ಪರಂಪರಾಗತವಾಗಿ ತನ್ನದೇ ಆದ ವೈಶಿಷ್ಟ್ಯದಿಂದ ಕಂಗೊಳಿಸುತ್ತಿರುವ ಮೈಸೂರು ದಸರಾ ಉತ್ಸವದಲ್ಲಿ ಕಂಬಳವನ್ನು ಸೇರಿಸುವ ಅಗತ್ಯವಿಲ್ಲ ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿ ಹೇಳಿದ್ದಾರೆ.
ಎಕ್ಸ್ ತಾಣದಲ್ಲಿ ಈ ಬಗ್ಗೆ ಬರೆದುಕೊಂಡಿರುವ ಅವರು, “ಈವರೆಗೂ ನಡೆದುಕೊಂಡು ಬಂದಿರುವ ದಸರಾಕ್ಕೆ ಧಕ್ಕೆ ತರುವ ಪ್ರಯತ್ನ ಖಂಡಿತ ಬೇಡ. ಕಂಬಳವು ಕರಾವಳಿ ಭಾಗದ ಸಾಂಸ್ಕೃತಿಕ ಶ್ರೇಷ್ಠತೆ ಮತ್ತು ನಂಬಿಕೆಯ ಪ್ರತೀಕ” ಎಂದಿದ್ದಾರೆ.
“ಭೌಗೋಳಿಕವಾಗಿ ಆ ಭಾಗಕ್ಕೆ ಮಾತ್ರ ಸರಿಹೊಂದುವ ಆಚರಣೆಯೂ ಹೌದು. ಅದನ್ನು ಮೈಸೂರಿಗೆ ತಂದು ದೈವಿಕ ಹಿನ್ನೆಲೆಯ ಆ ಪರಂಪರೆ, ಪಾವಿತ್ರ್ಯತೆಗೆ ಧಕ್ಕೆ ತರುವುದನ್ನು ಒಪ್ಪಲಾಗದು. ಕರಾವಳಿ ಪ್ರದೇಶ ಹಸಿರು ಮತ್ತು ನೀರಿನ ಸಂಗಮ. ಇಂಥ ಪ್ರಾಕೃತಿಕ ಹಿನ್ನೆಲೆಯಲ್ಲಿ ಕಂಬಳವನ್ನು ಕಣ್ತುಂಬಿಕೊಳ್ಳುವುದೇ ಧನ್ಯತೆಯ ಅನುಭವ ಎನ್ನುವುದು ನನ್ನ ಭಾವನೆ. ಹೀಗಾಗಿ ಮೈಸೂರು ಮತ್ತು ಕರಾವಳಿ ಜನರ ಭಾವನೆಗಳಿಗೆ ನೋವುಂಟು ಮಾಡುವುದು ಬೇಕಿಲ್ಲ” ಎಂದು ತಿಳಿಸಿದ್ದಾರೆ.


