Homeಕರ್ನಾಟಕಸ್ವಚ್ಛತೆ, ತ್ಯಾಜ್ಯ ನಿರ್ವಹಣೆಗೆ ಆದ್ಯತೆ ನೀಡಿ: ಸಚಿವ ಕೃಷ್ಣ ಬೈರೇಗೌಡ

ಸ್ವಚ್ಛತೆ, ತ್ಯಾಜ್ಯ ನಿರ್ವಹಣೆಗೆ ಆದ್ಯತೆ ನೀಡಿ: ಸಚಿವ ಕೃಷ್ಣ ಬೈರೇಗೌಡ

ಬೆಂಗಳೂರು ನಗರದ ಸ್ವಚ್ಛತೆ, ತ್ಯಾಜ್ಯ ನಿರ್ವಹಣೆ ಹಾಗೂ ಮೂಲಸೌಕರ್ಯ ಕಾಮಗಾರಿಗಳಿಗೆ ಹೆಚ್ಚಿನ ಆದ್ಯತೆ ನೀಡಬೇಕು. ಸ್ವಚ್ಛತೆ ಕಾಪಾಡುವಲ್ಲಿ ಯಾವುದೇ ರೀತಿಯ ನಿರ್ಲಕ್ಷ್ಯ ಕಂಡುಬಂದರೆ ಸಂಬಂಧಪಟ್ಟ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಗ್ರೇಟರ್ ಬೆಂಗಳೂರು ನಗರಾಭಿವೃದ್ಧಿ ಸಚಿವ ಕೃಷ್ಣ ಬೈರೇಗೌಡ ಎಚ್ಚರಿಕೆ ನೀಡಿದರು.

ಬೆಂಗಳೂರು ಪೂರ್ವ ನಗರ ಪಾಲಿಕೆ ವ್ಯಾಪ್ತಿಯ ಹೊರಮಾವು, ಬಂಜಾರ ಲೇಔಟ್, ಅಗರ ಕೆರೆ, ಜಯಂತಿನಗರ, ರಾಮಮೂರ್ತಿನಗರ ಹಾಗೂ ಕಸ್ತೂರಿನಗರ ಸೇರಿದಂತೆ ವಿವಿಧ ಪ್ರದೇಶಗಳಿಗೆ ಅನಿರೀಕ್ಷಿತ ಭೇಟಿ ನೀಡಿದ ಅವರು, ಸ್ವಚ್ಛತೆ, ತ್ಯಾಜ್ಯ ಸಂಗ್ರಹಣೆ ಮತ್ತು ವಿಲೇವಾರಿ, ರಸ್ತೆ ಹಾಗೂ ಪಾದಚಾರಿ ಮಾರ್ಗಗಳ ನಿರ್ವಹಣೆ, ರಾಜಕಾಲುವೆ, ಕೆರೆಗಳು ಮತ್ತು ವಿವಿಧ ಮೂಲಸೌಕರ್ಯ ಕಾಮಗಾರಿಗಳನ್ನು ಪರಿಶೀಲಿಸಿದರು.

ಮನೆ-ಮನೆಯಿಂದ ಸಮರ್ಪಕವಾಗಿ ತ್ಯಾಜ್ಯ ಸಂಗ್ರಹಿಸಲಾಗುತ್ತಿದೆಯೇ, ಪೌರಕಾರ್ಮಿಕರು ಹಾಗೂ ಮಾರ್ಷಲ್‌ಗಳು ಕರ್ತವ್ಯ ನಿರ್ವಹಿಸುತ್ತಿದ್ದಾರೆಯೇ ಎಂಬ ಬಗ್ಗೆ ಅಧಿಕಾರಿಗಳಿಂದ ಮಾಹಿತಿ ಪಡೆದ ಸಚಿವರು, ನಂತರ ಸಾರ್ವಜನಿಕರಿಗೆ ಯಾವುದೇ ತೊಂದರೆಯಾಗದಂತೆ ಸ್ವಚ್ಛತೆ ಹಾಗೂ ಮೂಲಸೌಕರ್ಯ ನಿರ್ವಹಣೆಗೆ ಆದ್ಯತೆ ನೀಡುವಂತೆ ಸೂಚಿಸಿದರು.

