ದಾವಣಗೆರೆ ಲೋಕಸಭಾ ಕ್ಷೇತ್ರದ ಸಮಗ್ರ ಅಭಿವೃದ್ಧಿ ಹಾಗೂ ಗ್ರಾಮೀಣ ಮೂಲಸೌಕರ್ಯಗಳ ಬಲವರ್ಧನೆಗೆ ಒಟ್ಟು ₹15 ಕೋಟಿ ಅನುದಾನ ಒದಗಿಸುವಂತೆ ಸಂಸದೆ ಡಾ. ಪ್ರಭಾ ಮಲ್ಲಿಕಾರ್ಜುನ್ ರಾಜ್ಯ ಸರ್ಕಾರಕ್ಕೆ ಮನವಿ ಸಲ್ಲಿಸಿದ್ದಾರೆ.
ಬೆಂಗಳೂರಿನಲ್ಲಿ ಹಿಂದುಳಿದ ವರ್ಗಗಳ ಕಲ್ಯಾಣ ಸಚಿವ ಶಿವರಾಜ್ ತಂಗಡಗಿ ಅವರನ್ನು ಭೇಟಿಯಾದ ಸಂಸದೆ, ಕ್ಷೇತ್ರದ ಹಿಂದುಳಿದ ವರ್ಗಗಳ ಶೈಕ್ಷಣಿಕ, ಸಾಮಾಜಿಕ ಮತ್ತು ಆರ್ಥಿಕ ಅಭಿವೃದ್ಧಿಗೆ ಪೂರಕವಾದ ವಿವಿಧ ಮೂಲಸೌಕರ್ಯ ಕಾಮಗಾರಿಗಳನ್ನು ಕೈಗೊಳ್ಳಲು ₹10 ಕೋಟಿ ವಿಶೇಷ ಅನುದಾನ ಬಿಡುಗಡೆ ಮಾಡುವಂತೆ ಕೋರಿದರು.
ಕ್ಷೇತ್ರದ ವಿವಿಧೆಡೆ ಸಮುದಾಯ ಭವನಗಳ ನಿರ್ಮಾಣ ಮತ್ತು ಅಭಿವೃದ್ಧಿ, ವಿದ್ಯಾರ್ಥಿ ನಿಲಯಗಳಿಗೆ ಅಗತ್ಯ ಮೂಲಸೌಕರ್ಯ ಕಲ್ಪಿಸುವುದು, ಶುದ್ಧ ಕುಡಿಯುವ ನೀರು, ಶೌಚಾಲಯ, ವಿದ್ಯುತ್ ಸೇರಿದಂತೆ ಸಾರ್ವಜನಿಕರಿಗೆ ಅಗತ್ಯ ಸೌಲಭ್ಯಗಳನ್ನು ಒದಗಿಸಲು ಅನುದಾನ ಬಳಸುವಂತೆ ಮನವಿಯಲ್ಲಿ ಪ್ರಸ್ತಾಪಿಸಿದ್ದಾರೆ.
ಗ್ರಾಮೀಣ ರಸ್ತೆ ಅಭಿವೃದ್ಧಿಗೆ ₹5 ಕೋಟಿ
ದಾವಣಗೆರೆ ಮತ್ತು ಚನ್ನಗಿರಿ ತಾಲ್ಲೂಕುಗಳ ಗ್ರಾಮೀಣ ಪ್ರದೇಶಗಳಲ್ಲಿ ರಸ್ತೆ ಸಂಪರ್ಕ ವ್ಯವಸ್ಥೆ ಸುಧಾರಿಸಲು ತಲಾ ₹1 ಕೋಟಿ ವೆಚ್ಚದ ಐದು ಪ್ರಮುಖ ರಸ್ತೆ ಕಾಮಗಾರಿಗಳಿಗೆ ಒಟ್ಟು ₹5 ಕೋಟಿ ಅನುದಾನ ಬಿಡುಗಡೆ ಮಾಡುವಂತೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಈಶ್ವರ ಬಿ. ಖಂಡ್ರೆ ಅವರಿಗೆ ಪತ್ರ ಬರೆದಿದ್ದಾರೆ.
ಗ್ರಾಮೀಣ ಜನರ ಸುಗಮ ಸಂಚಾರ, ರೈತರ ಕೃಷಿ ಉತ್ಪನ್ನಗಳ ಸಾಗಣೆ, ವಿದ್ಯಾರ್ಥಿಗಳ ಶೈಕ್ಷಣಿಕ ಚಟುವಟಿಕೆ ಹಾಗೂ ಗ್ರಾಮಗಳ ನಡುವಿನ ಸಂಪರ್ಕ ಸುಧಾರಣೆಗೆ ಗುಣಮಟ್ಟದ ರಸ್ತೆಗಳ ನಿರ್ಮಾಣ ಅಗತ್ಯವಾಗಿದೆ. ಈ ಹಿನ್ನೆಲೆಯಲ್ಲಿ ಪ್ರಸ್ತಾವಿತ ಕಾಮಗಾರಿಗಳಿಗೆ ಆದ್ಯತೆ ನೀಡಿ ಅನುದಾನ ಮಂಜೂರು ಮಾಡುವಂತೆ ಮನವಿ ಮಾಡಿದ್ದಾರೆ.
ಸಮಗ್ರ ಅಭಿವೃದ್ಧಿಗೆ ಆದ್ಯತೆ
ಗ್ರಾಮೀಣ ಮೂಲಸೌಕರ್ಯಗಳ ಅಭಿವೃದ್ಧಿಯ ಜತೆಗೆ ಸಮಾಜದ ಎಲ್ಲ ವರ್ಗಗಳಿಗೂ ಸಮಾನ ಅವಕಾಶಗಳನ್ನು ಕಲ್ಪಿಸುವುದು ಅಗತ್ಯವಾಗಿದೆ. ಹಿಂದುಳಿದ ಸಮುದಾಯಗಳ ಶೈಕ್ಷಣಿಕ ಮತ್ತು ಆರ್ಥಿಕ ಸಬಲೀಕರಣ, ಗ್ರಾಮೀಣ ರಸ್ತೆ ಸಂಪರ್ಕ ಸುಧಾರಣೆ ಹಾಗೂ ಸಾರ್ವಜನಿಕರಿಗೆ ಅಗತ್ಯ ಸೌಲಭ್ಯಗಳನ್ನು ಒದಗಿಸುವುದು ತಮ್ಮ ಪ್ರಮುಖ ಆದ್ಯತೆಯಾಗಿದೆ ಎಂದು ಸಂಸದೆ ಡಾ. ಪ್ರಭಾ ಮಲ್ಲಿಕಾರ್ಜುನ್ ತಿಳಿಸಿದ್ದಾರೆ.
ಕ್ಷೇತ್ರದ ಜನರ ಬೇಡಿಕೆಗಳಿಗೆ ಸ್ಪಂದಿಸಿ, ಪ್ರಸ್ತಾವಿತ ಅಭಿವೃದ್ಧಿ ಕಾಮಗಾರಿಗಳಿಗೆ ಅಗತ್ಯ ಅನುದಾನ ದೊರಕಿಸಿಕೊಡಲು ನಿರಂತರ ಪ್ರಯತ್ನಿಸಲಾಗುವುದು ಎಂದು ಅವರು ಹೇಳಿದ್ದಾರೆ.


