದರು.

ಇಂದು ಸದಾಶಿವನಗರದಲ್ಲಿರುವ ತಮ್ಮ ಗೃಹಕಚೇರಿ ಬಳಿ ವಿವಿಧ ವಿಚಾರಗಳ ಕುರಿತು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಬರ ಪರಿಹಾರದ ವಿಚಾರದಲ್ಲಿ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಒಟ್ಟಾಗಿ ಕೆಲಸ ಮಾಡಬೇಕು. ಬರ ಯಾರನ್ನೂ ಕೇಳಿ ಬರುವುದಿಲ್ಲ. ರೈತರು ಸಂಕಷ್ಟದಲ್ಲಿರುವಾಗ ರಾಜಕೀಯ ಮಾಡುವುದರಿಂದ ಯಾವುದೇ ಪ್ರಯೋಜನವಿಲ್ಲ. ಒಬ್ಬರ ಮೇಲೊಬ್ಬರು ಆರೋಪ ಮಾಡುವುದಕ್ಕಿಂತ ರೈತರ ನೆರವಿಗೆ ನಿಲ್ಲುವುದು ಮುಖ್ಯ. ಬರದ ವಿಚಾರದಲ್ಲಿ ರಾಜಕೀಯ ಮಾಡುವುದು ಎಷ್ಟು ಸರಿ ಎಂಬುದನ್ನು ರೈತರು ಪ್ರಶ್ನಿಸುತ್ತಾರೆ. ರಾಜಕೀಯ ಮಾಡಲು ಬೇರೆ ವಿಚಾರಗಳಿವೆ. ರೈತರ ಸಂಕಷ್ಟದ ಸಂದರ್ಭದಲ್ಲಿ ರಾಜಕೀಯ ಮಾಡಬಾರದು ಎಂದರು.

ಕೇಂದ್ರ ಗೃಹ ಸಚಿವರು, ಕೃಷಿ ಸಚಿವರು ಹಾಗೂ ಪ್ರಧಾನಮಂತ್ರಿಗಳಿಗೆ ಈಗಾಗಲೇ ಪತ್ರ ಬರೆಯಲಾಗಿದೆ. ಕೇಂದ್ರ ಸಚಿವರನ್ನು ಭೇಟಿಯಾಗಲು ಸಮಯ ಕೋರಿ ಪತ್ರ ಬರೆಯುವುದು ಸಾಮಾನ್ಯ ಪ್ರಕ್ರಿಯೆ. ರಾಜ್ಯದ ಸಮಸ್ಯೆಗಳನ್ನು ನೇರವಾಗಿ ವಿವರಿಸಲು ಅವಕಾಶ ನೀಡಬೇಕು. ಜವಾಬ್ದಾರಿಯುತ ರಾಜ್ಯ ಸರ್ಕಾರವೊಂದು ಕೇಂದ್ರದ ಸಂಬಂಧಪಟ್ಟ ಸಚಿವಾಲಯಕ್ಕೆ ಪತ್ರ ಬರೆದಾಗ ಅದಕ್ಕೆ ಸೂಕ್ತವಾಗಿ ಸ್ಪಂದಿಸುವ ಜವಾಬ್ದಾರಿ ಕೇಂದ್ರ ಸರ್ಕಾರಕ್ಕಿದೆ ಎಂದು ಹೇಳಿದರು.

