ಅಲ್ಪಸಂಖ್ಯಾತರನ್ನು ಓಲೈಸಲು ಕಾಂಗ್ರೆಸ್ ಯಾವ ಮಟ್ಟಕ್ಕೂ ಇಳಿಯುತ್ತಿದೆ. ಆದರೆ ಬಿಜೆಪಿ ‘ಸಬ್ ಕಾ ಸಾಥ್, ಸಬ್ ಕಾ ವಿಕಾಸ್’ ಎಂಬ ಧ್ಯೇಯದಲ್ಲಿ ನಂಬಿಕೆ ಇಟ್ಟು, ಎಲ್ಲ ಸಮುದಾಯಗಳ ಅಭಿವೃದ್ಧಿಗೆ ಶ್ರಮಿಸುತ್ತಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಆರೋಪಿಸಿದರು.
ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಆಯೋಜಿಸಿದ್ದ ಶ್ರೀ ಕೃಷ್ಣ ಜನ್ಮಾಷ್ಟಮಿ ಮಹೋತ್ಸವದಲ್ಲಿ ಮಾತನಾಡಿದ ಅವರು, ಸ್ವಾತಂತ್ರ್ಯ ಸಂಗ್ರಾಮದ ಸಂದರ್ಭದಲ್ಲಿ ದೇಶದ ಜನರಲ್ಲಿ ದೇಶಾಭಿಮಾನದ ಕಿಚ್ಚು ಹಚ್ಚಿದ ‘ವಂದೇ ಮಾತರಂ’ ಗೀತೆಗೆ ಕಾಂಗ್ರೆಸ್ ಗೌರವ ನೀಡುತ್ತಿಲ್ಲ ಎಂದು ಟೀಕಿಸಿದರು.
ವಂದೇ ಮಾತರಂ ವಿಚಾರದಲ್ಲಿ ಕಾಂಗ್ರೆಸ್ ನಡೆ ಖಂಡನೀಯ. ವಿಧಾನಸೌಧದಲ್ಲಿ ಪಾಕಿಸ್ತಾನ ಪರ ಘೋಷಣೆ ಕೂಗಿದವರನ್ನು ಬೆಂಬಲಿಸುವ ಕಾಂಗ್ರೆಸ್, ಮತ್ತೊಂದೆಡೆ ದೇಶಭಕ್ತಿಯ ಬಗ್ಗೆ ಮಾತನಾಡುತ್ತಿದೆ ಎಂದು ವಿಜಯೇಂದ್ರ ಆರೋಪಿಸಿದರು.
ಮೀಸಲಾತಿ ಸೇರಿದಂತೆ ಹಲವು ವಿಚಾರಗಳಲ್ಲಿ ಕಾಂಗ್ರೆಸ್ ಸರ್ಕಾರ ಹೇಳುವುದೊಂದು, ಮಾಡುವುದೊಂದು ಆಗಿದೆ. ಬಿಜೆಪಿ ಎಲ್ಲ ಸಮುದಾಯಗಳನ್ನು ಒಟ್ಟಾಗಿ ಕೊಂಡೊಯ್ದು ದೇಶವನ್ನು ಮುನ್ನಡೆಸುವ ಪ್ರಯತ್ನ ಮಾಡುತ್ತಿದ್ದರೆ, ಕಾಂಗ್ರೆಸ್ ಒಂದು ಸಮುದಾಯವನ್ನು ಓಲೈಸಿ ಮತ ಪಡೆಯುವ ರಾಜಕಾರಣ ಮಾಡುತ್ತಿದೆ ಎಂದು ದೂರಿದರು.
