ಸಂಸತ್ ಕಲಾಪದಿಂದ ವಿರೋಧ ಪಕ್ಷದ ಸದಸ್ಯರ ಅಮಾನತು ಖಂಡಿಸಿ ಕೆಪಿಸಿಸಿ ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ಶುಕ್ರವಾರ ಕಾಂಗ್ರೆಸ್ ಪ್ರತಿಭಟನೆ ನಡೆಸಿತು.
ಕೆಪಿಸಿಸಿ ಅಧ್ಯಕ್ಷರೂ ಡಿಸಿಎಂ ಡಿ ಕೆ ಶಿವಕುಮಾರ್ ಅವರು ಪ್ರತಿಭಟನೆಯಲ್ಲಿ ಭಾಗಿಯಾಗಿ ಮಾತನಾಡಿ, “ದೇಶದ ಸಂಸತ್ತಿನ ಮೇಲೆ ನಡೆದ ದಾಳಿ ವಿಚಾರವಾಗಿ ಪ್ರಧಾನಮಂತ್ರಿಗಳು ಹಾಗೂ ಗೃಹ ಸಚಿವರಿಂದ ಉತ್ತರ ಕೇಳಿದ ಕಾರಣಕ್ಕೆ ವಿರೋಧ ಪಕ್ಷಗಳ 146 ಸಂಸದರನ್ನು ಸದನದಿಂದ ಅಮಾನತು ಮಾಡಲಾಗಿದೆ” ಎಂದು ಕಿಡಿಕಾರಿದರು.
“ಪ್ರಜಾಪ್ರಭುತ್ವ ಹಾಗೂ ಅದರ ಮೌಲ್ಯಗಳನ್ನು ಉಳಿಸುವ ಉದ್ದೇಶದಿಂದ ಸರ್ಕಾರದ ವೈಫ್ಯಲ್ಯ ಹಾಗೂ ಭದ್ರತಾ ಲೋಪದ ಬಗ್ಗೆ ಸದನದಲ್ಲಿ ಚರ್ಚೆಗೆ ಆಗ್ರಹಿಸಲಾಯಿತು. ರಾಹುಲ್ ಗಾಂಧಿ, ಸೋನಿಯಾ ಗಾಂಧಿ, ಮಲ್ಲಿಕಾರ್ಜುನ ಖರ್ಗೆ ಅವರನ್ನು ಹೊರತು ಪಡಿಸಿ ಉಳಿದವರನ್ನು ಅಮಾನತು ಮಾಡಿದ್ದಾರೆ” ಎಂದರು.
“ನೂತನ ಸಂಸತ್ ಭವನದಲ್ಲಿ ವಿರೋಧ ಪಕ್ಷದ ಸಂಸದರ ವಿರುದ್ಧದ ದಾಳಿ, ಕೇಂದ್ರ ಸರ್ಕಾರದ ದುರಾಡಳಿತ, ಸಂವಿಧಾನ ವಿರೋಧಿ ನೀತಿ ಖಂಡಿಸಿ ಸಂಸತ್ ಆವರಣದ ಮಹಾತ್ಮ ಗಾಂಧಿ ಅವರ ಪ್ರತಿಮೆ ಮುಂದೆ ನಮ್ಮ ಸಂಸತ್ ಸದಸ್ಯರು ಪ್ರತಿಭಟನೆ ಮಾಡಿದ್ದಾರೆ. ದೇಶದಾದ್ಯಂತ ಕಾಂಗ್ರೆಸ್ ಪಕ್ಷ ಪ್ರತಿಭಟನೆ ನಡೆಸುತ್ತಿದೆ” ಎಂದು ಹೇಳಿದರು.
“ಸ್ಪೀಕರ್ ಅವರ ಬಳಿ ಕಾಗದ ಹರಿದಿದ್ದಾರೆ ಎಂದು ವಿರೋಧ ಪಕ್ಷಗಳ ಕೆಲವು ಸದಸ್ಯರ ನಡೆಯನ್ನು ಹಕ್ಕುಬಾಧ್ಯತಾ ಸಮಿತಿಯ ಪರಿಶೀಲನೆಗೆ ಒಳಪಡಿಸಿದ್ದಾರೆ. ಆಮೂಲಕ ದೇಶದಲ್ಲಿ ಪ್ರಜಾಪ್ರಭುತ್ವ ವ್ಯವಸ್ಥೆ ಇದೆಯೋ ಇಲ್ಲವೋ ಎಂಬ ಪ್ರಶ್ನೆಯನ್ನು ನಾವು ಜನರ ಮುಂದೆ ಇಡಬೇಕಿದೆ” ಎಂದರು.
“ವಿರೋಧ ಪಕ್ಷಗಳ ಸಂಸತ್ ಸದಸ್ಯರನ್ನು ಅಮಾನತು ಮಾಡಿ ತಮಗೆ ಬೇಕಾದ ಮಸೂದೆ ಮಂಡನೆ ಮಾಡಿ ಅನುಮೋದನೆ ಪಡೆದಿರುವುದು ಪ್ರಜಾಪ್ರಭುತ್ವ ವ್ಯವಸ್ಥೆಗೆ ದೊಡ್ಡ ಅಪಮಾನ. ಈ ವಿಚಾರವಾಗಿ ಜನರ ಗಮನ ಸೆಳೆಯಲು ದೇಶದಾದ್ಯಂತ ಸಾಂಕೇತಿಕ ಪ್ರತಿಭಟನೆ ಹಮ್ಮಿಕೊಂಡಿದ್ದೇವೆ. ನಾವು ಪ್ರಜಾಪ್ರಭುತ್ವ ಉಳಿಸಬೇಕು. ಲೋಕಸಭೆ ಚುನಾವಣೆವರೆಗೂ ನಮ್ಮ ಸರ್ಕಾರದ ಜನಪರ ಕಾರ್ಯಕ್ರಮ ಹಾಗೂ ಕೇಂದ್ರ ಸರ್ಕಾರದ ಜನವಿರೋಧಿ ಧೋರಣೆ, ಕೇಂದ್ರ ಸರ್ಕಾರದ ವೈಫಲ್ಯವನ್ನು ಜನರಿಗೆ ತಲುಪಿಸುವ ಕೆಲಸ ಮಾಡುತ್ತೇವೆ” ಎಂದು ಹೇಳಿದರು.
ಕೆಪಿಸಿಸಿ ಕಾರ್ಯಾಧ್ಯಕ್ಷ ಸಲೀಮ್ ಅಹ್ಮದ್, ಮಾಜಿ ಸಚಿವ ಎಚ್ ಎಂ ರೇವಣ್ಣ, ಶಾಸಕ ಪ್ರಸಾದ್ ಅಬ್ಬಯ್ಯ, ಎಂಎಲ್ಸಿ ಯು ಬಿ ವೆಂಕಟೇಶ್, ಮಾಜಿ ಸಂಸದ ಉಗ್ರಪ್ಪ, ಮಾಜಿ ಮೇಯರ್ ಹುಚ್ಚಪ್ಪ ಮತ್ತಿತರರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.