Homeಕರ್ನಾಟಕರಾಜ್ಯ ಸರ್ಕಾರದ ಐದನೇ ಗ್ಯಾರಂಟಿ 'ಯುವನಿಧಿ' ಯೋಜನೆಗೆ ಮುಖ್ಯಮಂತ್ರಿ ಅಧಿಕೃತ ಚಾಲನೆ

ರಾಜ್ಯ ಸರ್ಕಾರದ ಐದನೇ ಗ್ಯಾರಂಟಿ ‘ಯುವನಿಧಿ’ ಯೋಜನೆಗೆ ಮುಖ್ಯಮಂತ್ರಿ ಅಧಿಕೃತ ಚಾಲನೆ

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶಿವಮೊಗ್ಗದಲ್ಲಿ ಲಕ್ಷಾಂತರ ಯುವಸಮೂಹದ ಸಮ್ಮುಖದಲ್ಲಿ ರಾಜ್ಯ ಸರ್ಕಾರದ ಐತಿಹಾಸಿಕ ಗ್ಯಾರಂಟಿ “ಯುವನಿಧಿ” ಯೋಜನೆಯನ್ನು ಉದ್ಘಾಟಿಸಿದರು.

“ಯಾವ ಧರ್ಮದಲ್ಲಿ ಹಸಿದವರಿಗೆ ಅನ್ನ ಕೊಡುವುದಿಲ್ಲವೋ ಅಂಥ ಧರ್ಮದಲ್ಲಿ ನನಗೆ ನಂಬಿಕೆ ಇಲ್ಲ ಎಂದು ವಿವೇಕಾನಂದರು ಘೋಷಿಸಿದ್ದರು. ಇವರ ಜನ್ಮ ದಿನದಂದೇ ನನ್ನ ಯುವಕ ಯುವತಿಯರು ಭ್ರಮ‌ನಿರಸನರಾಗದಂತೆ ಅವರ ಭವಿಷ್ಯಕ್ಕೆ ಶಕ್ತಿ ತುಂಬುವ ಸಲುವಾಗಿ ಯುವನಿಧಿ ಜಾರಿ ಮಾಡುತ್ತಿದ್ದೇವೆ” ಎಂದು ಉದ್ಘಾಟನಾ ಭಾಷಣಲ್ಲಿ ಸಿದ್ದರಾಮಯ್ಯ ಹೇಳಿದರು.

ಶಿವಮೊಗ್ಗದಲ್ಲಿ ಲಕ್ಷಾಂತರ ಯುವಸಮೂಹದ ಸಮ್ಮುಖದಲ್ಲಿ ರಾಜ್ಯ ಸರ್ಕಾರದ ಐತಿಹಾಸಿಕ ಗ್ಯಾರಂಟಿ “ಯುವನಿಧಿ” ಯೋಜನೆಯನ್ನು ಉದ್ಘಾಟಿಸಿ ಮಾತನಾಡಿದ ಅವರು, “ನಾನು ಮತ್ತು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹಾಗೂ ಸುರ್ಜೇವಾಲ ಅವರು ಚುನಾವಣಾ ಪೂರ್ಣ ಪ್ರಣಾಳಿಕೆಯಲ್ಲಿ ಘೋಷಿಸಿದಂತೆ ಐದೂ ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತಂದಿದ್ದೇವೆ” ಎಂದರು.