ಕೇಂದ್ರದಿಂದ ಪರಿಹಾರ ದೊರೆಯದಿದ್ದರೆ ಮುಂದಿನ ಕ್ರಮಗಳ ಕುರಿತು ಮುಖ್ಯಮಂತ್ರಿಗಳು ಹಾಗೂ ಸಚಿವ ಸಂಪುಟದ ಸಹೋದ್ಯೋಗಿಗಳೊಂದಿಗೆ ಚರ್ಚಿಸಿ ತೀರ್ಮಾನ ಕೈಗೊಳ್ಳಲಾಗುವುದು. ಈ ಹಿಂದೆಯೂ ಕೇಂದ್ರದಿಂದ ಪರಿಹಾರ ದೊರೆಯದ ಸಂದರ್ಭದಲ್ಲಿ ದೆಹಲಿಗೆ ತೆರಳಿ ಪ್ರತಿಭಟನೆ ನಡೆಸಿದ್ದರೂ ಯಾವುದೇ ಸ್ಪಂದನೆ ಸಿಕ್ಕಿರಲಿಲ್ಲ. ಬಳಿಕ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದಾಗ ನ್ಯಾಯಾಲಯದ ನಿರ್ದೇಶನದ ಮೇರೆಗೆ ಸುಮಾರು ₹3,500 ಕೋಟಿ ಪರಿಹಾರ ದೊರೆತಿತ್ತು. ಈ ಬಾರಿಯೂ ಅಂತಹ ಪರಿಸ್ಥಿತಿ ನಿರ್ಮಾಣವಾಗಲಿದೆ ಎಂದು ಭಾವಿಸಿಲ್ಲ. ಕೇಂದ್ರ ಸರ್ಕಾರ ನಮ್ಮ ಮನವಿಗೆ ಸ್ಪಂದಿಸಿ ಆದಷ್ಟು ಬೇಗ ಪರಿಹಾರ ಬಿಡುಗಡೆ ಮಾಡುತ್ತದೆ ಎಂಬ ನಿರೀಕ್ಷೆಯಲ್ಲಿದ್ದೇವೆ ಎಂದು ತಿಳಿಸಿದರು.

ರಾಜ್ಯ ಸರ್ಕಾರವು ಅರ್ಹ ರೈತರಿಗೆ ತಲಾ ₹5 ಸಾವಿರ ಪರಿಹಾರ ನೀಡುವುದಾಗಿ ಘೋಷಿಸಿದ್ದು, ಈಗಾಗಲೇ ವಿತರಣೆ ಆರಂಭಿಸಿದೆ. ಬಹುತೇಕ ಎಲ್ಲ ಜಿಲ್ಲೆಗಳಿಗೂ ಪರಿಹಾರ ತಲುಪಿಸುವ ಕಾರ್ಯ ನಡೆಯುತ್ತಿದೆ. ಅಧಿವೇಶನ ಆರಂಭವಾಗುವ ಮುನ್ನವೇ ರೈತರಿಗೆ ಘೋಷಿಸಿರುವ ಹಣ ತಲುಪಿಸಬೇಕು ಎಂಬ ಉದ್ದೇಶದಿಂದ ಸರ್ಕಾರ ಅಗತ್ಯ ಕ್ರಮಗಳನ್ನು ಕೈಗೊಳ್ಳುತ್ತಿದೆ. ಈ ಸಂಬಂಧ ಈಗಾಗಲೇ ಸಭೆ ನಡೆಸಿ ಸೂಚನೆಗಳನ್ನು ನೀಡಲಾಗಿದೆ ಎಂದರು.

ಆಶಾ ಕಾರ್ಯಕರ್ತೆಯರ ಸಮಸ್ಯೆ ಪರಿಹರಿಸಲು ಮುಖ್ಯಮಂತ್ರಿಗಳೇ ಮುಂದಾಗಿದ್ದಾರೆ:

ಆಶಾ ಕಾರ್ಯಕರ್ತೆಯರ ಪ್ರತಿಭಟನೆ ಕುರಿತು ಪ್ರತಿಕ್ರಿಯಿಸಿದ ಅವರು, ಈಗಾಗಲೇ ಮುಖ್ಯಮಂತ್ರಿಗಳು ಪ್ರತಿಭಟನಾಕಾರರ ಪ್ರತಿನಿಧಿಗಳನ್ನು ಭೇಟಿ ಮಾಡಿ, ಅವರ ಸಮಸ್ಯೆಗಳನ್ನು ಖುದ್ದಾಗಿ ಬಗೆಹರಿಸುವ ಭರವಸೆ ನೀಡಿದ್ದಾರೆ. ನನ್ನನ್ನು ನಂಬಿ, ಸರ್ಕಾರದ ಮೇಲೆ ವಿಶ್ವಾಸವಿಡಿ ಎಂದು ಮುಖ್ಯಮಂತ್ರಿಗಳು ಹೇಳಿದ್ದಾರೆ. ರಾಜ್ಯದ ಮುಖ್ಯಮಂತ್ರಿಗಳೇ ಭರವಸೆ ನೀಡಿದಾಗ ಅವರ ಮಾತಿನ ಮೇಲೆ ವಿಶ್ವಾಸವಿಡಬೇಕಲ್ಲವೇ? ವಿಶ್ವಾಸವಿಲ್ಲದಿದ್ದರೆ ಸಮಸ್ಯೆಗಳನ್ನು ಬಗೆಹರಿಸುವುದು ಹೇಗೆ ಎಂದು ಪ್ರಶ್ನಿಸಿದರು.

ನವೆಂಬರ್ 25ರ ಸಂಜೆ ಮುಖ್ಯಮಂತ್ರಿಗಳು ಪ್ರತಿಭಟನಾಕಾರರನ್ನು ಭೇಟಿ ಮಾಡಿ ಚರ್ಚೆ ನಡೆಸಲಿದ್ದಾರೆ. ಆನಂತರ ಸೂಕ್ತ ತೀರ್ಮಾನ ಕೈಗೊಳ್ಳಲಿದ್ದಾರೆ. ಈ ಹಿಂದೆ ನೀಡಿರುವ ಭರವಸೆಗಳನ್ನು ಗಮನದಲ್ಲಿಟ್ಟುಕೊಂಡೇ ಈಗಿನ ಮುಖ್ಯಮಂತ್ರಿಗಳು ಸೂಕ್ತ ನಿರ್ಧಾರ ಕೈಗೊಳ್ಳಲಿದ್ದಾರೆ. ಸರ್ಕಾರ ಖಂಡಿತವಾಗಿಯೂ ಸಮಸ್ಯೆ ಬಗೆಹರಿಸಲಿದೆ. ಪ್ರತಿಭಟನಾಕಾರರು ಸ್ವಲ್ಪ ತಾಳ್ಮೆಯಿಂದ ಮುಖ್ಯಮಂತ್ರಿಗಳ ಮೇಲೆ ವಿಶ್ವಾಸವಿಡಬೇಕು ಎಂದು ಮನವಿ ಮಾಡಿದರು.

ಲಿಖಿತ ಭರವಸೆ ನೀಡಬೇಕೆಂಬ ಪ್ರತಿಭಟನಾಕಾರರ ಬೇಡಿಕೆ ಕುರಿತು ಮಾತನಾಡಿ, ಪ್ರತಿಭಟನೆಗಳ ಸಂದರ್ಭದಲ್ಲಿ ಲಿಖಿತ ಭರವಸೆ ನೀಡುವಂತೆ ಆಗ್ರಹಿಸುವುದು ಸಾಮಾನ್ಯ. ಇಂತಹ ಬೇಡಿಕೆಗಳನ್ನು ಸಾಕಷ್ಟು ಬಾರಿ ಕೇಳಿದ್ದೇವೆ. ಆದರೆ, ಮುಖ್ಯವಾಗಿ ಅವರ ಸಮಸ್ಯೆ ಬಗೆಹರಿಯಬೇಕು. ಅವರ ಬೇಡಿಕೆ ಸರಿ ಅಥವಾ ತಪ್ಪು ಎಂದು ಚರ್ಚಿಸುವುದಕ್ಕಿಂತ ಸಮಸ್ಯೆಗೆ ಪರಿಹಾರ ಕಂಡುಕೊಳ್ಳುವುದು ಸರ್ಕಾರದ ಆದ್ಯತೆಯಾಗಬೇಕು ಎಂದು ಹೇಳಿದರು.

