Homeಕರ್ನಾಟಕಕಲಬುರಗಿ ಬಳಿ ಆಧುನಿಕ ವಚನ ಮಂಟಪ ನಿರ್ಮಾಣಕ್ಕೆ ಸಿದ್ಧತೆ: ಪ್ರಿಯಾಂಕ್ ಖರ್ಗೆ

ಕಲಬುರಗಿ ಬಳಿ ಆಧುನಿಕ ವಚನ ಮಂಟಪ ನಿರ್ಮಾಣಕ್ಕೆ ಸಿದ್ಧತೆ: ಪ್ರಿಯಾಂಕ್ ಖರ್ಗೆ

ಶರಣರ ವಚನ ಪರಂಪರೆ, ಸಾಮಾಜಿಕ ಕ್ರಾಂತಿ ಹಾಗೂ ಕನ್ನಡದ ಸಾಂಸ್ಕೃತಿಕ ಶ್ರೀಮಂತಿಕೆಯನ್ನು ಪ್ರತಿಬಿಂಬಿಸುವ ಆಧುನಿಕ ವಚನ ಮಂಟಪವನ್ನು ಕಲಬುರಗಿ ನಗರದ ಸಮೀಪ ನಿರ್ಮಿಸಲು ರಾಜ್ಯ ಸರ್ಕಾರ ಮುಂದಾಗಿದೆ ಎಂದು ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ.

ಕಲಬುರಗಿ ತಾಲ್ಲೂಕಿನ ಕಪನೂರು ಗ್ರಾಮದ ಬಳಿ ನಿರ್ಮಿಸಲು ಉದ್ದೇಶಿಸಿರುವ ವಚನ ಮಂಟಪದ ವಿನ್ಯಾಸ, ನಿರ್ಮಾಣದ ರೂಪುರೇಷೆ ಹಾಗೂ ವಿವಿಧ ಸೌಲಭ್ಯಗಳ ಕುರಿತು ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಸಚಿವರು, ಯೋಜನೆಯನ್ನು ಅರ್ಥಪೂರ್ಣವಾಗಿ ರೂಪಿಸುವಂತೆ ಅಧಿಕಾರಿಗಳಿಗೆ ಸೂಚಿನೆ ನೀಡಿದರು.

ಬೆಂಗಳೂರಿನ ತಮ್ಮ ಕಚೇರಿಯಲ್ಲಿ ನಡೆದ ಸಭೆಯಲ್ಲಿ ವಚನ ಮಂಟಪ ನಿರ್ಮಾಣಕ್ಕೆ ಸಂಬಂಧಿಸಿದಂತೆ ಖ್ಯಾತ ವಾಸ್ತುಶಿಲ್ಪಿಗಳು ಸಿದ್ಧಪಡಿಸಿದ ವಿನ್ಯಾಸ ಹಾಗೂ ಪರಿಕಲ್ಪನಾ ವರದಿಗಳನ್ನು ಸಚಿವರು ಪರಿಶೀಲಿಸಿದರು.

ಕಪನೂರು ಗ್ರಾಮದ ಸರ್ವೆ ನಂ.44/1ರಲ್ಲಿರುವ 6 ಎಕರೆ 6 ಗುಂಟೆ ಜಮೀನಿನಲ್ಲಿ ಈ ಮಹತ್ವಾಕಾಂಕ್ಷಿ ಯೋಜನೆ ಅನುಷ್ಠಾನಗೊಳಿಸುವ ಉದ್ದೇಶವಿದೆ. ವಚನ ಮಂಟಪದ ಜೊತೆಗೆ ಶರಣರ ಜೀವನ, ವಚನ ಸಾಹಿತ್ಯ ಹಾಗೂ ವಚನ ಚಳವಳಿಯ ಇತಿಹಾಸ ಪರಿಚಯಿಸುವ ವಸ್ತುಸಂಗ್ರಹಾಲಯ, ವ್ಯಾಖ್ಯಾನ ಕೇಂದ್ರ, ಅನುಭವ ಕೇಂದ್ರ ಮತ್ತು ಸಂಶೋಧನಾ ಕೇಂದ್ರ ಸ್ಥಾಪಿಸುವ ಚಿಂತನೆಯೂ ಇದೆ ಎಂದು ಹೇಳಿದರು.

ಕರ್ನಾಟಕದ ಸಾಂಸ್ಕೃತಿಕ ನಾಯಕ ಬಸವಣ್ಣನವರು ಸೇರಿದಂತೆ ವಚನ ಚಳವಳಿಯಲ್ಲಿ ಭಾಗವಹಿಸಿದ ಶರಣ-ಶರಣೆಯರ ಜೀವನ, ಸಾಧನೆ, ಭಾವಚಿತ್ರಗಳು ಹಾಗೂ ಅಮೂಲ್ಯ ವಚನಗಳನ್ನು ಇಲ್ಲಿ ಪರಿಚಯ ಮಾಡಿಕೊಡಲಾಗುವುದು. ಸಮಾನತೆ, ಕಾಯಕ, ದಾಸೋಹ ಹಾಗೂ ಸಾಮಾಜಿಕ ನ್ಯಾಯದ ಸಂದೇಶಗಳನ್ನು ಮುಂದಿನ ಪೀಳಿಗೆಗೆ ತಲುಪಿಸುವ ನಿಟ್ಟಿನಲ್ಲಿ ಮಂಟಪವನ್ನು ನಿರ್ಮಿಸಲಾಗುವುದು ಎಂದು ಸಚಿವರು ತಿಳಿಸಿದರು.