‘ಭಾರತ್ ಜೋಡೊ’ ಹೆಸರಿನಲ್ಲಿ ಜನರಿಗೆ ಕಿವಿ ಮೇಲೆ ಹೂ
ಗ್ಯಾರಂಟಿ ಯೋಜನೆಗಳಿಲ್ಲದೆ ಅಧಿಕಾರದಲ್ಲಿ ಮುಂದುವರಿಯಲು ಸಾಧ್ಯವಿಲ್ಲ ಎಂಬುದು ಕಾಂಗ್ರೆಸ್ಗೆ ಮನವರಿಕೆಯಾಗಿದೆ. ಹೀಗಾಗಿ ಇದೀಗ ‘ಭಾರತ್ ಜೋಡೊ’ ಸಂಘಗಳ ಮೂಲಕ ರಾಜ್ಯದ ಜನರ ಕಿವಿಗೆ ಹೂ ಇಟ್ಟು ಮತ್ತೆ ಅಧಿಕಾರಕ್ಕೆ ಬರಲು ಪ್ರಯತ್ನಿಸುತ್ತಿದೆ ಎಂದು ವಿಜಯೇಂದ್ರ ವ್ಯಂಗ್ಯವಾಡಿದರು.
ಪ್ರಧಾನಿ ನರೇಂದ್ರ ಮೋದಿ ಅವರು 2047ರ ವೇಳೆಗೆ ಭಾರತವನ್ನು ಅಭಿವೃದ್ಧಿ ಹೊಂದಿದ ರಾಷ್ಟ್ರವನ್ನಾಗಿ ರೂಪಿಸುವ ಸಂಕಲ್ಪ ಹೊಂದಿದ್ದಾರೆ. ದೇಶದ ಎಲ್ಲ ಕ್ಷೇತ್ರಗಳಲ್ಲೂ ಅಭಿವೃದ್ಧಿ ಸಾಧಿಸುವುದು ಹಾಗೂ ಸಮಾಜದ ಕಟ್ಟಕಡೆಯ ವ್ಯಕ್ತಿಗೂ ನ್ಯಾಯ ದೊರಕಿಸುವುದು ಅವರ ಆಶಯವಾಗಿದೆ. ‘ನಾನು ಪ್ರಧಾನಿ ಅಲ್ಲ, ಪ್ರಧಾನ ಸೇವಕ’ ಎಂಬ ಭಾವನೆಯೊಂದಿಗೆ ದೇಶವನ್ನು ಮುನ್ನಡೆಸುತ್ತಿದ್ದಾರೆ ಎಂದು ಹೇಳಿದರು.
ಹಿಂದುಳಿದವರ ಕಲ್ಯಾಣಕ್ಕೆ ಬಿಜೆಪಿ ಆದ್ಯತೆ
ಬಿಜೆಪಿ ಸರ್ಕಾರದ ಅವಧಿಯಲ್ಲಿ ಬಿ.ಎಸ್. ಯಡಿಯೂರಪ್ಪ ಅವರು ಮುಖ್ಯಮಂತ್ರಿಯಾಗಿದ್ದಾಗ ಹಿಂದುಳಿದ ಸಮುದಾಯಗಳಿಗೆ ನ್ಯಾಯ ಒದಗಿಸುವ ನಿಟ್ಟಿನಲ್ಲಿ ಹಲವು ಕ್ರಮ ಕೈಗೊಂಡಿದ್ದರು. ಕೇಂದ್ರದ ನರೇಂದ್ರ ಮೋದಿ ಅವರ ಸಂಪುಟದಲ್ಲಿಯೂ ಹಿಂದುಳಿದ ಸಮುದಾಯಗಳಿಗೆ ಹೆಚ್ಚಿನ ಪ್ರಾತಿನಿಧ್ಯ ದೊರೆತಿದೆ. ವಿಶ್ವಕರ್ಮ ಸೇರಿದಂತೆ ಹಿಂದುಳಿದ ವರ್ಗಗಳ ಕಲ್ಯಾಣಕ್ಕಾಗಿ ಹಲವು ಯೋಜನೆಗಳನ್ನು ಜಾರಿಗೊಳಿಸಲಾಗಿದೆ ಎಂದು ವಿಜಯೇಂದ್ರ ಹೇಳಿದರು.
ಗೊಲ್ಲ ಸಮುದಾಯಕ್ಕೆ ರಾಜಕೀಯ ಪ್ರಾತಿನಿಧ್ಯ: ವಿಜಯೇಂದ್ರ
ಗೊಲ್ಲ ಸಮುದಾಯ ಸ್ವಾಭಿಮಾನಕ್ಕೆ ಮತ್ತೊಂದು ಹೆಸರಾಗಿದೆ. ಆರ್ಥಿಕವಾಗಿ ಹಿಂದುಳಿದಿರಬಹುದಾದರೂ ಸ್ವಾಭಿಮಾನದಿಂದ ಬದುಕುತ್ತಿರುವ ಈ ಸಮುದಾಯ ಸಾಮಾಜಿಕ, ಆರ್ಥಿಕ ಹಾಗೂ ಶೈಕ್ಷಣಿಕವಾಗಿ ಮುಂದೆ ಬರಬೇಕು. ರಾಜಕೀಯ ಪ್ರಾತಿನಿಧ್ಯವೂ ದೊರೆಯಬೇಕು ಎಂದು ಹೇಳಿದರು.
ಎಸ್ಸಿ, ಎಸ್ಟಿ ಸಮುದಾಯಗಳಿಗೆ ಮೀಸಲಾತಿ ಇರುವಂತೆ ಗೊಲ್ಲ ಸಮುದಾಯಕ್ಕೂ ಸೂಕ್ತ ಅವಕಾಶ ಕಲ್ಪಿಸುವ ನಿಟ್ಟಿನಲ್ಲಿ ಬಿಜೆಪಿ ಮುಂದಿನ ದಿನಗಳಲ್ಲಿ ಪ್ರಯತ್ನಿಸಲಿದೆ ಎಂದು ಭರವಸೆ ನೀಡಿದರು.
ಕಾಂಗ್ರೆಸ್ ಸರ್ಕಾರ ಎಲ್ಲ ಸಮುದಾಯಗಳಿಗೂ ಅನ್ಯಾಯ ಮಾಡುತ್ತಿದೆ. ಮೀಸಲಾತಿ ವಿಚಾರದಲ್ಲಿ ಒಂದು ಕಡೆ ಚಿವುಟುವ, ಮತ್ತೊಂದು ಕಡೆ ಕಣ್ಣೀರು ಒರೆಸುವ ನಾಟಕವನ್ನು ಕಾಂಗ್ರೆಸ್ ಮಾಡುತ್ತಿದೆ ಎಂದು ಆರೋಪಿಸಿದರು.
‘2028ರ ಬಳಿಕ ಬಿಜೆಪಿ ಅಧಿಕಾರಕ್ಕೆ ಬರುವುದನ್ನು ತಡೆಯಲು ಸಾಧ್ಯವಿಲ್ಲ’
2028ರ ವಿಧಾನಸಭಾ ಚುನಾವಣೆಯ ನಂತರ ಮತ್ತೆ ತಾವೇ ಮುಖ್ಯಮಂತ್ರಿಯಾಗಬೇಕು ಎಂಬ ಕನಸನ್ನು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಕಾಣುತ್ತಿದ್ದಾರೆ. ಆದರೆ ಆ ಕನಸು ನನಸಾಗುವುದಿಲ್ಲ. ಮುಂದಿನ ಬಾರಿ ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ ಬರುವುದನ್ನು ಯಾರಿಂದಲೂ ತಡೆಯಲು ಸಾಧ್ಯವಿಲ್ಲ ಎಂದು ವಿಜಯೇಂದ್ರ ವಿಶ್ವಾಸ ವ್ಯಕ್ತಪಡಿಸಿದರು.
ಬಿಜೆಪಿಯ ಪಾದಯಾತ್ರೆ ಅಭೂತಪೂರ್ವ ಯಶಸ್ಸು ಕಂಡಿದೆ. ಪಂಚ ಗ್ಯಾರಂಟಿಗಳ ಹೆಸರಿನಲ್ಲಿ ಅಧಿಕಾರಕ್ಕೆ ಬಂದ ಕಾಂಗ್ರೆಸ್ ರಾಜ್ಯದ ಜನರಿಗೆ ದ್ರೋಹ ಮಾಡಿದೆ ಎಂದು ಅವರು ಟೀಕಿಸಿದರು.
ಅಧಿಕಾರವನ್ನು ಬಳಸಿಕೊಂಡು ಟನಲ್ ರಸ್ತೆ, ಬಿಡದಿ ಟೌನ್ಶಿಪ್ ಹಾಗೂ ಕನಕಪುರ ವಿಮಾನ ನಿಲ್ದಾಣದಂತಹ ಯೋಜನೆಗಳನ್ನು ರೂಪಿಸುವ ಪ್ರಯತ್ನ ನಡೆಯುತ್ತಿದೆ. ಆದರೆ ಬಡವರು ಮತ್ತು ರೈತರ ಬಗ್ಗೆ ಸರ್ಕಾರಕ್ಕೆ ಕಾಳಜಿ ಇಲ್ಲ ಎಂದು ಆರೋಪಿಸಿದರು.
ಯುವಕರಿಗಾಗಿ ಸಂಘಗಳನ್ನು ರಚಿಸುವ ಬಗ್ಗೆ ಮಾತನಾಡುವ ಸರ್ಕಾರ, ರಾಜ್ಯದ ತಾಲೂಕುಗಳ ಮೂಲೆಮೂಲೆಗಳಲ್ಲಿ ಹೆಚ್ಚುತ್ತಿರುವ ಇಸ್ಪೀಟ್ ದಂಧೆ ಹಾಗೂ ಡ್ರಗ್ಸ್ ಮಾಫಿಯಾವನ್ನು ನಿಯಂತ್ರಿಸುವಲ್ಲಿ ವಿಫಲವಾಗಿದೆ. ಯುವ ಸಂಘಗಳಿಗೆ ಹಣ ನೀಡುವುದಾಗಿ ಹೇಳುವ ಸರ್ಕಾರ, ಎರಡೂವರೆ ಲಕ್ಷ ಹುದ್ದೆಗಳಿಗೆ ನೇಮಕಾತಿ ಮಾಡುತ್ತಿಲ್ಲ ಎಂದು ವಿಜಯೇಂದ್ರ ದೂರಿದರು.
ಕಾರ್ಯಕ್ರಮದಲ್ಲಿ ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಛಲವಾದಿ ನಾರಾಯಣಸ್ವಾಮಿ, ಶಾಸಕ ಹಾಗೂ ಮಾಜಿ ಉಪಮುಖ್ಯಮಂತ್ರಿ ಡಾ. ಅಶ್ವಥ್ ನಾರಾಯಣ್, ವಿಧಾನ ಪರಿಷತ್ ಮುಖ್ಯ ಸಚೇತಕ ರವಿಕುಮಾರ್, ವಿಧಾನ ಪರಿಷತ್ ಸದಸ್ಯ ಹಾಗೂ ಒಬಿಸಿ ಮೋರ್ಚಾ ಅಧ್ಯಕ್ಷ ರಘು ಕೌಟಿಲ್ಯ, ಯುವ ಮೋರ್ಚಾ ರಾಜ್ಯಾಧ್ಯಕ್ಷ ಹಾಗೂ ಶಾಸಕ ಧೀರಜ್ ಮುನಿರಾಜು, ಮಹಿಳಾ ಮೋರ್ಚಾ ಮಾಜಿ ರಾಷ್ಟ್ರೀಯ ಉಪಾಧ್ಯಕ್ಷೆ ಪೂರ್ಣಿಮಾ ಪ್ರಕಾಶ್, ಪಕ್ಷದ ಮುಖಂಡ ಎಂ.ಡಿ. ಲಕ್ಷ್ಮೀನಾರಾಯಣ, ರಾಜ್ಯ ಮಾಧ್ಯಮ ಸಂಚಾಲಕ ಕರುಣಾಕರ ಖಾಸಲೆ ಸೇರಿದಂತೆ ಗೊಲ್ಲ ಸಮುದಾಯದ ಮುಖಂಡರು ಉಪಸ್ಥಿತರಿದ್ದರು.