ಪುಸ್ತಕ ಮುಟ್ಟುಗೋಲು: ಪರಿಶೀಲನೆ ನಡೆಸಿಯೇ ಸರ್ಕಾರ ತೀರ್ಮಾನ:

ರವಿ ಹಂಜ್ ಅವರು ಸರ್ಕಾರಕ್ಕೆ ಸವಾಲು ಹಾಕಿರುವುದು ಹಾಗೂ ಪುಸ್ತಕ ಮುಟ್ಟುಗೋಲು ಹಾಕಿರುವ ವಿಚಾರವಾಗಿ ಪ್ರತಿಕ್ರಿಯಿಸಿದ ಅವರು, ಪುಸ್ತಕದಲ್ಲಿ ಯಾವುದೇ ಆಕ್ಷೇಪಾರ್ಹ ಪದಗಳನ್ನು ಬಳಸಿಲ್ಲ ಎಂದು ಅವರು ಹೇಳುತ್ತಿದ್ದಾರೆ. ಆದರೆ, ಪುಸ್ತಕದಲ್ಲಿರುವ ಹೇಳಿಕೆಗಳನ್ನು ಆಧರಿಸಿ ಸರ್ಕಾರದ ವಿರುದ್ಧ ಸವಾಲು ಹಾಕುತ್ತಿದ್ದಾರೆ. ಮೇಲ್ನೋಟಕ್ಕೆ ರಾಜ್ಯದ ಹಲವು ಸಮುದಾಯಗಳು ಈ ವಿಚಾರವಾಗಿ ಆಕ್ಷೇಪ ವ್ಯಕ್ತಪಡಿಸಿದ್ದು, ರಾಜ್ಯಾದ್ಯಂತ ಚರ್ಚೆ ನಡೆದಿದೆ ಎಂದರು.

ಈ ವಿಚಾರವನ್ನು ಸಚಿವ ಸಂಪುಟ ಸಭೆಯಲ್ಲಿಯೂ ಚರ್ಚಿಸಲಾಗಿದೆ. ಪುಸ್ತಕದಲ್ಲಿರುವ ಅಂಶಗಳನ್ನು ಪರಿಶೀಲಿಸಿಯೇ ಸರ್ಕಾರ ಪುಸ್ತಕವನ್ನು ಮುಟ್ಟುಗೋಲು ಹಾಕಿಕೊಳ್ಳುವ ನಿರ್ಧಾರ ಕೈಗೊಂಡಿದೆ. ಈಗ ಅವರು ಸರ್ಕಾರಕ್ಕೆ ಸವಾಲು ಹಾಕುವುದಾದರೆ, ಈ ದೇಶದಲ್ಲಿ ಕಾನೂನು ಇದೆ ಎಂಬುದನ್ನು ನೆನಪಿಸಬೇಕಾಗುತ್ತದೆ. ಅವರು ಹಲವು ವರ್ಷಗಳಿಂದ ಅಮೆರಿಕದಲ್ಲಿ ನೆಲೆಸಿರುವುದರಿಂದ ಇಲ್ಲಿನ ಕಾನೂನುಗಳನ್ನು ಮರೆತಿರಬಹುದು. ಈ ದೇಶದ ಕಾನೂನುಗಳನ್ನು ಮತ್ತೊಮ್ಮೆ ಅವರಿಗೆ ನೆನಪಿಸಬೇಕಿದೆ ಎಂದು ಹೇಳಿದರು.

ಬಂಧನದ ಸಂದರ್ಭದಲ್ಲಿ ಅಮೆರಿಕ ರಾಯಭಾರ ಕಚೇರಿಯ ನೆರವು ಕೋರಿರುವ ಕುರಿತು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿ, ಅವರು ಅಮೆರಿಕದ ಗ್ರೀನ್ ಕಾರ್ಡ್ ಅಥವಾ ಪೌರತ್ವ ಹೊಂದಿದ್ದರೆ, ಅಲ್ಲಿನ ರಾಯಭಾರ ಕಚೇರಿಗೆ ತಮ್ಮ ಸಮಸ್ಯೆಯನ್ನು ತಿಳಿಸುವುದು ಸಹಜ. ತಮಗೆ ಇಲ್ಲಿ ತೊಂದರೆಯಾಗುತ್ತಿದೆ, ರಕ್ಷಣೆ ನೀಡುವಂತೆ ಅವರು ಮನವಿ ಮಾಡಿರಬಹುದು ಎಂದು ತಿಳಿಸಿದರು.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments