ಬೇಲೆಕೇರಿ ಬಂದರಿನಿಂದ ಅದಿರು ಅಕ್ರಮ ಸಾಗಾಟ ಪ್ರಕರಣಕ್ಕೆ ಸಂಬಂಧಿಸಿದಂತೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು ಕಾರವಾರದ ಕಾಂಗ್ರೆಸ್ ಶಾಸಕ ಸತೀಶ್ ಸೈಲ್‌ಗೆ ಏಳು ವರ್ಷ ಜೈಲು ಶಿಕ್ಷೆ ಮತ್ತು ಭಾರಿ ಮೊತ್ತದ ದಂಡ ವಿಧಿಸಿದೆ.
ಶಾಸಕ ಸತೀಶ್ ಸೈಲ್‌ಗೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಒಟ್ಟು 4 ಪ್ರಕರಣದಲ್ಲಿ ಶಿಕ್ಷೆಯನ್ನು ಪ್ರಕಟಿಸಿದೆ. ಒಂದು ಪ್ರಕರಣದಲ್ಲಿ 7 ವರ್ಷ, ಮತ್ತೊಂದು ಪ್ರಕರಣದಲ್ಲಿ 5 ಹಾಗೂ ಮಗದೊಂದು ಪ್ರಕರಣದಲ್ಲಿ 3 ವರ್ಷ ಶಿಕ್ಷೆ ವಿಧಿಸಿದೆ.
ನ್ಯಾಯಮೂರ್ತಿ ಗಜಾನನ ಭಟ್ ಅವರು ಈ ಮಹತ್ವದ ತೀರ್ಪನ್ನು ನೀಡಿದ್ದಾರೆ. ಅಲ್ಲದೆ, 9 ಕೋಟಿ 60 ಲಕ್ಷ ರೂಪಾಯಿ ದಂಡವನ್ನು ಪಾವತಿ ಮಾಡುವಂತೆ ಆದೇಶ ಮಾಡಿದ್ದಾರೆ.
420 ವಂಚನೆ ಪ್ರಕರಣದಲ್ಲಿ 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ ವಿಧಿಸಿದೆ. ಅದಿರು ಕಳ್ಳತನ ಪ್ರಕರಣದಲ್ಲಿ 3 ವರ್ಷ ಹಾಗೂ ಒಳಸಂಚು ಪ್ರಕರಣದಲ್ಲಿ 5 ವರ್ಷ ಶಿಕ್ಷೆಯನ್ನು ವಿಧಿಸಿದೆ.
ಪ್ರಕರಣದ ವಾದ-ಪ್ರತಿವಾದ ಆಲಿಸಿದ್ದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಅಕ್ಟೋಬರ್ 24 ರಂದು ಶಾಸಕ ಸತೀಶ್ ಸೈಲ್ ದೋಷಿ ಎಂದು ತೀರ್ಪು ನೀಡಿ, ಶಿಕ್ಷೆಯ ಆದೇಶವನ್ನು ಕಾಯ್ದಿರಿಸಿತ್ತು. ಶನಿವಾರ ಅಂತಿಮ ವಿಚಾರಣೆ ನಡೆಸಿ ಸತೀಶ್ ಸೈಲ್‌ಗೆ ಏಳು ವರ್ಷ ಜೈಲು ಶಿಕ್ಷೆ ಮತ್ತು ದಂಡ ವಿಧಿಸಿದೆ.
ಬಳ್ಳಾರಿ, ಹೊಸಪೇಟೆ, ಸಂಡೂರು, ಚಿತ್ರದುರ್ಗದ ಅರಣ್ಯ ಪ್ರದೇಶಗಳಿಂದ ಅಕ್ರಮವಾಗಿ ಭಾರಿ ಪ್ರಮಾ ಣದ ಕಬ್ಬಿಣದ ಅದಿರು ವಿದೇಶಕ್ಕೆ ರಫ್ತಾಗುತ್ತಿತ್ತು. 2010ರ ಮಾ.20 ರಂದು ಅರಣ್ಯ ಇಲಾಖೆ 350 ಕೋಟಿ ರೂ. ಮೌಲ್ಯದ ಬರೋಬ್ಬರಿ 8.5 ಲಕ್ಷ ಮೆಟ್ರಿಕ್ ಟನ್ ಅದಿರು ಮುಟ್ಟುಗೋಲು ಹಾಕಿಕೊಂಡಿತ್ತು.