“ನಿರುದ್ಯೋಗ ಸಮಸ್ಯೆ, ರೈತರ ಸಮಸ್ಯೆ ಹೆಚ್ಚಾಗಿ, ಆಹಾರ ಪದಾರ್ಥಗಳ ಬೆಲೆ ಗಗನಕ್ಕೆ ಏರಿರುವ ಸಂದರ್ಭದಲ್ಲಿ ಸಮಾಜದ ಎಲ್ಲಾ ವರ್ಗಗಳ ಸಮಸ್ಯೆಗೆ ಪರಿಹಾರವಾಗಿ ನಾವು ಗ್ಯಾರಂಟಿ ಯೋಜನೆಗಳನ್ನು ರೂಪಿಸಿದೆವು. ಪ್ರಣಾಳಿಕೆಯಲ್ಲಿ ಘೋಷಿಸಿದೆವು. ಘೋಷಿಸಿದಂತೆ ಜಾರಿ ಮಾಡಿದ್ದೇವೆ. ಮೊದಲ ಗ್ಯಾರಂಟಿ ಯೋಜನೆಯಿಂದಾಗಿ 130 ಕೋಟಿ 28 ಲಕ್ಷ ಮಹಿಳೆಯರು, ಯುವತಿಯರು ಉಚಿತವಾಗಿ ಪ್ರಯಾಣ ಮಾಡಿದ್ದಾರೆ. 1 ಕೋಟಿ 65 ಲಕ್ಷ ಕುಟುಂಬಗಳಿಗೆ ಉಚಿತವಾಗಿ 200 ಯೂನಿಟ್ ವರೆಗೂ ಉಚಿತ ವಿದ್ಯುತ್ ನೀಡುತ್ತಿದ್ದೇವೆ. ಈ ಕೋಟಿ ಕುಟುಂಬಗಳು ನಯಾಪೈಸೆ ವಿದ್ಯುತ್ ಬಿಲ್ ಕಟ್ಟುವ ಹಾಗಿಲ್ಲ. ಇದೇ ರೀತಿ 5 ಕೆಜಿ ಅಕ್ಕಿ, 5 ಕೆಜಿ ಅಕ್ಕಿಯ ಹಣವನ್ನು ಪ್ರತೀ ಕುಟುಂಬಗಳಿಗೆ ಕೊಡುತ್ತಿದ್ದೇವೆ. 1 ಕೋಟಿ 17 ಲಕ್ಷ ಮಹಿಳೆಯರಿಗೆ, ಯುವತಿಯರಿಗೆ ಪ್ರತೀ ತಿಂಗಳು 2000 ರೂ ತಲುಪಿಸುತ್ತಿದ್ದೇವೆ‌. ಇಂತಹ ಸಾಧನೆ ಹಿಂದೆ ಯಾವ ಕಾಲದಲ್ಲೂ ಆಗಿಲ್ಲ. ಇದನ್ನೆಲ್ಲಾ ಮಾಡಿದ್ದು ನಾವು. ನಮ್ಮದೇ ನುಡಿದಂತೆ ಮಾಡಿ ತೋರಿಸಿದ ಸರ್ಕಾರ” ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.

“ಯುವನಿಧಿ ಜಾರಿ ಮಾಡಿದ್ದೇವೆ. ಯುವಕ ಯುವತಿಯರಿಗೆ ಹಣದ ಜತೆಗೆ ಉದ್ಯೋಗ ಪಡೆದುಕೊಳ್ಳಲು ಅಗತ್ಯವಾದ ಕೌಶಲ್ಯ ತರಬೇತಿಯನ್ನೂ ನೀಡಿ ಅವರಿಗೆ ಉದ್ಯೋಗ ಕೊಡಿಸುವ ದಿಕ್ಕಿನಲ್ಲಿ ನಮ್ಮ ಪ್ರಯತ್ನ ಮುಂದುವರೆಯಲಿದೆ. ಯುವಕ ಯುವತಿಯರು ಭ್ರಮ‌ನಿರಸನರಾಗದಂತೆ ಅವರ ಭವಿಷ್ಯಕ್ಕೆ ಶಕ್ತಿ ತುಂಬುವ ಸಲುವಾಗಿ ಈ ಯುವನಿಧಿ ಯೋಜನೆ ಜಾರಿ ಮಾಡಿದ್ದೇವೆ” ಎಂದರು.

“ವಿವೇಕಾನಂದರ ಜನ್ಮ ದಿನದಂದೇ ಯುವನಿಧಿ ಯೋಜನೆಯನ್ನು ನಾವು ಜಾರಿ ಮಾಡಿದ್ದೇವೆ. ಈಗಾಗಲೇ 70 ಸಾವಿರ ಯುವಕ ಯುವತಿಯರು ಯೋಜನೆಗೆ ನೋಂದಣಿ ಮಾಡಿಕೊಂಡಿದ್ದಾರೆ‌ ಎಂದು ವಿವರಿಸಿದರು. ರಾಜೀವ್ ಗಾಂಧಿ ಅವರು ದೇಶದ ಯುವಕರ ಭವಿಷ್ಯಕ್ಕಾಗಿ ಸದಾ ತುಡಿಯುತ್ತಿದ್ದರು. ಅವರ ಆಶಯಕ್ಕೆ ಪೂರಕವಾಗಿ ಯುವನಿಧಿ ಯೋಜನೆ ಮತ್ತು ನಮ್ಮ ಸರ್ಕಾರ ಕೆಲಸ ಮಾಡಲಿದೆ” ಎಂದು ಹೇಳಿದರು.

