Homeಕರ್ನಾಟಕಪ್ಯಾಲೆಸ್ಟಿನ್ ಪರ ಕಾರ್ಯಕ್ರಮಕ್ಕೆ ಪೊಲೀಸರ ತಡೆ | ಮುಖ್ಯಮಂತ್ರಿ ವಿಷಾದ, ಗೊಂದಲಕ್ಕೆ ತೆರೆ

ಪ್ಯಾಲೆಸ್ಟಿನ್ ಪರ ಕಾರ್ಯಕ್ರಮಕ್ಕೆ ಪೊಲೀಸರ ತಡೆ | ಮುಖ್ಯಮಂತ್ರಿ ವಿಷಾದ, ಗೊಂದಲಕ್ಕೆ ತೆರೆ

ರಂಗಶಂಕರದಲ್ಲಿ ಪ್ಯಾಲೆಸ್ಟಿನ್ ಪರವಾಗಿ ಆಯೋಜನೆಯಾಗಿದ್ದ ಕಿರು ನಾಟಕ ಮತ್ತು ಕವನ ವಾಚನ ಹಾಗೂ ಖ್ಯಾತ ರಂಗಭೂಮಿ ಕಲಾವಿದೆ, ಗಾಯಕಿ ಎಂಡಿ ಪಲ್ಲವಿ ಸೇರಿದಂತೆ ಹಲವು ಕಲಾವಿದರ ಕಾರ್ಯಕ್ರಮಕ್ಕೆ ಪೊಲೀಸ್ ಅನುಮತಿ ನಿರಾಕರಣೆಗೆ ಭಾರೀ ವಿರೋಧ ವ್ಯಕ್ತವಾಗಿತ್ತು. ಈ ವಿಚಾರವಾಗಿ ಪೊಲೀಸರ ಕ್ರಮಕ್ಕೆ ಸಿಎಂ ಸಿದ್ದರಾಮಯ್ಯ ಸಿಟ್ಟಾಗಿದ್ದು, ಸ್ಪಷ್ಟನೆ ನೀಡಿದ್ದಾರೆ.

ಈ ಕುರಿತಾಗಿ ಶುಕ್ರವಾರ ಪತ್ರಿಕಾ ಪ್ರಕಟಣೆ ಹೊರಡಿಸಿರುವ ಸಿಎಂ ಸಿದ್ದರಾಮಯ್ಯ, “ರಾಜ್ಯ ಸರ್ಕಾರವು ಸಂವಿಧಾನದ ಮೂಲ ಆಶಯಗಳಡಿ ನಡೆಸುವ ಚಟುವಟಿಕೆಗಳನ್ನು ನಿಲ್ಲಿಸುವ ಅಥವಾ ತಡೆಯುವ ಯಾವುದೇ ಕೆಲಸವನ್ನು ಮಾಡುವುದಿಲ್ಲ” ಎಂದು ಸ್ಪಷ್ಟನೆ ನೀಡಿದ್ದಾರೆ.

“ಕಥೆ, ಕಾವ್ಯ, ನಾಟಕ, ಸಂಗೀತ ಮುಂತಾದ ಸೃಜನಶೀಲ ಅಭಿವ್ಯಕ್ತಿಯನ್ನು ಯಾವುದೇ ಕಾರಣಕ್ಕೂ ತಡೆಯುವ ಕೆಲಸವನ್ನು ಮಾಡುವುದಿಲ್ಲ. ನಾವು ಸಂವಿಧಾನದ ಮೂಲಸ್ಫೂರ್ತಿಗೆ ವಿರುದ್ಧವಾಗದಂತೆ ನಡೆಯುವ ಎಲ್ಲ ಅಭಿವ್ಯಕ್ತಿಗಳ ಪರವಾಗಿದ್ದೇವೆ. ಕೆಳಹಂತದ ಪೊಲೀಸ್ ಅಧಿಕಾರಿಗಳ ತಪ್ಪು ತಿಳಿವಳಿಕೆಯ ಕಾರಣಕ್ಕೆ ಒಂದೆರಡು ಅನಾವಶ್ಯಕವಾದ ಗೊಂದಲಗಳು ನಿರ್ಮಾಣವಾಗಿವೆ ಎಂಬುದು ನನ್ನ ಗಮನಕ್ಕೆ ಬಂದಿದೆ. ಈ ಕುರಿತು ಯಾವುದೇ ಗೊಂದಲಗಳು ಸೃಷ್ಟಿಯಾಗದಂತೆ ನೋಡಿಕೊಳ್ಳಬೇಕೆಂದು ನಾನು ಪೊಲೀಸ್ ಮಹಾನಿರ್ದೇಶಕರಿಗೆ ಸೂಕ್ತ ಸೂಚನೆಗಳನ್ನು ನೀಡಿರುತ್ತೇನೆ” ಎಂದು ತಿಳಿಸಿದ್ದಾರೆ.

“ಸಂವಿಧಾನದ ಆಶಯಗಳನ್ನು ಎತ್ತಿ ಹಿಡಿಯುವ ಕೆಲಸಗಳ ಜೊತೆ ಸರ್ಕಾರವು ಸದಾ ನಿಲ್ಲುತ್ತದೆ ಎಂಬುದನ್ನು ತಿಳಿಸಬಯಸುತ್ತೇನೆ. ಆದ್ದರಿಂದ ಯಾವುದೇ ರೀತಿಯ ಗೊಂದಲಗಳನ್ನು ಸೃಷ್ಟಿಸಬಾರದೆಂದು, ಅಭಿವ್ಯಕ್ತಿ ಸ್ವಾತಂತ್ರ್ಯದ ವಿಚಾರದಲ್ಲಿ ಆತಂಕಿತರಾಗಬಾರದೆಂದು ನಾಡಬಾಂಧವರಲ್ಲಿ ವಿನಂತಿಸುತ್ತೇನೆ” ಎಂದು ತಿಳಿಸಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments