ರಾಜ್ಯ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ವಿಶ್ವವಿದ್ಯಾಲಯದ ಕುಲಾಧಿಪತಿ ಸ್ಥಾನವನ್ನು ರಾಜ್ಯಪಾಲರಿಂದ ಹಿಂಪಡೆಯಲು ಗುರುವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನಿದ್ದು, ಬಿಜೆಪಿ ಆಕ್ಷೇಪ ವ್ಯಕ್ತಪಡಿಸಿದೆ.
ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ಈ ಬಗ್ಗೆ ಟ್ವೀಟ್ ಮಾಡಿ, “ಶಿಕ್ಷಣದಲ್ಲಿ ರಾಜಕೀಯ ಬೆರೆಯಬಾರದು ಎಂಬ ಸದುದ್ದೇಶದಿಂದ ಸಂವಿಧಾನದ ಆಶಯಕ್ಕೆ ಪೂರಕವಾಗಿ ರಾಜ್ಯದ ಸಾಂವಿಧಾನಿಕ ಮುಖ್ಯಸ್ಥರೂ ಆದ ಗೌರವಾನ್ವಿತ ರಾಜ್ಯಪಾಲರೇ ವಿಶ್ವವಿದ್ಯಾಲಯಗಳ ಕುಲಾಧಿಪತಿಗಳಾಗಿರುವುದು ಶಿಕ್ಷಣದ ಭೂಷಣ. ಆದರೆ ಸಿದ್ದರಾಮಯ್ಯ ಅವರ ನೇತೃತ್ವದ ಸರ್ಕಾರ ಸದ್ಯ ಈಗಿರುವ ತನ್ನ ಅಧಿಕಾರವನ್ನು ದುರುಪಯೋಗ ಮಾಡಿಕೊಂಡು ಸರಣಿ ಭ್ರಷ್ಟಾಚಾರಗಳಲ್ಲಿ ತೊಡಗಿರುವುದರ ನಡುವೆಯೇ ಉನ್ನತ ಶಿಕ್ಷಣ ವ್ಯವಸ್ಥೆಯನ್ನು ಮಲಿನಗೊಳಿಸಲು ಹೊರಟಿದೆ” ಎಂದು ಟೀಕಿಸಿದ್ದಾರೆ.
“ಕರ್ನಾಟಕ ರಾಜ್ಯ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ವಿಶ್ವವಿದ್ಯಾಲಯದ ಕುಲಾಧಿಪತಿ ಅಧಿಕಾರವನ್ನು ರಾಜ್ಯಪಾಲರಿಂದ ಕಿತ್ತು ಮುಖ್ಯಮಂತ್ರಿ ಅವರಿಗೆ ನೀಡಲು ಹೊರಟಿರುವ ಸರ್ಕಾರದ ನಿಲುವು ಗ್ರಾಮೀಣಾಭಿವೃದ್ಧಿ ಅಧ್ಯಯನ ಕ್ಷೇತ್ರದಲ್ಲೂ ಅನಗತ್ಯ ರಾಜಕೀಯ ಹಸ್ತಕ್ಷೇಪಕ್ಕೆ ಅವಕಾಶ ನೀಡಲಿದೆ” ಎಂದು ಆರೋಪಿಸಿದ್ದಾರೆ.
“ಈ ಮೊದಲಿನಿಂದಲೂ ರಾಜ್ಯಪಾಲರ ಕುರಿತು ಅಸಹನೆ ತೋರುತ್ತಿರುವ ಹಾಗೂ ರಾಜ್ಯಪಾಲರನ್ನು ವೈರಿಯಂತೆ ನೋಡುತ್ತಿರುವ ಕಾಂಗ್ರೆಸ್ ಸರ್ಕಾರ ಸರ್ಕಾರ ರಾಜ್ಯಪಾಲರಿಗಿರುವ ಪರಮಾಧಿಕಾರಕ್ಕೆ ಕತ್ತರಿ ಪ್ರಯೋಗ ಮಾಡಲು ಹೊರಟಿರುವುದು ಸಾಂವಿಧಾನಿಕ ವ್ಯವಸ್ಥೆನ್ನು ವಿಚಲಿತಗೊಳಿಸುವ ಹೊನ್ನಾರದಿಂದ ಕೂಡಿದೆ. ರಾಜ್ಯ ಸರ್ಕಾರದ ಈ ನಡೆ ಅತ್ಯಂತ ಖಂಡನೀಯ” ಎಂದಿದ್ದಾರೆ.
ಸಚಿವ ಸಂಪುಟ ನಿರ್ಧಾರ ಏನು?
ಸಚಿವ ಸಂಪುಟ ಸಭೆಯಲ್ಲಿ ಒಟ್ಟು 8 ವಿಧೇಯಕಗಳನ್ನು ಬೆಳಗಾವಿ ಅಧಿವೇಶನದಲ್ಲಿ ಮಂಡಿಸಿ ಅನುಮೋದನೆ ಪಡೆಯಲು ನಿರ್ಧರಿಸಿದ್ದು, ಇದರಲ್ಲಿ ಕರ್ನಾಟಕ ರಾಜ್ಯ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ವಿಶ್ವವಿದ್ಯಾಲಯ ತಿದ್ದುಪಡಿ ವಿಧೇಯಕ-2024ಕ್ಕೆ ಸಹ ಸರ್ಕಾರ ಅಂಗೀಕಾರ ಪಡೆದಿದೆ. ಇದರಡಿ ವಿಧೇಯಕದ ತಿದ್ದುಪಡಿ ಮೂಲಕ ಗದಗದ ಗ್ರಾಮೀಣಾಭಿವೃದ್ಧಿ ವಿಶ್ವವಿದ್ಯಾಲಯದ ಕುಲಾಧಿಪತಿಗಳನ್ನಾಗಿ ರಾಜ್ಯಪಾಲರ ಬದಲಿಗೆ ಮುಖ್ಯಮಂತ್ರಿಗಳನ್ನೇ ನೇಮಿಸಲು ತೀರ್ಮಾನಿಸಲಾಗಿದೆ. ಬೆಳಗಾವಿ ಅಧಿವೇಶನದಲ್ಲಿ ಮಂಡಿಸಿ ಉಭಯ ಸದನಗಳಲ್ಲಿ ಅಂಗೀಕಾರ ಪಡೆಯಲಿದ್ದು, ಅನುಮೋದನೆಗಾಗಿ ರಾಜ್ಯಪಾಲರಿಗೆ ಕಳುಹಿಸಲಾಗುವುದು.
ಈ ಬಗ್ಗೆ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಎಚ್.ಕೆ. ಪಾಟೀಲ್, ಮತ್ತಷ್ಟು ಸಕ್ರಿಯವಾಗಿ ವಿಶ್ವವಿದ್ಯಾಲಯವನ್ನು ಮುನ್ನಡೆಸಲು ಈ ತೀರ್ಮಾನ ಮಾಡಲಾಗಿದೆ. ಗುಜರಾತ್‌ನಲ್ಲೂ ಈ ಮಾದರಿ ಅನುಸರಿಸಲಾಗಿದೆ. ಇದರಲ್ಲಿ ಬೇರೆ ಯಾವುದೇ ಉದ್ದೇಶವಿಲ್ಲ. ಇನ್ನು ಮುಂದೆ ಕುಲಾಧಿಪತಿಗಳ ಎಲ್ಲಾ ನಿರ್ಣಯಗಳನ್ನು ರಾಜ್ಯಪಾಲರ ಬದಲಾಗಿ ಸಿಎಂ ನಿರ್ವಹಿಸುತ್ತಾರೆ ಎಂದರು.