ವಚನ ಸಾಹಿತ್ಯ ಕುರಿತ ಚರ್ಚೆ, ಸಂವಾದ, ಉಪನ್ಯಾಸ, ವಿಚಾರ ಸಂಕಿರಣ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಅನುಕೂಲವಾಗುವಂತೆ ತೆರೆದ ಸಭಾಂಗಣ ನಿರ್ಮಿಸುವ ಉದ್ದೇಶವೂ ಇದೆ. ಸಂಶೋಧಕರು, ವಿದ್ಯಾರ್ಥಿಗಳು ಹಾಗೂ ಸಾಹಿತ್ಯಾಸಕ್ತರಿಗೆ ಅಧ್ಯಯನ ಕೇಂದ್ರವಾಗಿಯೂ ಇದು ಕಾರ್ಯನಿರ್ವಹಿಸಲಿದೆ ಎಂದರು.

ಐತಿಹಾಸಿಕ ತಾಣಗಳ ಆದ್ಯತೆ

ಕಲಬುರಗಿ ಜಿಲ್ಲೆಯ ಐತಿಹಾಸಿಕ, ಪಾರಂಪರಿಕ ಹಾಗೂ ಧಾರ್ಮಿಕ ತಾಣಗಳ ಸಂರಕ್ಷಣೆ ಮತ್ತು ಅಭಿವೃದ್ಧಿಗೆ ಸರ್ಕಾರ ಆದ್ಯತೆ ನೀಡುತ್ತಿದೆ ಎಂದು ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದರು.

ಸಭೆಯಲ್ಲಿ ಕಾಳಗಿ ತಾಲ್ಲೂಕಿನ ಸೂರ್ಯನಾರಾಯಣ ದೇವಾಲಯದ ಸಂರಕ್ಷಣಾ ಕಾಮಗಾರಿ, ಸೇಡಂ ತಾಲ್ಲೂಕಿನ ಐತಿಹಾಸಿಕ ಮಳಖೇಡ ಕೋಟೆ ಅಭಿವೃದ್ಧಿ, ಚಿತ್ತಾಪುರ ತಾಲ್ಲೂಕಿನ ನಾಗಾವಿ ಪಾರಂಪರಿಕ ಪ್ರದೇಶದಲ್ಲಿನ ಪ್ರಾಚ್ಯ ಕುರುಹುಗಳ ಸಂರಕ್ಷಣೆ ಕುರಿತು ಚರ್ಚೆ ಮಾಡಲಾಯಿತು.

ಇದೇ ಸಂದರ್ಭದಲ್ಲಿ ಚಿತ್ತಾಪುರ ತಾಲ್ಲೂಕಿನ ಕನಗನಹಳ್ಳಿಯಲ್ಲಿರುವ ಐತಿಹಾಸಿಕ ಬೌದ್ಧ ನೆಲೆ ಹಾಗೂ ಪ್ರಾಚ್ಯ ಕುರುಹುಗಳ ಸಂರಕ್ಷಣೆ ಮತ್ತು ಅಭಿವೃದ್ಧಿಗೂ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸಚಿವರು ಸೂಚನೆ ನೀಡಿದರು.

ಕಲಬುರಗಿ ಜಿಲ್ಲೆಯ ಸಾಂಸ್ಕೃತಿಕ ಪರಂಪರೆಯನ್ನು ಉಳಿಸಿ ಬೆಳೆಸುವುದರ ಜೊತೆಗೆ, ಈ ತಾಣಗಳನ್ನು ಪ್ರವಾಸಿಗರು, ವಿದ್ಯಾರ್ಥಿಗಳು ಮತ್ತು ಸಂಶೋಧಕರಿಗೆ ಆಕರ್ಷಣೀಯ ಕೇಂದ್ರಗಳನ್ನಾಗಿ ರೂಪಿಸುವುದು ಸರ್ಕಾರದ ಉದ್ದೇಶವಾಗಿದೆ. ಇದರಿಂದ ಜಿಲ್ಲೆಯ ಪ್ರವಾಸೋದ್ಯಮ ಹಾಗೂ ಸ್ಥಳೀಯ ಆರ್ಥಿಕ ಚಟುವಟಿಕೆಗಳಿಗೆ ಉತ್ತೇಜನ ದೊರೆಯಲಿದೆ ಎಂದರು.

ಸಭೆಯಲ್ಲಿ ವಿವಿಧ ಇಲಾಖೆಗಳ ಹಿರಿಯ ಅಧಿಕಾರಿಗಳು ಭಾಗವಹಿಸಿದ್ದರು. ವಿಡಿಯೊ ಸಂವಾದದ ಮೂಲಕ ಕಲಬುರಗಿ ಜಿಲ್ಲಾಧಿಕಾರಿ ಇಕ್ರಮ್ ಶರೀಫ್ ಹಾಗೂ ಜಿಲ್ಲಾ ಮಟ್ಟದ ಅಧಿಕಾರಿಗಳು ಪಾಲ್ಗೊಂಡಿದ್ದರು.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments