Homeಕರ್ನಾಟಕತಳಮಟ್ಟದಲ್ಲಿ ಕಾಂಗ್ರೆಸ್ ಸಂಘಟನೆಗೆ ಆದ್ಯತೆ: ಸಚಿವ ಡಾ. ಯತೀಂದ್ರ ಸಿದ್ದರಾಮಯ್ಯ

ತಳಮಟ್ಟದಲ್ಲಿ ಕಾಂಗ್ರೆಸ್ ಸಂಘಟನೆಗೆ ಆದ್ಯತೆ: ಸಚಿವ ಡಾ. ಯತೀಂದ್ರ ಸಿದ್ದರಾಮಯ್ಯ

ಕಾಂಗ್ರೆಸ್ ಪಕ್ಷದ ಸಂಘಟನೆಯನ್ನು ತಳಮಟ್ಟದಿಂದ ಮತ್ತಷ್ಟು ಬಲಪಡಿಸುವ ಮೂಲಕ ಪಕ್ಷವನ್ನು ಸದೃಢಗೊಳಿಸಲು ಎಲ್ಲ ಮುಖಂಡರು ಹಾಗೂ ಕಾರ್ಯಕರ್ತರು ಒಗ್ಗಟ್ಟಿನಿಂದ ಕಾರ್ಯನಿರ್ವಹಿಸಬೇಕು ಎಂದು ನಗರಾಭಿವೃದ್ಧಿ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರಾದ ಡಾ. ಯತೀಂದ್ರ ಸಿದ್ದರಾಮಯ್ಯ ಅವರು ತಿಳಿಸಿದರು.

ಮೈಸೂರಿನ ಜೆ.ಪಿ. ಫಾರ್ಚೂನ್ ಹೋಟೆಲ್‌ನಲ್ಲಿ ಮೈಸೂರು ನಗರ ಹಾಗೂ ಜಿಲ್ಲಾ ಗ್ರಾಮಾಂತರ ಕಾಂಗ್ರೆಸ್ ಸಮಿತಿಯ ಅಧ್ಯಕ್ಷರು ಮತ್ತು ಪಕ್ಷದ ಪ್ರಮುಖ ಮುಖಂಡರೊಂದಿಗೆ ಸಭೆ ನಡೆಸಿ ಮಾತನಾಡಿದ ಅವರು, ಪಕ್ಷದ ಸಂಘಟನಾ ಚಟುವಟಿಕೆಗಳನ್ನು ಚುರುಕುಗೊಳಿಸುವುದು, ಕಾರ್ಯಕರ್ತರ ಪಾತ್ರ ಹಾಗೂ ಮುಂದಿನ ಕಾರ್ಯಯೋಜನೆಗಳ ಕುರಿತು ಚರ್ಚಿಸಿದರು.

ಕಾಂಗ್ರೆಸ್ ಪಕ್ಷದ ಸಿದ್ಧಾಂತ, ಜನಪರ ಕಾರ್ಯಕ್ರಮಗಳು ಹಾಗೂ ಸರ್ಕಾರದ ಸಾಧನೆಗಳನ್ನು ಜನರಿಗೆ ತಲುಪಿಸುವ ನಿಟ್ಟಿನಲ್ಲಿ ಕಾರ್ಯಕರ್ತರು ನಿರಂತರವಾಗಿ ಜನರೊಂದಿಗೆ ಸಂಪರ್ಕದಲ್ಲಿರಬೇಕು. ಪಕ್ಷದ ಸಂಘಟನೆಗಾಗಿ ಪ್ರಾಮಾಣಿಕವಾಗಿ ಶ್ರಮಿಸುತ್ತಿರುವ ಕಾರ್ಯಕರ್ತರು ಮತ್ತು ಮುಖಂಡರಿಗೆ ಸೂಕ್ತ ಸ್ಥಾನಮಾನ ಹಾಗೂ ಅವಕಾಶಗಳನ್ನು ದೊರಕಿಸಿಕೊಡಲು ಪ್ರಯತ್ನಿಸಲಾಗುವುದು. ಪಕ್ಷವು ಪ್ರತಿಯೊಬ್ಬರ ಸಂಘಟನಾ ಶ್ರಮ ಮತ್ತು ಸೇವೆಯನ್ನು ಗುರುತಿಸಿ ಸೂಕ್ತ ಮನ್ನಣೆ ನೀಡಲಿದೆ ಎಂದು ತಿಳಿಸಿದರು.

ಪಕ್ಷದ ಸಂಘಟನೆಯಲ್ಲಿ ನಿರಂತರ ಸಂವಹನ ಮತ್ತು ಸಮನ್ವಯ ಅತ್ಯಂತ ಮುಖ್ಯವಾಗಿದ್ದು, ಸಂಘಟನೆಯ ಪ್ರಗತಿ, ಕಾರ್ಯಕರ್ತರ ಸಮಸ್ಯೆಗಳು ಹಾಗೂ ಪಕ್ಷದ ಚಟುವಟಿಕೆಗಳ ಕುರಿತು ಚರ್ಚಿಸಲು ತಿಂಗಳಿಗೊಮ್ಮೆಯಾದರೂ ಸಭೆ ಕೈಗೊಳ್ಳಲಾಗುವುದು ಎಂದರು.

ಇದೇ ಸಂದರ್ಭದಲ್ಲಿ ಮುಂಬರುವ ಸಂವಿಧಾನ ದಿನಾಚರಣೆಯನ್ನು ಮೈಸೂರಿನಲ್ಲಿ ಯಶಸ್ವಿಯಾಗಿ ಆಯೋಜಿಸುವುದು ನಮ್ಮೆಲ್ಲರ ಜವಾಬ್ದಾರಿಯಾಗಿದೆ. ಈ ಕಾರ್ಯಕ್ರಮದಲ್ಲಿ ಹೆಚ್ಚಿನ ಜನರ ಪಾಲ್ಗೊಳ್ಳುವಿಕೆಯನ್ನು ಖಚಿತಪಡಿಸುವುದರೊಂದಿಗೆ ಕಾರ್ಯಕ್ರಮವನ್ನು ಅರ್ಥಪೂರ್ಣವಾಗಿ ಮತ್ತು ಯಶಸ್ವಿಯಾಗಿ ನಡೆಸಲು ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರು ಶ್ರಮಿಸಬೇಕು ಎಂದು ಕರೆ ನೀಡಿದರು.

ಸಭೆಯಲ್ಲಿ ಕೆಪಿಸಿಸಿ ಉಪಾಧ್ಯಕ್ಷರಾದ ಎಂ. ನಾರಾಯಣಸ್ವಾಮಿ, ಮೈಸೂರು ನಗರ ಕಾಂಗ್ರೆಸ್ ಸಮಿತಿ ಅಧ್ಯಕ್ಷರಾದ ಆರ್. ಮೂರ್ತಿ, ಮೈಸೂರು ಜಿಲ್ಲಾ ಗ್ರಾಮಾಂತರ ಕಾಂಗ್ರೆಸ್ ಸಮಿತಿ ಅಧ್ಯಕ್ಷರಾದ ಬೀರಿಹುಂಡಿ ಬಸವಣ್ಣ ಹಾಗೂ ನಿಕಟಪೂರ್ವ ಅಧ್ಯಕ್ಷರಾದ ಡಾ. ಬಿ.ಜೆ. ವಿಜಯ್ ಕುಮಾರ್ ಸೇರಿದಂತೆ ಪಕ್ಷದ ಮುಖಂಡರು ಉಪಸ್ಥಿತರಿದ್ದರು.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments