ಅಂಗಡಿ ಮುಗ್ಗಟ್ಟುಗಳ ಮುಂಭಾಗ ಕನ್ನಡ ನಾಮಫಲಕ ಅಳವಡಿಸುವ ಸಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಗುರುವಾರ ಉನ್ನತ ಮಟ್ಟದ ಸಭೆ ನಡೆಯಿತು.
ಗೃಹ ಕಚೇರಿ ಕೃಷ್ಣಾದಲ್ಲಿ ಸಭೆ ನಡೆದಿದ್ದು, ಸಭೆಯಲ್ಲಿ ಗೃಹ ಸಚಿವ ಡಾ. ಜಿ.ಪರಮೇಶ್ವರ್, ಸರ್ಕಾರದ ಮುಖ್ಯ ಕಾರ್ಯದರ್ಶಿ ರಜನೀಶ್ ಗೋಯಲ್, ಅಪರ ಮುಖ್ಯ ಕಾರ್ಯದರ್ಶಿ ಅತೀಕ್ ಅವರು, ಗೃಹ ಕಾರ್ಯದರ್ಶಿ ಉಮಾಶಂಕರ್, ರಾಜ್ಯ ಪೊಲೀಸ್ ಮಹಾ ನಿರ್ದೇಶಕ ಅಲೋಕ್ ಮೋಹನ್, ಬೆಂಗಳೂರು ನಗರ ಪೊಲೀಸ್ ಆಯುಕ್ತ ದಯಾನಂದ್ ಸೇರಿದಂತೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಬಿಬಿಎಂಪಿ ಅಧಿಕಾರಿಗಳು ಸಭೆಯಲ್ಲಿ ಭಾಗವಹಿಸಿದ್ದರು.
ವಾಣಿಜ್ಯ ಮಳಿಗೆಗಳಲ್ಲಿ ನಾಮಫಲಕಗಳನ್ನು ಅಳವಡಿಸುವ ಬಗ್ಗೆ ಉನ್ನತ ಮಟ್ಟದ ಸಭೆ ನಡೆಸಿದ ನಂತರ ಮಾಧ್ಯಮಗೋಷ್ಠಿ ಕರೆದು ಮಾತನಾಡಿದ ಸಿದ್ದರಾಮಯ್ಯ, “ಕನ್ನಡ ಭಾಷಾ ಸಮಗ್ರ ಅಭಿವೃದ್ಧಿ ಅಧಿನಿಯಮ 2022ರ ಸೆಕ್ಷನ್ 17 (6) ರ ಪ್ರಕಾರ ಸರ್ಕಾರದ ಅಥವಾ ಸ್ಥಳೀಯ ಪ್ರಾಧಿಕಾರದ ಅನುಮೋದನೆಯೊಂದಿಗೆ ನಡೆಸುತ್ತಿರುವ ವಾಣಿಜ್ಯ ಕೈಗಾರಿಕೆ, ವ್ಯಾಪಾರ ಸಂಸ್ಥೆ, ನ್ಯಾಸಗಳು, ಸಮಾಲೋಚನಾ ಕೇಂದ್ರಗಳು, ಆಸ್ಪತ್ರೆಗಳು, ಪ್ರಯೋಗಾಲಯಗಳು, ಮನೋರಂಜನಾ ಕೇಂದ್ರಗಳು ಮತ್ತು ಹೋಟೆಲ್ ಮುಂತಾದವುಗಳ ಹೆಸರನ್ನು ಪ್ರದರ್ಶಿಸುವ ಫಲಕಗಳ ಮೇಲಿನ ಅರ್ಧ ಭಾಗವು ಕನ್ನಡದಲ್ಲಿ ಇರತಕ್ಕದ್ದು ಎಂದು ತಿಳಿಸಲಾಗಿದೆ” ಎಂದರು.
“2018ರಲ್ಲಿ ಹೊರಡಿಸಿದ ಸುತ್ತೋಲೆಯಲ್ಲಿ ನಾಮಫಲಕದಲ್ಲಿ ಶೇ. 60 ಕನ್ನಡ ಭಾಷೆ ಹಾಗೂ ಶೇ. 40 ರಷ್ಟು ಇತರ ಭಾಷೆಯಲ್ಲಿರಬಹುದು ಎಂದು ತಿಳಿಸಲಾಗಿದೆ. ಇದರಂತೆಯೇ ಸುಗ್ರೀವಾಜ್ಞೆ ಹೊರಡಿಸಿ, ಕನ್ನಡ ಭಾಷಾ ಸಮಗ್ರ ಅಭಿವೃದ್ಧಿ ಅಧಿನಿಯಮ 2022ರ ಸೆಕ್ಷನ್ 17 (6)ಕ್ಕೆ ತಿದ್ದುಪಡಿ ತಂದು 2024ರ ಫೆಬ್ರುವರಿ 28 ರೊಳಗೆ ವಾಣಿಜ್ಯ ಮಳಿಗೆಗಳು ಅನುಷ್ಠಾನಗೊಳಿಸಲು ಗಡುವು ನೀಡಲಾಗುವುದು” ಎಂದು ಹೇಳಿದರು.
“ಈ ಕಾಯ್ದೆ ಇಡೀ ರಾಜ್ಯಕ್ಕೆ ಅನ್ವಯಿಸುತ್ತದೆ. ಇದನ್ನು ಸಹ ಅನುಷ್ಠಾನಗೊಳಿಸಲಾಗುವುದು. ಈ ಕಾಯ್ದೆಯ ಅಧಿಸೂಚನೆ ಹೊರಡಿಸಲು ಹಾಗೂ ನಿಯಮಗಳನ್ನು ರೂಪಿಸಲು ಕೂಡಲೇ ಕ್ರಮ ಕೈಗೊಳ್ಳಲಾಗುವುದು” ಎಂದರು.
“ಶಾಂತಿಯುತವಾದ ಪ್ರತಿಭಟನೆ ಮಾಡಲು ಸರ್ಕಾರದ ವಿರೋಧ ಇಲ್ಲ. ನಮಗೆ ಪ್ರಜಾಪ್ರಭುತ್ವದಲ್ಲಿ, ಸಂವಿಧಾನದಲ್ಲಿ ನಂಬಿಕೆ ಇದೆ. ಆದರೆ ಕಾನೂನಿಗೆ ವಿರುದ್ಧವಾಗಿ ಯಾರಾದರೂ ನಡೆದುಕೊಂಡರೆ ಅದನ್ನು ಸರ್ಕಾರ ಸಹಿಸುವುದಿಲ್ಲ ಎಂಬುದನ್ನು ಸ್ಪಷ್ಟವಾಗಿ ಹೇಳ ಬಯಸುತ್ತೇನೆ” ಎಂದು ತಿಳಿಸಿದರು.
“ಎಲ್ಲ ಖಾಸಗಿ ಸಂಸ್ಥೆಯವರು ತಮ್ಮ ನಾಮಫಲಕವನ್ನು ಶೇ. 60:40ರ ಅನುಪಾತದಲ್ಲಿ ನಿಗದಿತ ಗಡುವಿನೊಳಗೇ ಅಳವಡಿಸಬೇಕು. ಸಾರ್ವಜನಿಕರು ಆತಂಕ ಪಡಬೇಕಾಗಿಲ್ಲ” ಎಂದು ಹೇಳಿದರು.