ಕಾನೂನನ್ನು ಯಾರೇ ಕೈಗೆ ತೆಗೆದುಕೊಂಡರೆ ಶಿಕ್ಷೆ ಕೊಡಿಸುವ ಪ್ರಯತ್ನ ಮಾಡುತ್ತೇವೆ. ಯಾರನ್ನೂ ರಕ್ಷಿಸುವ ಪ್ರಯತ್ನ ಮಾಡುವುದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.
ಹಾವೇರಿಯಲ್ಲಿ ಸೋಮವಾರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, “ಈಗ ತಾನೇ ಅರ್ಜಿ ಕೊಟ್ಟಿದ್ದಾರೆ. ಸಾಮೂಹಿಕ ಅತ್ಯಾಚಾರ ಪ್ರಕರಣದ ಅರ್ಜಿ ಪರಿಗಣಿಸಲಾಗುವುದು” ಎಂದರು.
“ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಆರೋಪಿಗಳನ್ನು ಬಂಧಿಸಿದ್ದು ತನಿಖೆ ನಡೆಯುತ್ತಿದೆ. ನಮ್ಮ ಸರ್ಕಾರದಲ್ಲಿ ಯಾರನ್ನೂ ಕಾನೂನು ಕೈಗೆತೆಗೆದುಕೊಳ್ಳಲು ಬಿಡುವುದಿಲ್ಲ. ಕಾನೂನಿನ ಪ್ರಕಾರ ಕ್ರಮ ಜರುಗಿಸುವ ಕೆಲಸ ಮಾಡುತ್ತೇವೆ” ಎಂದು ಮುಖ್ಯಮಂತ್ರಿಗಳು ತಿಳಿಸಿದರು.
“ಸಂತ್ರಸ್ತೆ ಯನ್ನು ಭೇಟಿ ಮಾಡಿ ಬರುವುದು ಸಾಂತ್ವನ ಹೇಳುವುದು ಒಂದು ಭಾಗವಾದರೆ ಕಾನೂನಿನ ರೀತಿ ಕ್ರಮ ತೆಗೆದುಕೊಳ್ಳುವುದು ಮತ್ತೊಂದು ಭಾಗ. ಬೆಳಗಾವಿ ಜಿಲ್ಲೆಯ ಪ್ರಕರಣದಲ್ಲಿ ಮಾತ್ರ ತಕ್ಷಣ ಭೇಟಿ ನೀಡಿ ಪರಿಹಾರ ನೀಡಿದಿರಿ ಎಂಬ ಪ್ರಶ್ನೆಗೆ ಅಲ್ಲಿಗೆ ಗೃಹ ಸಚಿವರು ಭೇಟಿ ನೀಡಿದ್ದರು. ಭೇಟಿ ನೀಡುವಂತೆ ನಾನೇ ಸೂಚನೆ ನೀಡಿದ್ದೆ. ಇಲ್ಲಿ ಗೃಹ ಸಚಿವರು ಇರಲಿಲ್ಲ. ಕೇಂದ್ರದ ಮಾಜಿ ಸಚಿವ ಶಿವಣ್ಣ ಭೇಟಿ ನೀಡಿದ್ದಾರೆ” ಎಂದರು.
ಫೆಬ್ರವರಿ ತಿಂಗಳಲ್ಲಿಯೇ ಬಜೆಟ್ ಮಂಡನೆ
“ಮಾರ್ಚ್ ಮೊದಲ ವಾರದೊಳಗೆ ಚುನಾವಣಾ ನೀತಿ ಸಂಹಿತೆ ಘೋಷಣೆಯಾಗುವುದರಿಂದ ಫೆಬ್ರವರಿ ತಿಂಗಳಲ್ಲಿಯೇ ಬಜೆಟ್ ಮಂಡಿಸಲಾಗುವುದು” ಎಂದು ಹೇಳಿದರು.
ಕೇಂದ್ರ ಸರ್ಕಾರದಿಂದ ಪರಿಹಾರ ಬಂದ ನಂತರ ರೈತರಿಗೆ ಪುನಃ ಪರಿಹಾರ
“ರೈತರರಿಗೆ ಪರಿಹಾರ ನೀಡಿಲ್ಲವೆಂದು ಪ್ರತಿಭಟನೆ ಮಾಡುತ್ತಿರುವ ಬಗ್ಗೆ ಪ್ರತಿಕ್ರಿಯೆ ನೀಡಿ ರೈತರಿಗೆ 2000 ರೂ.ಗಳ ತಾತ್ಕಾಲಿಕ ಪರಿಹಾರವನ್ನು ನೀಡುತ್ತಿದ್ದು ಕೇಂದ್ರ ಸರ್ಕಾರದಿಂದ ಪರಿಹಾರ ಬಂದ ನಂತರ ಪುನಃ ಎನ್.ಡಿ.ಆರ್.ಎಫ್ ನಿಯಮಾವಳಿ ಗಳ ಪ್ರಕಾರ ಪರಿಹಾರ ನೀಡಲಾಗುವುದು” ಎಂದರು.
ಮನುಷ್ಯತ್ವ ಇರಬೇಕು
ಅನಂತಕುಮಾರ್ ಹೆಗಡೆಯವರು ಏಕವಚನದಲ್ಲಿ ಮಾತನಾಡುವುದನ್ನು ಕಲಿಸಿದ್ದೇ ಸಿದ್ದರಾಮಯ್ಯ ಅವರು ಎಂದು ಸಮರ್ಥಿಸಿಕೊಂಡಿದ್ದಾರೆ ಎಂಬ ಬಗ್ಗೆ ಪ್ರತಿಕ್ರಿಯೆ ನೀಡಿ, “ರಾಜಕೀಯವಾಗಿ ಆರೋಪ ಮಾಡುತ್ತಾರೆ. ಅನಂತ ಕುಮಾರ್ ಹೆಗಡೆ ಅವರು ಇವತ್ತಿನವರೆಗೆ ನಾಪತ್ತೆಯಾಗಿದ್ದರು. ಚುನಾವಣೆ ಹತ್ತಿರ ಬಂದಂತೆ ಕಾಣಿಸಿಕೊಂಡು ಹೇಳಿಕೆ ನೀಡಿದ್ದಾರೆ. ಸಂಸದರಾಗಿ ಮಾಜಿ ಮಂತ್ರಿಯಾಗಿ ಕ್ಷೇತ್ರಕ್ಕೆ ಏನಾದರೂ ಮಾಡಿದ್ದಾರೆಯೇ? ಇಂದಿನವರೆಗೆ ಬಡವರ ಸಮಸ್ಯೆ ಕೇಳಿದ್ದಾರೆಯೇ? ಸಂಸ್ಕೃತಿ ಎಂದರೆ ಮನುಷ್ಯತ್ವ. ಮೊದಲು ಮನುಷ್ಯ ತ್ವ ಇರಬೇಕು” ಎಂದು ಹೇಳಿದರು.