ಫ್ರೀಡಂಪಾರ್ಕಿಗೆ ಅಲ್ಲಮ ಪ್ರಭು ಹೆಸರು ಘೋಷಣೆ

ಅನುಭವ ಮಂಟಪದ ಅಧ್ಯಕ್ಷರಾಗಿ ಪ್ರಜಾಪ್ರಭುತ್ವದ ಪರಿಕಲ್ಪನೆಯನ್ನು ಮೊದಲಿಗೆ ಈ ನೆಲದಲ್ಲಿ ಸ್ಥಾಪಿಸಿದ ಅಲ್ಲಮಪ್ರಭುವಿನ ಹೆಸರನ್ನು ಶಿವಮೊಗ್ಗದ ಫ್ರೀಡಂಪಾರ್ಕಿಗೆ ಇಡುತ್ತೇವೆ ಎಂದು ಇದೇ ಸಂದರ್ಭದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಘೋಷಿಸಿದರು. ಶಿವಮೊಗ್ಗ ಜಿಲ್ಲೆಯವರೇ ಆದ ಬಸವಾದಿ ಶರಣ ಅಲ್ಲಮ ಪ್ರಭುವಿಗೆ ನಮ್ಮ ಕಾಂಗ್ರೆಸ್ ಸರ್ಕಾರ ಕೊಡುವ ಗೌರವ ಎಂದು ಬಣ್ಣಿಸಿದರು.

ಮುಖ್ಯಮಂತ್ರಿಗಳು ಅಲ್ಲಮ ಪ್ರಭುವಿನ ಹೆಸರನ್ನು ಘೋಷಿಸುತ್ತಿದ್ದಂತೆ ನೆರೆದಿದ್ದ ಲಕ್ಷಾಂತರ ಮಂದಿ ಕುಳಿತಿದ್ದ ಕುರ್ಚಿಗಳಿಂದ ಮೇಲೆದ್ದು ಚಪ್ಪಾಳೆ ತಟ್ಟಿ ಕುಣಿದು, ಕೂಗಿ ಸಂಭ್ರಮದಿಂದ ಸ್ವಾಗತಿಸಿದರು.

ಡಿಸಿಎಂ ಡಿ.ಕೆ.ಶಿವಕುಮಾರ್, ವೈದ್ಯಕೀಯ ಶಿಕ್ಷಣ ಸಚಿವ ಶರಣ ಪ್ರಕಾಶ್ ಪಾಟೀಲ್, ಇಂಧನ ಸಚಿವ ಕೆ.ಜೆ.ಜಾರ್ಜ್, ಪ್ರಾಥಮಿಕ ಶಿಕ್ಷಣ ಸಚಿವ ಮಧು ಬಂಗಾರಪ್ಪ ಕ್ರೀಡಾ ಸಚಿವ ನಾಗೇಂದ್ರ, ಮೀನುಗಾರಿಕಾ ಸಚಿವ ಮಾಂಕಳ ವೈದ್ಯ, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಗೋವಿಂದರಾಜು, ಸಂಸದ ಬಿ.ವೈ.ರಾಘವೇಂದ್ರ, ಶಾಸಕರಾದ ಭೀಮಣ್ಣ ನಾಯಕ್, ಸಂಗಮೇಶ್, ತಮ್ಮಯ್ಯ, ಬೇಳೂರು ಗೋಪಾಲಕೃಷ್ಣ, ರಾಜೇಗೌಡ, ಶಾರದಾ ಪೂರ್ಯಾನಾಯಕ, ಚನ್ನಬಸಪ್ಪ, ತರೀಕೆರೆ ಶ್ರೀನಿವಾಸ್, ಅರುಣ್ ಕುಮಾರ್ ಸೇರಿ ಹಲವು ಪ್ರಮುಖರು ವೇದಿಕೆಯಲ್ಲಿ ಉಪಸ್ಥಿತರಿದ್ದರು.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments