ಕುಖ್ಯಾತ ರೌಡಿ ಶ್ರೀನಿವಾಸ್ ಅಲಿಯಾಸ್ ಮಿಟ್ಟೆಗೆ ದೊಡ್ಡಬಳ್ಳಾಪುರ ಪೊಲೀಸರು ಗುಂಡು ಹಾರಿಸಿ ಬಂಧಿಸಿದ್ದಾರೆ.
ಹೇಮಂತ್ ಕುಮಾರ್ ಗೌಡನನ್ನು ಕೊಲೆಗೈದು ಪರಾರಿಯಾಗಿದ್ದ ಕೊಲೆಗಾರ ರೌಡಿ ಶೀಟರ್ ಶ್ರೀನಿವಾಸ್ ಅಲಿಯಾಸ್ ಮಿಟ್ಟೆ ಕಾಲಿಗೆ ಗುಂಡು ಹಾರಿಸಿ ಬಂಧಿಸಲಾಗಿದೆ.
ಯಲಹಂಕ ತಾಲೂಕಿನ ಶ್ರೀರಾಮನಹಳ್ಳಿ ಬಳಿ ರೌಡಿ ಮಿಟ್ಟೆ ಬಂಧನಕ್ಕೆ ತೆರಳಿದ ವೇಳೆ ಪೊಲೀಸ್ ಕಾನ್ಸ್ಟೇಬಲ್ ಚಂದ್ರು ಮೇಲೆ ಈತ ಹಲ್ಲೆ ನಡೆಸಿದ್ದಾನೆ. ಪೊಲೀಸರ ಮೇಲೆ ಹಲ್ಲೆ ಹಿನ್ನೆಲೆಯಲ್ಲಿ ಆತ್ಮರಕ್ಷಣೆಗಾಗಿ ಇನ್ಸ್ಪೆಕ್ಟರ್ ಸಾಧಿಕ್ ಪಾಷ ಗುಂಡು ಹಾರಿಸು ಬಂಧಿಸಿದ್ದಾರೆ.
ಹೇಮಂತ್ ಕುಮಾರ್ ಕೊಲೆ ಪ್ರಕರಣದಲ್ಲಿ ಮಿಟ್ಟೆ 2ನೇ ಆರೋಪಿಯಾಗಿದ್ದಾನೆ. ಮೇ 11ರಂದು ದೊಡ್ಡಬಳ್ಳಾಪುರ ಹೊರವಲಯ ನವೋದಯ ಶಾಲೆಯ ಮುಂಭಾಗ ಹೇಮಂತ್ ಕುಮಾರ್ ಗೌಡ (27) ಎಂಬವರನ್ನು ಬರ್ಬರವಾಗಿ ಹತ್ಯೆ ಮಾಡಲಾಗಿತ್ತು.
ಹೇಮಂತ್ ಅವರನ್ನು ಅಟ್ಟಾಡಿಸಿ ಕೊಲೆ ಮಾಡಿ ಆರೋಪಿಗಳು ಕಾರಿನಲ್ಲಿ ಶವದ ಜೊತೆ ರೌಂಡ್ಸ್ ಹಾಕಿದ್ದರು. ಪ್ರಕರಣ ದಾಖಲಿಸಿಕೊಂಡ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಅಧಿಕಾರಿಗಳು ಆರೋಪಿಗಳ ಪತ್ತೆಗೆ ವಿಶೇಷ ತಂಡ ರಚಿಸಿ ಬಂಧನಕ್ಕಾಗಿ ಬಲೆ ಬೀಸಿದ್ದರು.
ಪ್ರಕರಣದ ಪ್ರಮುಖ ಆರೋಪಿ ನರಸಿಂಹಮೂರ್ತಿ ಅಲಿಯಾಸ್ ಮಿಟ್ಟೆ ಎಂಬಾತನನ್ನು ಈಗಾಗಲೇ ದಸ್ತಗಿರಿ ಮಾಡಲಾಗಿದೆ. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಲ್ಲಿಕಾರ್ಜುನ ಬಾಲದಂಡಿ, ಡಿವೈಎಸ್ಪಿ ರವಿಕುಮಾರ್, ಗ್ರಾಮಾಂತರ ಠಾಣೆ ಇನ್ಸ್ಪೆಕ್ಟರ್ ಸಾದಿಕ್ ಪಾಷ ನೇತೃತ್ವದ ತಂಡದಿಂದ ಕಾರ್ಯಾಚರಣೆ ನಡೆಸಲಾಗಿತ್ತು.