ತ್ಯಾಜ್ಯ ಸಂಗ್ರಹಣೆಯಲ್ಲಿ ನಿರ್ಲಕ್ಷ್ಯ ಬೇಡ

ಹೊರಮಾವಿನ ಗಾಂಧಿ ಸರ್ಕಲ್ ಹಾಗೂ ಬಂಜಾರ ಲೇಔಟ್‌ಗೆ ಭೇಟಿ ನೀಡಿದ ಸಚಿವರು, ಮನೆ-ಮನೆಯಿಂದ ಪ್ರತಿನಿತ್ಯ ತ್ಯಾಜ್ಯ ಸಂಗ್ರಹಣೆ ಮಾಡುವ ವ್ಯವಸ್ಥೆಯನ್ನು ಪರಿಶೀಲಿಸಿದರು. ಪ್ರತಿಯೊಂದು ಮನೆಯಿಂದ ನಿಗದಿತ ಸಮಯದಲ್ಲಿ ತ್ಯಾಜ್ಯ ಸಂಗ್ರಹಿಸುವುದನ್ನು ಖಚಿತಪಡಿಸಿಕೊಳ್ಳಬೇಕು. ಸಂಗ್ರಹಿಸಿದ ತ್ಯಾಜ್ಯವನ್ನು ಸಮರ್ಪಕವಾಗಿ ವಿಲೇವಾರಿ ಮಾಡಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು.

ಸಾರ್ವಜನಿಕ ಸ್ಥಳಗಳಲ್ಲಿ ಕಸ ಸುರಿಯದಂತೆ ಮಾರ್ಷಲ್‌ಗಳು ನಿರಂತರ ನಿಗಾ ವಹಿಸಬೇಕು. ರಸ್ತೆ ಬದಿ, ಪಾದಚಾರಿ ಮಾರ್ಗ ಹಾಗೂ ಸ್ಲ್ಯಾಬ್‌ಗಳ ಮೇಲೆ ಬಿದ್ದಿರುವ ನಿರ್ಮಾಣ ತ್ಯಾಜ್ಯವನ್ನು ತಕ್ಷಣ ತೆರವುಗೊಳಿಸಬೇಕು ಎಂದು ಎಚ್ಚರಿಕೆ ನೀಡಿದರು.

ಸ್ವಚ್ಛತೆ ಕಾಪಾಡುವಲ್ಲಿ ನಿರ್ಲಕ್ಷ್ಯ ವಹಿಸಿದರೆ ಸಂಬಂಧಪಟ್ಟ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದರು.

ಅಗರ ಕೆರೆ ಸ್ವಚ್ಛತೆಗೆ ಸೂಚನೆ

ಅಗರ ಕೆರೆಗೆ ಭೇಟಿ ನೀಡಿದ ಸಚಿವರು, ಕೆರೆಯ ಸುತ್ತಮುತ್ತಲಿನ ಸ್ವಚ್ಛತೆ ಹಾಗೂ ನಿರ್ವಹಣೆಯನ್ನು ಪರಿಶೀಲಿಸಿದರು. ಕೆರೆಯ ಸುತ್ತಮುತ್ತ ಸಂಗ್ರಹವಾಗಿರುವ ತ್ಯಾಜ್ಯವನ್ನು ತೆರವುಗೊಳಿಸಿ ನಿರಂತರವಾಗಿ ಸ್ವಚ್ಛತೆ ಕಾಪಾಡುವಂತೆ ಸೂಚಿಸಿದರು.

ಕೆರೆಯ ಹೊರಭಾಗದಲ್ಲಿರುವ ಬೆಸ್ಕಾಂ ವಿದ್ಯುತ್ ಪ್ಯಾನಲ್‌ಗಳನ್ನು ಪರಿಶೀಲಿಸಿದ ಅವರು, ಸಾರ್ವಜನಿಕರಿಗೆ ಅಪಾಯವಾಗದಂತೆ ಅವುಗಳನ್ನು ಸೂಕ್ತ ಸ್ಥಳಕ್ಕೆ ಸ್ಥಳಾಂತರಿಸಲು ಕ್ರಮ ಕೈಗೊಳ್ಳುವಂತೆ ನಿರ್ದೇಶನ ನೀಡಿದರು. ಕೆರೆ ಸುತ್ತಮುತ್ತ ಒತ್ತುವರಿ ಕಂಡುಬಂದಲ್ಲಿ ನಿಯಮಾನುಸಾರ ತಕ್ಷಣ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಿದರು.

ಪಾದಚಾರಿ ಮಾರ್ಗ ಒತ್ತುವರಿ ತೆರವಿಗೆ ಸೂಚನೆ

ಅಗರ ಕೆರೆ ಸುತ್ತಮುತ್ತ ಹಾಗೂ ಪ್ರಮುಖ ರಸ್ತೆಗಳಲ್ಲಿ ಪಾದಚಾರಿ ಮಾರ್ಗಗಳ ಮೇಲಿನ ಒತ್ತುವರಿ ಕುರಿತು ಮಾಹಿತಿ ಪಡೆದ ಸಚಿವರು, ಪಾದಚಾರಿಗಳ ಸುರಕ್ಷಿತ ಸಂಚಾರಕ್ಕೆ ಅಡ್ಡಿಯಾಗಿರುವ ಒತ್ತುವರಿಯನ್ನು ತೆರವುಗೊಳಿಸಿ ಸಾರ್ವಜನಿಕರ ಬಳಕೆಗೆ ಮಾರ್ಗಗಳನ್ನು ಮುಕ್ತವಾಗಿಡುವಂತೆ ಸೂಚಿಸಿದರು.

ರಸ್ತೆ ಗುಂಡಿ, ಕತ್ತರಿಸಿದ ರಸ್ತೆಗಳ ದುರಸ್ತಿಗೆ ಸೂಚನೆ

ಜಯಂತಿನಗರ ಪ್ರದೇಶದಲ್ಲಿ ಜಲಮಂಡಳಿ ಕಾಮಗಾರಿಗಳಿಂದ ಕತ್ತರಿಸಿರುವ ರಸ್ತೆಗಳು ಹಾಗೂ ರಸ್ತೆ ಗುಂಡಿಗಳನ್ನು ಪರಿಶೀಲಿಸಿದ ಸಚಿವರು, ಕಾಮಗಾರಿ ಪೂರ್ಣಗೊಂಡ ತಕ್ಷಣ ರಸ್ತೆಯನ್ನು ಸಮರ್ಪಕವಾಗಿ ದುರಸ್ತಿಪಡಿಸಬೇಕು ಎಂದು ಸೂಚಿಸಿದರು.

ರಸ್ತೆ ಗುಂಡಿಗಳನ್ನು ತಕ್ಷಣ ಮುಚ್ಚಿ ವಾಹನ ಸವಾರರು ಹಾಗೂ ಸಾರ್ವಜನಿಕರಿಗೆ ಸುರಕ್ಷಿತ ಮತ್ತು ಸುಗಮ ಸಂಚಾರಕ್ಕೆ ಅನುವು ಮಾಡಿಕೊಡುವಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.

ರಾಜಕಾಲುವೆ ನಿರ್ವಹಣೆಗೆ ಆದ್ಯತೆ

ರಾಮಮೂರ್ತಿನಗರ ಮುಖ್ಯರಸ್ತೆ ವ್ಯಾಪ್ತಿಯ ರಾಜಕಾಲುವೆಯನ್ನು ಪರಿಶೀಲಿಸಿದ ಸಚಿವರು, ನಿಯಮಿತವಾಗಿ ಸ್ವಚ್ಛತಾ ಕಾರ್ಯ ಕೈಗೊಂಡು ಹೂಳು ಹಾಗೂ ತ್ಯಾಜ್ಯ ಸಂಗ್ರಹವಾಗದಂತೆ ನೋಡಿಕೊಳ್ಳಬೇಕು ಎಂದು ಸೂಚಿಸಿದರು.

ಮಳೆಗಾಲದಲ್ಲಿ ನೀರು ಸರಾಗವಾಗಿ ಹರಿಯುವಂತೆ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡು, ನಿಗದಿತ ಅವಧಿಯಲ್ಲಿ ಸ್ವಚ್ಛತಾ ಕಾರ್ಯ ಪೂರ್ಣಗೊಳಿಸುವಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.

ಮೆಟ್ರೋ ಕಾಮಗಾರಿ ವೇಗಗೊಳಿಸಲು ಸೂಚನೆ

ಕೆ.ಆರ್. ಪುರಂನ ಕಸ್ತೂರಿನಗರದಲ್ಲಿ ನಡೆಯುತ್ತಿರುವ ಮೆಟ್ರೋ ಕಾಮಗಾರಿಯನ್ನು ವೀಕ್ಷಿಸಿದ ಸಚಿವರು, ಕಾಮಗಾರಿಯ ಪ್ರಗತಿ ಕುರಿತು ಮಾಹಿತಿ ಪಡೆದರು. ಕಾಮಗಾರಿಗೆ ಇನ್ನಷ್ಟು ವೇಗ ನೀಡುವಂತೆ ಸೂಚಿಸಿದ ಅವರು, ನಿರ್ಮಾಣ ಸಾಮಗ್ರಿಗಳು ಹಾಗೂ ಸಲಕರಣೆಗಳಿಂದ ಸಾರ್ವಜನಿಕರಿಗೆ ತೊಂದರೆಯಾಗದಂತೆ ಅವುಗಳನ್ನು ಸಮರ್ಪಕವಾಗಿ ವ್ಯವಸ್ಥೆಗೊಳಿಸುವಂತೆ ನಿರ್ದೇಶನ ನೀಡಿದರು.

ರಸ್ತೆ ಹಾಗೂ ಪಾದಚಾರಿ ಮಾರ್ಗಗಳಲ್ಲಿ ಸಂಚಾರಕ್ಕೆ ಅಡಚಣೆಯಾಗದಂತೆ ಸಾರ್ವಜನಿಕರ ಸುರಕ್ಷತೆಗೆ ಅಗತ್ಯ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳುವಂತೆ ಸೂಚಿಸಿದರು.

‘ಕೆಲಸಕ್ಕೆ ಬರದವರನ್ನು ಖಾಯಂ ಮಾಡುವುದು ಹೇಗೆ?’

ಪರಿಶೀಲನೆ ವೇಳೆ ಹಲವು ಪೌರಕಾರ್ಮಿಕರು ತಮ್ಮ ಸೇವೆಯನ್ನು ಖಾಯಂ ಮಾಡುವಂತೆ ಸಚಿವರಿಗೆ ಮನವಿ ಮಾಡಿದರು. ಇದಕ್ಕೆ ಪ್ರತಿಕ್ರಿಯಿಸಿದ ಕೃಷ್ಣ ಬೈರೇಗೌಡ, ಕೆಲಸಕ್ಕೆ ಹಾಜರಾಗದ ಹಾಗೂ ಕರ್ತವ್ಯವನ್ನು ಸಮರ್ಪಕವಾಗಿ ನಿರ್ವಹಿಸದವರನ್ನು ಯಾವ ಕಾರಣಕ್ಕೆ ಖಾಯಂ ಮಾಡಬೇಕು ಎಂದು ಪ್ರಶ್ನಿಸಿದರು.

ಶೇ.30ರಷ್ಟು ಪೌರಕಾರ್ಮಿಕರು ನಿತ್ಯ ಕರ್ತವ್ಯಕ್ಕೆ ಹಾಜರಾಗುತ್ತಿಲ್ಲ ಎಂಬ ಆರೋಪಗಳು ಕೇಳಿಬರುತ್ತಿವೆ. ಮನೆ-ಮನೆಗೆ ತೆರಳಿ ತ್ಯಾಜ್ಯ ಸಂಗ್ರಹಣೆ ಸಮರ್ಪಕವಾಗಿ ನಡೆಯದ ಪರಿಣಾಮ ಹಲವು ಪ್ರದೇಶಗಳಲ್ಲಿ ಸಾರ್ವಜನಿಕರು ರಸ್ತೆಗೆ ಕಸ ಹಾಕುವಂತಾಗಿದೆ. ಇದರಿಂದ ನಗರದ ಹಲವೆಡೆ ಸ್ವಚ್ಛತೆಯ ಸಮಸ್ಯೆ ಎದುರಾಗಿದ್ದು, ಸಾರ್ವಜನಿಕರಿಂದ ಸರ್ಕಾರ ಟೀಕೆ ಎದುರಿಸುವಂತಾಗಿದೆ ಎಂದು ಸಚಿವರು ಅಸಮಾಧಾನ ವ್ಯಕ್ತಪಡಿಸಿದರು.

ಕರ್ತವ್ಯಕ್ಕೆ ಹಾಜರಾಗದೆ ಅಥವಾ ಜವಾಬ್ದಾರಿಯನ್ನು ಸಮರ್ಪಕವಾಗಿ ನಿರ್ವಹಿಸದವರ ವಿರುದ್ಧ ಕ್ರಮ ಕೈಗೊಳ್ಳಬೇಕು. ಸ್ವಚ್ಛತೆ ಹಾಗೂ ಮೂಲಸೌಕರ್ಯ ನಿರ್ವಹಣೆಯಲ್ಲಿ ಯಾವುದೇ ರೀತಿಯ ನಿರ್ಲಕ್ಷ್ಯಕ್ಕೆ ಅವಕಾಶ ನೀಡಬಾರದು ಎಂದು ಅಧಿಕಾರಿಗಳಿಗೆ ಸಚಿವರು ಕಟ್ಟುನಿಟ್ಟಿನ ಸೂಚನೆ ನೀಡಿದರು.

ಈ ಸಂದರ್ಭದಲ್ಲಿ ಬೆಂಗಳೂರು ಪೂರ್ವ ನಗರ ಪಾಲಿಕೆ ಆಯುಕ್ತ ಡಿ.ಎಸ್. ರಮೇಶ್, ಅಪರ ಆಯುಕ್ತೆ ಲೋಖಂಡೆ ಸ್ನೇಹಲ್ ಸುಧಾಕರ್, ಮುಖ್ಯ ಅಭಿಯಂತರ ಎಂ. ಲೋಕೇಶ್, ಕಾರ್ಯಪಾಲಕ ಅಭಿಯಂತರರು, ಮಾರ್ಷಲ್‌ಗಳು, ಪೌರಕಾರ್ಮಿಕರು ಸೇರಿದಂತೆ ಸಂಬಂಧಪಟ್ಟ ಅಧಿಕಾರಿಗಳು ಉಪಸ್ಥಿತರಿದ್ದರು.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments